ಸಚಿವರಿಂದ ನೂತನ ಕ್ಯಾನ್ಸರ್ ಆಸ್ಪತ್ರೆ ಕಟ್ಟಡ ಪರಿಶೀಲನೆ

KannadaprabhaNewsNetwork |  
Published : Oct 16, 2025, 02:00 AM IST
9999 | Kannada Prabha

ಸಾರಾಂಶ

ಕ್ಯಾನ್ಸರ್ ಆಸ್ಪತ್ರೆಯನ್ನು ರೋಗಿಗಳ ಚಿಕಿತ್ಸೆಗೆ ಕಾರ್ಯಾಚರಣೆಗೊಳಿಸಲು ಪ್ರಥಮ ಹಂತದಲ್ಲಿ ಸುಮಾರು 41 ಕೋಟಿ ರು. ವೆಚ್ಚದಲ್ಲಿ ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗುವುದು.

ಕನ್ನಡಪ್ರಭ ವಾರ್ತೆ ತುಮಕೂರುವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಮಂಗಳವಾರ ಸಂಜೆ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಕ್ಯಾನ್ಸರ್ ಆಸ್ಪತ್ರೆ (ಫೆರಿಫೆರಲ್ ಕ್ಯಾನ್ಸರ್ ಸೆಂಟರ್ (ಆಂಕಾಲಜಿ ವಿಂಗ್)) ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸುಮಾರು 69.96 ಕೋಟಿ ರು.ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಿರುವ 100 ಹಾಸಿಗೆಗಳುಳ್ಳ ಈ ನೂತನ ಕ್ಯಾನ್ಸರ್ ಆಸ್ಪತ್ರೆಯ ಕಟ್ಟಡದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 7ರಂದು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ತಿಳಿಸಿದರು. ಕ್ಯಾನ್ಸರ್ ಆಸ್ಪತ್ರೆಯನ್ನು ರೋಗಿಗಳ ಚಿಕಿತ್ಸೆಗೆ ಕಾರ್ಯಾಚರಣೆಗೊಳಿಸಲು ಪ್ರಥಮ ಹಂತದಲ್ಲಿ ಸುಮಾರು 41 ಕೋಟಿ ರು. ವೆಚ್ಚದಲ್ಲಿ ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗುವುದು. ಉಪಕರಣಗಳ ಅಳವಡಿಕೆಗೆ ನಾಲ್ಕೈದು ತಿಂಗಳು ಸಮಯ ಬೇಕಾಗಬಹುದು ಎಂದರಲ್ಲದೆ, ಉಪಕರಣ ಖರೀದಿಗಾಗಿ ಟೆಂಡರ್ ಕರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪ್ರತೀ ದಿನ ಸುಮಾರು 20 ರಿಂದ 30 ಕ್ಯಾನ್ಸರ್ ರೋಗಿಗಳು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ಭೇಟಿ ನೀಡುತ್ತಿದ್ದು, ಈ ರೋಗಿಗಳಿಗೆ ಕಿಮೋಥೆರಪಿ, ರೇಡಿಯೋ ಥೆರಪಿ ಹಾಗೂ ಆಂಕೊ ಸರ್ಜರಿ ಚಿಕಿತ್ಸೆಗಾಗಿ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಪ್ರತೀ ದಿನ ರಾಜ್ಯವಲ್ಲದೆ ಇತರೆ ರಾಜ್ಯದ ಕ್ಯಾನ್ಸರ್ ರೋಗಿಗಳೂ ಚಿಕಿತ್ಸೆಗೆ ಬರುತ್ತಿರುವುದರಿಂದ ಕಿದ್ವಾಯಿ ಆಸ್ಪತ್ರೆಯ ಒತ್ತಡ ಕಡಿಮೆ ಮಾಡಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿ 24 ಸರ್ಕಾರಿ ಮೆಡಿಕಲ್ ಕಾಲೇಜುಗಳಿದ್ದು ಬಡವರು, ಸಾಮಾನ್ಯರಿಗೆ ಉಚಿತ ಹಾಗೂ ಕಡಿಮೆ ದರದಲ್ಲಿ ಗುಣಮಟ್ಟದ ವೈದ್ಯಕೀಯ ಸೌಲಭ್ಯ ನೀಡುವ ಉದ್ದೇಶದಿಂದ ಪ್ರತೀ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜನ್ನು ತೆರೆಯಲು ಯೋಜಿಸಲಾಗಿದೆ ಎಂದು ಹೇಳಿದರು.ಮುಂದಿನ 5 ವರ್ಷಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿಯೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ, ಟ್ರಾಮಾ ಕೇರ್ ಸೆಂಟರ್ ನಿರ್ಮಿಸಲು ನಿರ್ಣಯಿಸಲಾಗಿದೆ. ಗುಲ್ಬರ್ಗಾ, ರಾಜಯಚೂರಿನಲ್ಲಿ ಈಗಾಗಲೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಾಗಿದ್ದು, ಬಳ್ಳಾರಿಯಲ್ಲಿ ಉದ್ಘಾಟನೆಗೆ ಸಿದ್ದವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಕಳೆದ ಆಯವ್ಯಯದಲ್ಲಿ ಮಂಡಿಸಲಾಗಿದೆ ಎಂದು ತಿಳಿಸಿದರು. ಕ್ಯಾನ್ಸರ್ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ಪ್ರತೀ ಜಿಲ್ಲೆಯಲ್ಲಿಯೂ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಕಲ್ಬುರ್ಗಿಯಲ್ಲಿ ಈಗಾಗಲೇ ನಿರ್ಮಿಸಿರುವ 100 ಹಾಸಿಗೆಗಳುಳ್ಳ ಕ್ಯಾನ್ಸರ್ ಆಸ್ಪತ್ರೆ ಕಾರ್ಯ ನಿರ್ವಹಿಸುತ್ತಿದೆ. ಬಳ್ಳಾರಿ, ಬೀದರ್, ರಾಯಚೂರಿಗೂ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ದೊರೆತಿದೆ. ಶಿವಮೊಗ್ಗ, ಮಂಡ್ಯದಲ್ಲಿ ಕಟ್ಟಡ ಪೂರ್ಣಗೊಂಡಿದ್ದು, ಶೀಘ್ರದಲ್ಲಿ ಲೋಕಾರ್ಪಣೆಗೊಳಿಸಲಾಗುವುದು ಎಂದರು. ಮುಖ್ಯಮಂತ್ರಿಗಳು ನವೆಂಬರ್ 7ರಂದು ನಗರದಲ್ಲಿ ಕ್ಯಾನ್ಸರ್ ಆಸ್ಪತ್ರೆಯೊಂದಿಗೆ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ನರ್ಸಿಂಗ್ ಕಾಲೇಜು ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಕ್ಯಾನ್ಸರ್ ಆಸ್ಪತ್ರೆಗೆ ವೈದ್ಯಕೀಯ ಉಪಕರಣಗಳೊಂದಿಗೆ ಅಗತ್ಯ ಸಿಬ್ಬಂದಿಗಳ ನೇಮಕಕ್ಕೆ ಕ್ರಮವಹಿಸಲಾಗುವುದು ಎಂದರು. ಹೃದ್ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ರಾಜ್ಯದ ಹಲವಾರು ಕಡೆ ಜಯದೇವ ಹೃದ್ರೋಗ ಸಂಸ್ಥೆಯನ್ನು ಸ್ಥಾಪಿಸಲಾಗಿದ್ದು, ಸಂಸ್ಥೆಯು ಗುಲ್ಬರ್ಗಾ, ಮೈಸೂರಿನಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದೆ. ಹುಬ್ಬಳ್ಳಿಯಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿದ್ದು, 1 ವರ್ಷದೊಳಗೆ ಪೂರ್ಣಗೊಳ್ಳಲಿದೆ ಎಂದರು. ರಾಜ್ಯದ ಹೃದ್ರೋಗಿಗಳ ಚಿಕಿತ್ಸೆಗಾಗಿ ಬಳಸುವ ಉಪರಕಣಗಳುಳ್ಳ ಕ್ಯಾಥ್‌ಲ್ಯಾಬ್‌ಗಳನ್ನು ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಾಚರಿಸಲು ಕ್ರಮ ಕೈಗೊಳ್ಳಲಾಗುವುದು. ಖಾಸಗಿ ಆಸ್ಪತ್ರೆಗಳಿಗಿಂತ ಸರ್ಕಾರಿ ಆಸ್ಪತ್ರೆಯಲ್ಲಿ ಜನರಿಗೆ ಉತ್ತಮ ಚಿಕಿತ್ಸೆ ನೀಡುವುದೇ ನಮ್ಮ ಸರ್ಕಾರದ ಉದ್ದೇಶ ಎಂದು ಹೇಳಿದರು. ಜಿಲ್ಲಾಸ್ಪತ್ರೆ ಆವರಣದಲ್ಲಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳ ಬೋಧನೆಗೆ ಅನುವಾಗುವಂತೆ ಕಟ್ಟಡದ ವ್ಯವಸ್ಥೆ ಮಾಡಲಾಗುವುದು. ಗ್ಯಾಸ್ಟ್ರೋ ಎಂಟ್ರಾಲಜಿ ವ್ಯವಸ್ಥೆಯನ್ನು ಎಲ್ಲಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕಲ್ಪಿಸಲು ಯೋಜಿಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಪ್ರತ್ಯೇಕವಾಗಿ ಇನ್‌ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋಎಂಟ್ರಾಲಜಿ ಕೇಂದ್ರವನ್ನು ತೆರೆಯಲಾಗಿದ್ದು, ಈ ಕೇಂದ್ರದಲ್ಲಿ ಉಚಿತವಾಗಿ ಯಕೃತ್ತಿನ ಕಸಿ ಮಾಡಲಾಗುತ್ತಿದೆ. ಇಡೀ ದೇಶದಲ್ಲಿ ಯಾವುದೇ ಸರ್ಕಾರಿ ಆರೋಗ್ಯ ಸಂಸ್ಥೆಯಲ್ಲಿ ಇಂತಹ ವ್ಯವಸ್ಥೆಯಿಲ್ಲ. ನಮ್ಮ ರಾಜ್ಯದಲ್ಲಿ ಈ ಸೌಲಭ್ಯವಿದೆ ಎಂದು ತಿಳಿಸಿದರು. ನಂತರ ನೂತನವಾಗಿ ನಿರ್ಮಾಣಗೊಂಡಿರುವ ಫೆರಿಫೆರಲ್ ಕ್ಯಾನ್ಸರ್ ಸೆಂಟರ್ (ಆಂಕಾಲಜಿ ವಿಂಗ್) ಕೇಂದ್ರದ ನೀಲನಕ್ಷೆಯನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಜಿ.ಬಿ. ಜ್ಯೋತಿ ಗಣೇಶ್ ಹಾಗೂ ಸುರೇಶ್ ಗೌಡ, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕ ಸುಜಾತ ರಾಥೋಡ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಸ್ಗರ್ ಬೇಗ್, ಕಿದ್ವಾಯಿ ಆಸ್ಪತ್ರೆಯ ಡಾ. ನವೀನ್, ಇಂಜಿನಿಯರ್ ಚಂದ್ರು, ಸೇರಿದಂತೆ ಮತ್ತಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಸ್ಟೆಲ್ ಮಕ್ಕಳಿಗೆ ಹೊಸ ಜಾತಿ ಪ್ರಮಾಣಪತ್ರ ಶಾಕ್‌
₹400 ಕೋಟಿ ಇದ್ದ 2 ಕಂಟೇನರ್‌ ಲಾರಿಗಳೇ ಬೆಳಗಾವೀಲಿ ನಾಪತ್ತೆ!