ಹಾಸನಾಂಬೆ ಉತ್ಸವಕ್ಕೆ ಸಚಿವ ಕೆ.ಎಸ್.ಬಸವಂತಪ್ಪ ಚಾಲನೆ

KannadaprabhaNewsNetwork |  
Published : Oct 30, 2026, 02:00 AM IST
ಕ್ಯಾಪ್ಷನ29ಕೆಡಿವಿಜಿ38, 39 ಶ್ರೀ ಹಾಸನಾಂಬೆ ದೇವಿ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಸಂಭ್ರಮಕ್ಕೆ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಚಾಲನೆ ನೀಡಿದರು. | Kannada Prabha

ಸಾರಾಂಶ

ಹಾಸನದ ವಿಶ್ವವಿಖ್ಯಾತ ಶ್ರೀ ಹಾಸನಾಂಬೆ ದೇವಿ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಸಂಭ್ರಮಕ್ಕೆ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಚಾಲನೆ ನೀಡಿದರು. ಉತ್ಸವದ ಅಂಗವಾಗಿ ಆಯೋಜಿಸಿರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ರಂಗೋಲಿ ಸ್ಪರ್ಧೆ ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಚಾಲನೆ ನೀಡುವ ಮೂಲಕ ಜಾತ್ರೆಯ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಲಾಯಿತು.

- ಹಾಸನದಲ್ಲಿ ಭಕ್ತಿಸಂಭ್ರಮ । ₹1,000ಕ್ಕೆ ವಿಶೇಷ ದರ್ಶನ, 10 ಪ್ರವಾಸಿ ಮಾರ್ಗಗಳ ವ್ಯವಸ್ಥೆ

- - -

- ರಂಗೋಲಿ ಸ್ಪರ್ಧೆ ಉದ್ಘಾಟನೆ, ಸಂಚಾರಿ ವಾಹನಗಳಿಗೆ ಹಸಿರು ನಿಶಾನೆ

- ಧಾರ್ಮಿಕ, ಸಾಂಸ್ಕೃತಿಕ ಪ್ರವಾಸೋದ್ಯಮಕ್ಕೆ ಉತ್ತೇಜನ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಹಾಸನದ ವಿಶ್ವವಿಖ್ಯಾತ ಶ್ರೀ ಹಾಸನಾಂಬೆ ದೇವಿ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಸಂಭ್ರಮಕ್ಕೆ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಚಾಲನೆ ನೀಡಿದರು. ಉತ್ಸವದ ಅಂಗವಾಗಿ ಆಯೋಜಿಸಿರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ರಂಗೋಲಿ ಸ್ಪರ್ಧೆ ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಚಾಲನೆ ನೀಡುವ ಮೂಲಕ ಜಾತ್ರೆಯ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಲಾಯಿತು.

ಹಾಸನಾಂಬೆ ದೇವಿ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಅ.30ರಿಂದ ನ.10ರವರೆಗೆ ಹಮ್ಮಿಕೊಂಡಿರುವ ಹಾಸನಾಂಬ ಟೂರ್ ಪ್ಯಾಕೇಜ್‌ಗೆ ಸಚಿವರು ಚಾಲನೆ ನೀಡಿದರು. ಈ ಪ್ರವಾಸ ಕಾರ್ಯಕ್ರಮದಡಿ ₹1,000 ಟಿಕೆಟ್ ದರದಲ್ಲಿ ಶ್ರೀ ಹಾಸನಾಂಬ ದೇವಿಯ ವಿಶೇಷ ದರ್ಶನದ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳು, ನೈಸರ್ಗಿಕ ಸೌಂದರ್ಯ ಹೊಂದಿರುವ ಪ್ರದೇಶಗಳು ಹಾಗೂ ಪಾರಂಪರಿಕ ಪ್ರವಾಸಿ ತಾಣಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಒಟ್ಟು 10 ಪ್ರವಾಸಿ ಮಾರ್ಗಗಳನ್ನು ರೂಪಿಸಲಾಗಿದೆ. ಇವುಗಳ ಜತೆಗೆ ಸಾಹಸ ಪ್ರವಾಸೋದ್ಯಮ ಚಟುವಟಿಕೆಗಳನ್ನೂ ಪ್ಯಾಕೇಜ್‌ನಲ್ಲಿ ಸೇರಿಸಲಾಗಿದೆ. ಈ ವ್ಯವಸ್ಥೆಯಿಂದ ದೇವಿಯ ದರ್ಶನಕ್ಕೆ ಬರುವ ಭಕ್ತರು ಒಂದೇ ಪ್ರವಾಸದಡಿ ಜಿಲ್ಲೆಯ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಅನುಕೂಲವಾಗಲಿದೆ. ಜತೆಗೆ ಸ್ಥಳೀಯ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಉತ್ತೇಜನ ದೊರೆಯುವ ನಿರೀಕ್ಷೆಯಿದೆ ಎಂದು ತಿಳಿಸಿದರು.

ಕಲೆ, ಸಂಸ್ಕೃತಿಯ ಅನಾವರಣಕ್ಕೆ ವೇದಿಕೆ:

ಉತ್ಸವ ಅಂಗವಾಗಿ ಆಯೋಜಿಸಲಾಗಿದ್ದ ರಂಗೋಲಿ ಸ್ಪರ್ಧೆಯನ್ನು ಸಚಿವ ಕೆ.ಎಸ್. ಬಸವಂತಪ್ಪ ಅವರು ಸಚಿವ ಕೆ.ಎಂ. ಶಿವಲಿಂಗೇಗೌಡ ಅವರೊಂದಿಗೆ ಉದ್ಘಾಟಿಸಿದರು. ನಾಡಿನ ಕಲೆ, ಸಂಸ್ಕೃತಿ ಹಾಗೂ ಸಂಪ್ರದಾಯಗಳ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುವ ರಂಗೋಲಿ ಸ್ಪರ್ಧೆಯು ಉತ್ಸವದ ಆಕರ್ಷಣೆಯನ್ನು ಹೆಚ್ಚಿಸಿತು.

ಇದೇ ಸಂದರ್ಭದಲ್ಲಿ ನಗರದ ಪ್ರವಾಸಿ ಮಂದಿರದಲ್ಲಿ ಹಾಸನಾಂಬೆ ಉತ್ಸವದ ಅಂಗವಾಗಿ ವ್ಯವಸ್ಥೆಗೊಳಿಸಲಾಗಿದ್ದ ಸಂಚಾರಿ ವಾಹನಗಳಿಗೆ ಪೂಜೆ ಸಲ್ಲಿಸಿ, ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಲಾಯಿತು. ಉತ್ಸವದ ಕಾರ್ಯಕ್ರಮಗಳು ಹಾಗೂ ಮಾಹಿತಿಯನ್ನು ಹೆಚ್ಚಿನ ಜನರಿಗೆ ತಲುಪಿಸುವಲ್ಲಿ ಈ ವಾಹನಗಳು ಪ್ರಮುಖ ಪಾತ್ರ ವಹಿಸಲಿವೆ.

ಸಚಿವ ಕೆ.ಎಸ್. ಬಸವಂತಪ್ಪ ಈ ವೇಳೆ ಮಾತನಾಡಿ, ನಾಡಿನ ಕಲೆ, ಸಂಸ್ಕೃತಿ ಹಾಗೂ ಸಂಪ್ರದಾಯಗಳ ಶ್ರೀಮಂತಿಕೆ ಪ್ರತಿಬಿಂಬಿಸುವ ಜಾತ್ರಾ ಮಹೋತ್ಸವಗಳು ನಮ್ಮ ಪರಂಪರೆ ಉಳಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಹಬ್ಬದ ಸಂಭ್ರಮವನ್ನು ಹೆಚ್ಚಿಸುವುದರ ಜತೆಗೆ ಸ್ಥಳೀಯ ಕಲಾವಿದರ ಪ್ರತಿಭೆ ಅನಾವರಣಗೊಳಿಸಲು ಉತ್ತಮ ವೇದಿಕೆಯಾಗಿವೆ. ಹಾನಸದ ಹಾಸನಾಂಬೆ ಉತ್ಸವದ ಮೂಲಕ ಜಿಲ್ಲೆಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಭವವನ್ನು ರಾಜ್ಯದ ಜನರಿಗೆ ಪರಿಚಯಿಸುವುದರ ಜತೆಗೆ ಪ್ರವಾಸೋದ್ಯಮ ಅಭಿವೃದ್ಧಿಗೂ ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.

ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ಪರಮಪೂಜ್ಯ ಜಗದ್ಗುರು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ದಗಂಗಾ ಸ್ವಾಮೀಜಿ, ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ, ಹಾಸನ ಸಂಸದ ಶ್ರೇಯಸ್ ಪಟೇಲ್, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

- - -

-29ಕೆಡಿವಿಜಿ38, 39: ಹಾಸನದಲ್ಲಿ ಶ್ರೀ ಹಾಸನಾಂಬೆ ದೇವಿ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಸಂಭ್ರಮಕ್ಕೆ ಮುಜರಾಯಿ ಸಚಿವ ಕೆ.ಎಸ್. ಬಸವಂತಪ್ಪ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೇಪ್‌ ಮಾಡಿದ್ದಕ್ಕಾಗಿ ಅಪಹರಣ ಮೂಲಕ ಪ್ರತೀಕಾರ
ಉತ್ತರ ಪಾಲಿಕೆಯಲ್ಲಿ 18 ಜಂಕ್ಷನ್‌ ಗುರುತು