ಕೃಷಿ ಸೊಸೈಟಿ ಚುನಾವಣೆಗೆ ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್

KannadaprabhaNewsNetwork |  
Published : Apr 05, 2025, 12:48 AM IST
4ಕೆಎಂಎನ್ ಡಿ24 | Kannada Prabha

ಸಾರಾಂಶ

ತಾಲೂಕಿನ ಬ್ರಹ್ಮದೇವರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ 12 ಮಂದಿ ನಿರ್ದೇಶಕರ ಸ್ಥಾನಗಳಿಗೆ ಏ.13ರಂದು ನಡೆಯುವ ಚುನಾವಣೆಗೆ ಸಾಲಗಾರರಲ್ಲದ ಕ್ಷೇತ್ರದ ಅಭ್ಯರ್ಥಿಯಾಗಿ ಸಚಿವರ ಪುತ್ರ ಸಚಿನ್ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ನಾಗಮಂಗಲ

ಕೃಷಿ ಸಚಿವ ಎನ್ .ಚಲುವರಾಯಸ್ವಾಮಿ ಪುತ್ರ, ಚಿತ್ರನಟ ಸಚಿನ್ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಮೂಲಕ ರಾಜಕೀಯ ಅಖಾಡಕ್ಕೆ ಧುಮುಕಿದ್ದಾರೆ.

ಕ್ಷೇತ್ರದ ಶಾಸಕರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರ ಹುಟ್ಟೂರು ಬ್ರಹ್ಮದೇವರಹಳ್ಳಿಯಿಂದಲೇ ತಮ್ಮ ಪುತ್ರ ರಾಜಕೀಯ ಪ್ರವೇಶಿಸಲು ಸಿದ್ಧತೆ ನಡೆಸಿದ್ದು, ಇದಕ್ಕಾಗಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿರ್ದೇಶಕ ಸ್ಥಾನಕ್ಕೆ ಪತ್ನಿ ಜೊತೆ ತೆರಳಿ ಸಚಿನ್ ನಾಮಪತ್ರ ಸಲ್ಲಿಸಿದ್ದಾರೆ. ಸಚಿನ್ ಗೆ ವಿಧಾನ ಪರಿಷತ್ ಮಾಜಿ ಸದಸ್ಯ ಅಪ್ಪಾಜಿಗೌಡ ಸೇರಿದಂತೆ ಹಲವು ಬೆಂಬಲಿಗರು, ಕಾಂಗ್ರೆಸ್ ಮುಖಂಡರು, ಸಚಿವರ ಆಪ್ತರು ಸಾಥ್ ನೀಡಿದ್ದಾರೆ.

ತಾಲೂಕಿನ ಬ್ರಹ್ಮದೇವರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ 12 ಮಂದಿ ನಿರ್ದೇಶಕರ ಸ್ಥಾನಗಳಿಗೆ ಏ.13ರಂದು ನಡೆಯುವ ಚುನಾವಣೆಗೆ ಸಾಲಗಾರರಲ್ಲದ ಕ್ಷೇತ್ರದ ಅಭ್ಯರ್ಥಿಯಾಗಿ ಸಚಿವರ ಪುತ್ರ ಸಚಿನ್ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಸಚಿನ್ , ಕಳೆದ ಕೆಲ ವರ್ಷಗಳಿಂದ ನಾನು ತಾಲೂಕಿನಲ್ಲಿ ತಂದೆ ಪರ ಪ್ರವಾಸ ಕೈಗೊಂಡು ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮೂಲಕ ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೇನೆ. ಅಧಿಕೃತವಾಗಿ ರಾಜಕೀಯಕ್ಕೆ ಮೊದಲ ಹೆಜ್ಜೆ ಇಟ್ಟಿದ್ದೇನೆ. ಅಪ್ಪ ಅನುಮತಿ ಕೂಡ ಕೊಟ್ಟಿದ್ದಾರೆ. ಎಲ್ಲರ ಬೆಂಬಲ, ಸಹಕಾರ ಕೋರುತ್ತೇನೆ ಎಂದರು.

ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರ ಒತ್ತಾಸೆಯಂತೆ ಇಂದು ಸಹಕಾರ ಸಂಘದ ಚುನಾವಣೆಗೆ ಸಾಲಗಾರರಲ್ಲದ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಣೆ ಮಾಡುತ್ತಿದ್ದೇನೆ. ಸಂಘದ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಸಾಲಗಾರರಲ್ಲದ ಕ್ಷೇತ್ರದ ಮತದಾರರು ನನ್ನನ್ನು ಬೆಂಬಲಿಸಿ ಹೆಚ್ಚು ಮತಗಳನ್ನು ಕೊಟ್ಟು ಈ ಚುನಾವಣೆಯಲ್ಲಿ ಗೆಲುವು ತಂದುಕೊಡಬೇಕೆಂದು ಮನವಿ ಮಾಡಿದರು.

ಈ ವೇಳೆ ಮಾಜಿ ಎಂಎಲ್‌ಸಿ ಎನ್.ಅಪ್ಪಾಜಿಗೌಡ, ಸಚಿವರ ಸಹೋದರ ಎನ್.ಲಕ್ಷ್ಮೀಕಾಂತ್, ಸಚಿನ್ ಪತ್ನಿ ಆಕಾಂಕ್ಷ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ಮುಖಂಡರಾದ ಸುನಿಲ್ ಲಕ್ಷ್ಮೀಕಾಂತ್, ಕೊಣನೂರು ಆನಂದ್, ಹನುಮಂತಯ್ಯ, ಡಿ.ಕೃಷ್ಣೇಗೌಡ, ತ್ಯಾಪೇನಹಳ್ಳಿ ಶ್ರೀನಿವಾಸ್, ಬಿ.ಎಂ.ಪ್ರಕಾಶ್, ಆರ್.ಕೃಷ್ಣೇಗೌಡ ಸೇರಿದಂತೆ ಕಾಂಗ್ರೆಸ್ ಪಕ್ಷದ ನೂರಾರು ಮಂದಿ ಕಾರ್ಯಕರ್ತರು ಇದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...