ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ವೀಕ್ಷಿಸಿದ ಸಚಿವ ಸತೀಶ್ ಜಾರಕಿಹೊಳಿ

KannadaprabhaNewsNetwork |  
Published : Jun 18, 2025, 02:26 AM ISTUpdated : Jun 18, 2025, 04:57 PM IST
ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆಯನ್ನು ಸಚಿವ ಸತೀಶ್ ಜಾರಕಿಹೊಳಿ ಪರಿಶೀಲಿಸಿದರು.  | Kannada Prabha

ಸಾರಾಂಶ

ಇಲ್ಲಿನ ಕೋಟೆಯ ಬಳಿ ತುಂಗಾಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ಸ್ಥಳಕ್ಕೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸೋಮವಾರ ಸಂಜೆ ಭೇಟಿ ನೀಡಿ ಪರಿಶೀಲಿಸಿದರು.

 ಕಂಪ್ಲಿ :  ಇಲ್ಲಿನ ಕೋಟೆಯ ಬಳಿ ತುಂಗಾಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ಸ್ಥಳಕ್ಕೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸೋಮವಾರ ಸಂಜೆ ಭೇಟಿ ನೀಡಿ ಪರಿಶೀಲಿಸಿದರು.

ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ನಿರ್ಮಾಣಗೊಂಡು 70ಕ್ಕೂ ಅಧಿಕ ವರ್ಷಗಳು ಗತಿಸಿದ್ದು, ಸೇತುವೆ ಶಿಥಿಲಾವಸ್ಥೆಗೆ ತಲುಪಿದೆ. ಅಲ್ಲದೇ ತುಂಗಭದ್ರಾ ಜಲಾಶಯದಿಂದ ಅಧಿಕ ಪ್ರಮಾಣದಲ್ಲಿ ನೀರು ಹರಿಬಿಟ್ಟಾಗ ಸೇತುವೆ ಸಂಪೂರ್ಣ ಮುಳುಗಡೆಗೊಂಡು ಸೇತುವೆ ಮೇಲಿನ ಸಂಪರ್ಕ ಕಡಿತಗೊಂಡು ಈ ಭಾಗದ ವಿದ್ಯಾರ್ಥಿಗಳು, ರೈತರು, ಕಾರ್ಮಿಕರು, ನೌಕರರಿಗೆ ಗಂಗಾವತಿ ಸೇರಿದಂತೆ ಇತರೆಡೆ ತೆರಳಲು ತುಂಬಾ ಸಮಸ್ಯೆಯಾಗುತ್ತಿದೆ. 

ನೂತನ ಸೇತುವೆ ನಿರ್ಮಾಣವಾಗಬೇಕೆಂಬುದು ಬಹು ವರ್ಷಗಳ ಬೇಡಿಕೆಯಾಗಿದ್ದು ಈವರೆಗೂ ಸೇತುವೆ ವೀಕ್ಷಣೆಗೆ ಆಗಮಿಸಿದ್ದ ಜನಪ್ರತಿನಿಧಿಗಳೆಲ್ಲ ನೂತನ ಸೇತುವೆ ನಿರ್ಮಿಸುವುದಾಗಿ ಭರವಸೆ ನೀಡಿ ಹೋಗಿದ್ದು ಈವರೆಗೂ ನೂತನ ಸೇತುವೆ ನಿರ್ಮಾಣಗೊಳ್ಳದೆ ಕೊಟ್ಟ ಭರವಸೆ ಎಲ್ಲಾ ಹುಸಿಯಾಗಿವೆ. ಈ ಭಾಗದ ಜನತೆಯ ಹಿತದೃಷ್ಟಿಯಿಂದ ಸರ್ಕಾರ ನೂತನ ಸೇತುವೆ ನಿರ್ಮಾಣಕ್ಕೆ ಮುಂದಾಗಬೇಕು ಎಂದು ರೈತ ಸಂಘಗಳು, ಕನ್ನಡ ಪರ ಸಂಘಗಳು ಸೇರಿ ಅನೇಕರು ಸಚಿವರನ್ನು ಒತ್ತಾಯಿಸಿದರು.

ಶಾಸಕ ಜೆ.ಎನ್. ಗಣೇಶ್ ಮಾತನಾಡಿ, ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ನಿರ್ಮಾಣಗೊಳ್ಳಬೇಕು ಎಂಬುದು ಬಹುವರ್ಷಗಳ ಬೇಡಿಕೆಯಾಗಿದೆ. ಈ ಭಾಗದ ಜನತೆಯ ಹಿತದೃಷ್ಟಿಯಿಂದ ನೂತನ ಸೇತುವೆ ನಿರ್ಮಿಸುವಂತೆ ಹಲವು ಬಾರಿ ಸದನದಲ್ಲಿ ಧ್ವನಿ ಎತ್ತಿರುವೆ, ಅಲ್ಲದೇ ನೂತನ ಸೇತುವೆ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಿರುವೆ. ನೂತನ ಸೇತುವೆ ನಿರ್ಮಾಣಕ್ಕೆ ಸರ್ಕಾರ ಅನುದಾನ ಬಿಡುಗಡೆಗೊಳಿಸುವ ವಿಶ್ವಾಸವಿದೆ ಎಂದರು.

ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಶಾಸಕ ಜೆ.ಎನ್. ಗಣೇಶ್ ಹಲವು ಬಾರಿ ಮನವಿ ಮಾಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವೆ ಎಂದು ಭರವಸೆ ನೀಡಿದ್ದೆ, ಅದರಂತೆ ಇಂದು ಕಂಪ್ಲಿಗೆ ಆಗಮಿಸಿರುವೆ. ಸೇತುವೆಯ ಸ್ಥಿತಿಗತಿ ಪರಿಶೀಲಿಸಿದ್ದು ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿಯೇ ನೂತನ ಸೇತುವೆ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಸ್ಥಾಯಿ ಸಮಿತಿ ಅಧ್ಯಕ್ಷ ಎಂ. ಉಸ್ಮಾನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಶ್ರೀನಿವಾಸ್ ರಾವ್, ಪುರಸಭೆ ಸದಸ್ಯರಾದ ಕೆ.ಎಸ್. ಚಾಂದ್ ಬಾಷಾ, ಲಡ್ಡು ಹೊನ್ನೂರ್ ವಲಿ, ಸಿ.ಆರ್. ಹನುಮಂತ, ಮುಖಂಡರಾದ ಅಬೀಬ್ ರಹಮಾನ್, ಬಿ.ಸಿದ್ದಪ್ಪ, ಕಾಮರೆಡ್ಡಿ ಚಂದ್ರಶೇಖರ್ ಸೇರಿ ಇತರರಿದ್ದರು.

PREV
Read more Articles on

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ