ನಾಗಮಂಗಲ: ತಾಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿ ಮಾಹಿತಿ ಪಡೆದುಕೊಂಡರು. ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥಸ್ವಾಮೀಜಿ ಜೊತೆಗೂಡಿ ವೈದ್ಯ ವಿದ್ಯಾರ್ಥಿಗಳ ತರಗತಿ, ಆಸ್ಪತ್ರೆಯ ತೀವ್ರ ನಿಗಾಘಟಕ ಸೇರಿದಂತೆ ವಿವಿಧ ವಾರ್ಡ್‌ಗಳ ವೀಕ್ಷಣೆ ಮಾಡಿದ ಸಚಿವರು, ಒಳರೋಗಿಗಳ ಆರೋಗ್ಯ ವಿಚಾರಿಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್, ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂಜಿ.ಶಿವರಾಂ ಸೇರಿದಂತೆ ಆಸ್ಪತ್ರೆಯ ಹಿರಿಯ ವೈದ್ಯರು ಮತ್ತು ಅಧಿಕಾರಿಗಳು ಸಾಥ್ ನೀಡಿದರು. ಇದಕ್ಕೂ ಮುನ್ನ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಭೇಟಿಕೊಟ್ಟ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶ್ರೀ ಕಾಲಭೈರವೇಶ್ವರಸ್ವಾಮಿ ಸೇರಿದಂತೆ ಕ್ಷೇತ್ರಾಧಿದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದುಕೊಂಡರು. ಬಳಿಕ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಕ್ಷೇತ್ರಕ್ಕೆ ಭೇಟಿ ಕೊಟ್ಟ ಸಚಿವರನ್ನು ಶ್ರೀಮಠದ ಸಂಪ್ರದಾಯದಂತೆ ನಿರ್ಮಲಾನಂದನಾಥಶ್ರೀಗಳು ಬರಮಾಡಿಕೊಂಡು ಗೌರವಿಸಿದರು.