ಅರಸೀಕೆರೆ: ತಾಲೂಕಿನ ಗಂಡಸಿ ಹೋಬಳಿಯ ಕೊಂಡೆನಾಳು ಗ್ರಾಮದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಎರಡು ಮನೆಗಳು ಹಾನಿಗೀಡಾಗಿದ್ದು, ಸಂತ್ರಸ್ತ ಕುಟುಂಬಗಳಿಗೆ ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ನೆರವಿನ ಹಸ್ತ ಚಾಚಿದ್ದಾರೆ.ಗ್ರಾಮದಲ್ಲಿ ಎರಡು ಮನೆಗಳು ಬೆಂಕಿಗೆ ಆಹುತಿಯಾಗಿರುವ ವಿಷಯ ತಿಳಿದ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಹಾನಿಗೊಳಗಾದ ಮನೆಗಳನ್ನು ಪರಿಶೀಲಿಸಿದರು. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಹಾಗೂ ಯಾರಿಗೂ ಗಾಯಗಳಾಗಿಲ್ಲ. ಈ ಸಂದರ್ಭದಲ್ಲಿ ಮನೆ ಕಳೆದುಕೊಂಡ ಕುಟುಂಬದ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಸಚಿವರು, ಸಂಕಷ್ಟದ ಸಮಯದಲ್ಲಿ ಧೈರ್ಯ ಕಳೆದುಕೊಳ್ಳದಂತೆ ಆತ್ಮಸ್ಥೈರ್ಯ ತುಂಬಿದರು. ಅಲ್ಲದೆ, ತಮ್ಮ ವೈಯಕ್ತಿಕ ವತಿಯಿಂದ ಸಂತ್ರಸ್ತ ಕುಟುಂಬಗಳಿಗೆ ಧನಸಹಾಯ ನೀಡಿ ಮಾನವೀಯತೆ ಮೆರೆದರು.ಇದೇ ವೇಳೆ ಮನೆ ಕಳೆದುಕೊಂಡಿರುವ ಎರಡೂ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಗ್ನಿ ಅವಘಡದಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ಸರ್ಕಾರದ ವತಿಯಿಂದ ದೊರೆಯಬೇಕಾದ ಪರಿಹಾರ ಹಾಗೂ ಅಗತ್ಯ ನೆರವು ತ್ವರಿತವಾಗಿ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.