ಜಾತಿ ಸಮೀಕ್ಷೆ ಕಾರ್ಯ ಖುದ್ದು ಪರಿಶೀಲಿಸಿದ ಸಚಿವ ಮುನಿಯಪ್ಪ

KannadaprabhaNewsNetwork | Published : May 10, 2025 1:17 AM
Follow Us

ಸಾರಾಂಶ

ದೊಡ್ಡಬಳ್ಳಾಪುರ: ಪರಿಶಿಷ್ಟ ಜಾತಿಗಳಿಗೆ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಇನ್ನಿತರೆ ಕ್ಷೇತ್ರಗಳಲ್ಲಿ ಸಮಾನ ಅವಕಾಶಗಳನ್ನು ಕಲ್ಪಿಸಿಕೊಡುವ ದೃಷ್ಟಿಯಿಂದ ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆ ಆರಂಭಗೊಂಡಿದ್ದು, ಜಾತಿ ಕಾಲಂನಲ್ಲಿ ತಮ್ಮ ಮೂಲ ಜಾತಿಯನ್ನು ತಪ್ಪದೇ ನಮೂದಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ದೊಡ್ಡಬಳ್ಳಾಪುರ: ಪರಿಶಿಷ್ಟ ಜಾತಿಗಳಿಗೆ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಇನ್ನಿತರೆ ಕ್ಷೇತ್ರಗಳಲ್ಲಿ ಸಮಾನ ಅವಕಾಶಗಳನ್ನು ಕಲ್ಪಿಸಿಕೊಡುವ ದೃಷ್ಟಿಯಿಂದ ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆ ಆರಂಭಗೊಂಡಿದ್ದು, ಜಾತಿ ಕಾಲಂನಲ್ಲಿ ತಮ್ಮ ಮೂಲ ಜಾತಿಯನ್ನು ತಪ್ಪದೇ ನಮೂದಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ದೇವನಹಳ್ಳಿ ಟೌನ್ ನ ವಿವಿಧ ವಾರ್ಡ್ ಗಳಿಗೆ ಮಂಗಳವಾರ ಸಚಿವರು ಖುದ್ದು ಭೇಟಿ ನೀಡಿ, ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ- 2025 ಕಾರ್ಯವನ್ನು ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಸಮಿತಿ ವರದಿ ನೀಡಿದೆ. ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಈ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು ಸಂಗ್ರಹಿಸಲು ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಆದಿ ದ್ರಾವಿಡ, ಆದಿ ಕರ್ನಾಟಕ, ಆದಿ ಆಂಧ್ರ ಸಮುದಾಯದಲ್ಲಿ ಮೂಲ ಜಾತಿ ಸರಿಯಾಗಿ ಇಲ್ಲ, ಹಾಗಾಗಿ ಖಚಿತತೆ ಗೊತ್ತಾಗಬೇಕಿದೆ. 101 ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕೊಡುವಾಗ ನಿರ್ದಿಷ್ಟ ಅಂಕಿ ಅಂಶಗಳು ಬೇಕಾಗುತ್ತವೆ. ಹಾಗಾಗಿ ನಮ್ಮ ಸರ್ಕಾರ ಪರಿಶಿಷ್ಟ ಜಾತಿಗಳ ಅಭಿವೃದ್ಧಿಗೆ ಈ ಸಮೀಕ್ಷೆ ಕೈಗೊಂಡಿದೆ ಎಂದರು.

ಜಿಲ್ಲೆಯಲ್ಲಿ ಸಮೀಕ್ಷೆ ಕಾರ್ಯಕ್ಕೆ ಪ್ರತಿ ಮತಗಟ್ಟೆಗೆ ಒಬ್ಬರಂತೆ 1141 ಗಣತಿದಾರರನ್ನು ನೇಮಿಸಲಾಗಿದ್ದು, ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸುವರು. ಮೇ 19 ರಿಂದ 21 ರವರೆಗೆ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ನಡೆಯಲಿದೆ. ಗಣತಿದಾರರು ಮನೆ ಮನೆ ಭೇಟಿ ನೀಡಿದ ಸಂದರ್ಭದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಕುಟುಂಬಗಳು ತಮ್ಮ ಆಧಾರ್ ಕಾರ್ಡ್, ಪಡಿತರ ಚೀಟಿ, ಮೊಬೈಲ್ ನಂಬರ್ ನೀಡಿ ಗಣತಿದಾರರು ಕೇಳುವಂತಹ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿ ಎಂದರು.

ಮೂಲ ಜಾತಿ ಬರೆಸುವುದರಿಂದ ಎಲ್ಲರಿಗೂ ನ್ಯಾಯ:

ಗಣತಿದಾರರು ಸಮೀಕ್ಷೆಗೆ ನಿಮ್ಮ ಮನೆಗಳಿಗೆ ಬಂದಾಗ ಅವರಿಗೆ ಸಂಪೂರ್ಣ ಸಹಕಾರ ನೀಡಿ. ಜಾತಿ ಕಾಲಂ ಅಲ್ಲಿ ತಪ್ಪದೇ ತಮ್ಮ ಮೂಲ ಜಾತಿಯನ್ನು ಬರೆಸಿ. ಇದರಿಂದ ಒಳಮೀಸಲಾತಿ ಕೊಡುವಾಗ ಉಪಯೋಗವಾಗುತ್ತದೆ. ಎಲ್ಲರಿಗೂ ಸಮಾನ ಅವಕಾಶ ಸಿಕ್ಕಂತಾಗುತ್ತದೆ ಎಂದರು.

ಜಿಲ್ಲಾ ಸಹಾಯವಾಣಿ ಕೇಂದ್ರ ಸಂಪರ್ಕಿಸಿ:

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದ್ದು, ಸಹಾಯವಾಣಿ ಸಂಖ್ಯೆ 9480843053 ಆಗಿದ್ದು ಸಹಾಯವಾಣಿ ಕೇಂದ್ರವು ಬೆಳಗ್ಗೆ 6:30 ರಿಂದ ಸಂಜೆ 6:30 ವರೆಗೆ ಸಾರ್ವಜನಿಕರ ಉಪಯೋಗಕ್ಕಾಗಿ ಮುಕ್ತವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರಾದ ಪ್ರೇಮಾ, ದೇವನಹಳ್ಳಿ ಪುರಸಭೆ ಅಧ್ಯಕ್ಷ ಮುನಿಕೃಷ್ಣ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಜಗನ್ನಾಥ ಹಾಗೂ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಫೋಟೋ-6ಕೆಡಿಬಿಪಿ1-

ಬೆಂ.ಗ್ರಾ ಜಿಲ್ಲೆ ದೇವನಹಳ್ಳಿಯ ವಿವಿಧೆಡೆ ಪರಿಶಿಷ್ಟ ಜಾತಿ ವಿಶೇಷ ಸಮೀಕ್ಷೆಯನ್ನು ಸಚಿವ ಕೆ.ಎಚ್.ಮುನಿಯಪ್ಪ ಖುದ್ದು ಪರಿಶೀಲನೆ ನಡೆಸಿದರು.