10 ದಿನದೊಳಗೆ ಲಿಖಿತ ವರದಿ ನೀಡುವಂತೆ ಉಸ್ತುವಾರಿ ಸಚಿವ ಸೂಚನೆ

KannadaprabhaNewsNetwork |  
Published : Jun 27, 2025, 12:48 AM IST
ಚಿತ್ರ :  26ಎಂಡಿಕೆ8 : ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಮಾತನಾಡಿದರು.  | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಇನ್ನೂ 40 ದಿನಗಳ ಕಾಲ ಹೆಚ್ಚಿನ ಎಚ್ಚರ ವಹಿಸಬೇಕಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಅಂಗನವಾಡಿ, ಶಾಲೆ, ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯ ಕಟ್ಟಡಗಳ ಸುಸ್ಥಿತಿ ಬಗ್ಗೆ 10 ದಿನದೊಳಗೆ ಲಿಖಿತ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು ಅವರು ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಮಳೆ ಹಾನಿ ಬಗ್ಗೆ ಗುರುವಾರ ಮಾಹಿತಿ ಪಡೆದು ಸಚಿವರು ಮಾತನಾಡಿದರು.

ಜಿಲ್ಲೆಯಲ್ಲಿ ಇನ್ನೂ 40 ದಿನಗಳ ಕಾಲ ಹೆಚ್ಚಿನ ಎಚ್ಚರ ವಹಿಸಬೇಕಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.

ಅಧಿಕಾರಿಗಳು ತಮ್ಮ ಕ್ಷೇತ್ರ ವ್ಯಾಪ್ತಿಯ ಸ್ಥಳಕ್ಕೆ ಆಗಾಗ ಭೇಟಿ ನೀಡಬೇಕು. ಇದರಿಂದ ಸಮಸ್ಯೆ ಇದ್ದಲ್ಲಿ ಪರಿಹರಿಸಲು ಸಾಧ್ಯ. ಮುಂದಿನ ದಿನಗಳಲ್ಲಿ ಹೆಚ್ಚಿನ ಎಚ್ಚರ ವಹಿಸಬೇಕು. ಸಾರ್ವಜನಿಕರಿಗೆ ತೊಂದರೆ ಆಗದಂತೆ ಗಮನಹರಿಸಬೇಕು. ದೂರು ಬಾರದಂತೆ ಮುನ್ನೆಚ್ಚರ ವಹಿಸುವುದು ಅತ್ಯಗತ್ಯ ಎಂದರು.

ಪ್ರಾಕೃತಿಕ‌ ವಿಕೋಪ ನಿರ್ವಹಣೆಗೆ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ 37 ಕೋಟಿ ಹಣವಿದೆ. ಹಾಗೆಯೇ ತಹಸೀಲ್ದಾರರ ಬಳಿ 2 ಕೋಟಿ ಹಣ ಇದೆ. ಮನೆ ಮತ್ತಿತರ ಹಾನಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.

ಈ ಬಾರಿಯೂ ಹಣ ಬಿಡುಗಡೆ ಮಾಡಲಾಗುವುದು:

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಕಳೆದ ಬಾರಿ ಗ್ರಾ.ಪಂ.ಗಳಿಗೂ ಹಣ ನೀಡಲಾಗಿತ್ತು, ಈ ಬಾರಿಯೂ ಹಣ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಕಳೆದ ಮೇ ಕೊನೆ ವಾರದಿಂದ ಸುರಿದ ವ್ಯಾಪಕ ಮಳೆಗೆ ವಿದ್ಯುತ್, ರಸ್ತೆ, ಸೇತುವೆ, ಮನೆ ಸೇರಿದಂತೆ ವಿವಿಧ ರೀತಿಯ ಹಾನಿಯಾಗಿದ್ದು, ವಿದ್ಯುತ್ ವ್ಯತ್ಯಯವನ್ನು ಆಯಾಯ ಸಂದರ್ಭದಲ್ಲಿಯೇ ಸರಿಪಡಿಸುವಂತಾಗಬೇಕು. ಆ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಂಡಿರಬೇಕು ಎಂದು ಸಚಿವರು ಸಲಹೆ ನೀಡಿದರು.

ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು:

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಮಳೆಗಾಲದಲ್ಲಿ ಕರ್ತವ್ಯ ನಿರ್ವಹಿಸುವ ಲೈನ್ ಮ್ಯಾನ್ ಹಾಗೂ ಗ್ಯಾಂಗ್ ಮನ್ ಗಳಿಗೆ ರೈನ್ ಕೋಟ್ ಸೇರಿದಂತೆ ಅಗತ್ಯ ಉಪಕರಣ ನೀಡಬೇಕು. ಜೊತೆಗೆ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ತಾಕೀತು ಮಾಡಿದರು.

ರಾತ್ರಿ ವೇಳೆ ಮಡಿಕೇರಿ ನಗರದಲ್ಲಿ 8 ಗಂಟೆಯಾದರೂ ವಿದ್ಯುತ್ ಪೂರೈಕೆ ಇಲ್ಲ ಎಂಬ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಆದ್ದರಿಂದ ಈ ಬಗ್ಗೆ ಎಚ್ಚರ ವಹಿಸುವಂತೆ ಶಾಸಕರು ಸೂಚಿಸಿದರು.

ಲೋಕೋಪಯೋಗಿ, ಗ್ರಾಮೀಣ ರಸ್ತೆ ಸರಿಪಡಿಸುವಂತಾಗಬೇಕು. ಸಾರಿಗೆ ಸಂಚಾರಕ್ಕೆ ಯಾವುದೇ ರೀತಿ ವ್ಯತ್ಯಯ ಆಗದಂತೆ ಗಮನಹರಿಸುವಂತೆ ಶಾಸಕರು ನಿರ್ದೇಶನ ನೀಡಿದರು.

ಶಾಸಕರಾದ ಡಾ.ಮಂತರ್ ಗೌಡ ಅವರು ಮಳೆಗಾಲದಲ್ಲಿಯೂ ಪ್ರವಾಸಿಗರು ಜಿಲ್ಲೆಗೆ ಹೆಚ್ವಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಆದ್ದರಿಂದ ಪ್ರವಾಸಿ ಸ್ಥಳಗಳಲ್ಲಿ ಸೂಚನಾ ಫಲಕ ಅಳವಡಿಸಬೇಕು. ಜತೆಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ನಿರ್ದೇಶನ ನೀಡಿದರು.

ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ವಿವಿಧ ಇಲಾಖೆ ಅಧಿಕಾರಿಗಳು ಪ್ರಾಕೃತಿಕ ವಿಕೋಪ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.

PREV

Recommended Stories

ಸಂಪುಟ ಪುನರ್‌ ರಚನೆ ಸುಳಿವು : ದಲಿತ ಸಚಿವರ ಸಭೆ!
ಶೂದ್ರ ಶ್ರೀನಿವಾಸ್‌ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ