ಕನ್ನಡಪ್ರಭ ವಾರ್ತೆ ಬೆಳಗಾವಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಮ್ಮ ಪುತ್ರ ಮೃಣಾಲ್‌ಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಖಚಿತವಾದ ಹಿನ್ನೆಲೆಯಲ್ಲಿ ಬುಧವಾರ ತಮ್ಮ ನಿವಾಸದ ಕಚೇರಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತರ ಜೊತೆಗೆ ಸಭೆ ನಡೆಸುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಬೆಳಗಾವಿಯ ಕುವೆಂಪು ನಗರದಲ್ಲಿರುವ ತಮ್ಮ ನಿವಾಸದ ಕಚೇರಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸುಮಾರು 500 ಕಾರ್ಯಕರ್ತೆಯರು ಪಾಲ್ಗೊಂಡಿದ್ದರು ಎನ್ನಲಾಗಿದೆ.
ತಮ್ಮ ಮಗನ ಪರ ಪ್ರಚಾರ ಮಾಡುವಂತೆಯೂ ಸೂಚನೆ ನೀಡಿದ್ದಾರೆಂದು ವಿಪಕ್ಷಗಳು ದೂರುತ್ತಿವೆ. ಅಂಗನವಾಡಿ ಕಾರ್ಯಕರ್ತೆಯರ ಜೊತೆಗೆ ಸಚಿವರು ಸಭೆ ನಡೆಸುತ್ತಿರುವ ವಿಚಾರ ತಿಳಿದು ಜಿಲ್ಲಾ ಚುನಾವಣಾಧಿಕಾರಿ ನಿತೇಶ ಪಾಟೀಲ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಿತು. ಈ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಸಭೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಸಭೆಯಲ್ಲಿ ಪಾಲ್ಗೊಂಡಿದ್ದವರ ಬಗ್ಗೆ ಮಾಹಿತಿ ಪಡೆದು ಅವರನ್ನು ಅಲ್ಲಿಂದ ಅಧಿಕಾರಿಗಳು ಕಳುಹಿಸಿದ್ದಾರೆ.ಆಡಳಿತಯಂತ್ರ ದುರುಪಯೋಗ: ಚುನಾವಣಾಧಿಕಾರಿಗೆ ದೂರು
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ವಿಧಾನಸಭೆ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗೆ ಬೆಳಗಾವಿ ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ಧನಂಜಯ ಜಾಧವ ದೂರು ಸಲ್ಲಿಸಿದರು.ತಮ್ಮ ನಿವಾಸದ ಕಚೇರಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರ ಸಭೆ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗ್ರಾಮ ಮಟ್ಟದಲ್ಲಿ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುವಂತೆ ಸೂಚನೆ ನೀಡಿದ್ದಾರೆ ಎಂದು ಆರೋಪಿಸಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳಕರ ಆಡಳಿತ ಯಂತ್ರವನ್ನು ದುರುಪಯೋಗ ಮಾಡಿಕೊಂಡು ಅಂಗನವಾಡಿ ಕಾರ್ಯಕರ್ತೆಯರ ಸಭೆ ನಡೆಸುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಂಡಿದೆ. ಚುನಾವಣಾ ಮುಕ್ತವಾಗಿ, ನ್ಯಾಯಸಮ್ಮತವಾಗಿ ನಡೆಯುವ ಲಕ್ಷಣಗಳಿಲ್ಲ. ಸಚಿವೆ ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಚುನಾವಣಾ ಪ್ರಚಾರ ಕಾರ್ಯಕ್ಕೆ ಆಡಳಿತ ಯಂತ್ರವನ್ನು ದುರುಪಯೋಗ ಪಡೆಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.