ಹೊನ್ನಾಳಿ ತಾಲೂಕು ಅರಕೆರೆ ಗ್ರಾಮ ಪಂಚಾಯಿತಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ದಿಢೀರ್ ಭೇಟಿ ನೀಡಿ ಗ್ರಾಮದಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ.
- ಕೆರೆಗೆ ನೀರು ತುಂಬಿಸಲು, ಅರ್ಹ ಫಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಸೂಚನೆ
- - -
ಕನ್ನಡಪ್ರಭ ವಾರ್ತೆ ಹೊನ್ನಾಳಿ
ಹೊನ್ನಾಳಿ ತಾಲೂಕು ಅರಕೆರೆ ಗ್ರಾಮ ಪಂಚಾಯಿತಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ದಿಢೀರ್ ಭೇಟಿ ನೀಡಿ ಗ್ರಾಮದಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಹೊನ್ನಾಳಿ ಹಿರೇಕಲ್ಮಠದಲ್ಲಿ ಬುಧವಾರ ನಡೆದ ವಿವಿಧ ಕಾಮಗಾರಿಗಳ ಭೂಮಿ ಪೂಜೆ ಕಾರ್ಯಕ್ರಮದ ಉದ್ಘಾಟನೆಗೆ ಅಗಮಿಸಿದ್ದ ಅವರು, ದಾವಣಗೆರೆಗೆ ತೆರಳುವ ಮಾರ್ಗ ಮಧ್ಯೆ ಅಧಿಕಾರಿಗಳ ತಂಡದೊಂದಿಗೆ ಅರಕೆರೆಯ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಭೇಟಿ ನೀಡಿದರು.
ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಜರಾತಿ, ಕೈಗೊಂಡಿರುವ ಕಾಮಗಾರಿಗಳ ಕುರಿತು ಸಚಿವರು ಮಾಹಿತಿ ಪಡೆದರು. ಅಮೃತ ಸರೋವರ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಗ್ರಾಮದ ಕೆರೆ ಪ್ರದೇಶಕ್ಕೆ ಭೇಟಿ ನೀಡಿದರು. ಈ ಕೆರೆಗೆ ತಿಂಗಳೊಳಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಗ್ರಾಮದಲ್ಲಿನ ಕೆಲ ಮನೆಗಳಿಗೆ ಭೇಟಿ ನೀಡಿದ ಅವರು, ಅರ್ಹ ಫಲಾನುಭವಿಗಳಿಗೆ ವಸತಿ ಯೋಜನೆಯಡಿ ಪಕ್ಕಾ ಮನೆ ನಿರ್ಮಿಸಿಕೊಳ್ಳಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆರೆ ಅಭಿವೃದ್ಧಿ, ರಸ್ತೆ, ಚರಂಡಿ ವ್ಯವಸ್ಥೆಗಳನ್ನು ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಮಳೆ ಕೊರತೆ ನಡುವೆಯೂ ಯಾವುದೇ ಗ್ರಾಮಕ್ಕೆ ಕುಡಿಯುವ ನೀರು ಸಮಸ್ಯೆ ಆಗದಂತೆ ಪರ್ಯಾಯ ಮೂಲಗಳಿಂದ ನೀರು ಪೂರೈಕೆಗೆ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಈ ಸಂದರ್ಭ ಅಧಿಕಾರಿಗಳಿಗೆ ತಿಳಿಸಿದರು.
ಗ್ರಾಮಕ್ಕೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ ಅವರನ್ನು ಸನ್ಮಾನಿಸಲಾಯಿತು. ಸಚಿವರೊಂದಿಗೆ ಹೊನ್ನಾಳಿ ಕ್ಷೇತ್ರ ಶಾಸಕ ಡಿ.ಜಿ.ಶಾಂತನಗೌಡ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠಲ್ ರಾವ್, ಗ್ರಾ.ಪಂ. ಮಾಜಿ ಅಧ್ಯಕ್ಷ ರಂಗಪ್ಪ, ಕಾಂಗ್ರೆಸ್ ಪ್ರಚಾರ ಸಮಿತಿ ತಾಲೂಕು ಅಧ್ಯಕ್ಷ ಮಧುಗೌಡ, ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಶಿವನಗೌಡ, ಮುಖಂಡ ಬಸವನಗೌಡ, ವೆಂಕಟೇಶ್, ಮಾಲತೇಶ್, ಗ್ರಾ.ಪಂ. ಸಿಬ್ಬಂದಿ, ಗ್ರಾಮದ ಇತರೇ ಮುಖಂಡರು ಇದ್ದರು.
- - -
-2ಎಚ್.ಎಲ್.ಐ2: ಹೊನ್ನಾಳಿ ತಾಲೂಕಿನ ಆರಕೆರೆ ಗ್ರಾಪಂ ಕಾರ್ಯಾಲಯದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಅವರನ್ನು ಸನ್ಮಾನಿಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.