ಕನ್ನಡಪ್ರಭ ವಾರ್ತೆ ಆಲೂರು
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮೆಕ್ಕೆಜೋಳ ಬೆಳೆಗೆ ಬಿಳಿ ಸುಳಿ (ವೈಟ್ ಬಡ್/ವೈರಲ್) ರೋಗ ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಗುರುವಾರ ಹಾನಿಗೊಳಗಾದ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಪರಿಶೀಲನೆ ನಡೆಸಿದರು. ರೈತರ ಅಹವಾಲುಗಳನ್ನು ಆಲಿಸಿದ ಸಚಿವರು, ಬೆಳೆ ನಷ್ಟದ ಕುರಿತು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು, ಪರಿಹಾರ ವಿತರಣೆಯಲ್ಲಿ ಯಾವುದೇ ವಿಳಂಬ ಅಥವಾ ನಿರ್ಲಕ್ಷ್ಯ ನಡೆಯಬಾರದು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, "ಬೆಳೆ ಪರಿಹಾರದ ವಿಷಯದಲ್ಲಿ ಅನಗತ್ಯ ಕಾನೂನು, ತಾಂತ್ರಿಕ ಕಾರಣಗಳನ್ನು ಮುಂದಿಟ್ಟು ರೈತರನ್ನು ಅಲೆದಾಡಿಸಬೇಡಿ. ಸರ್ಕಾರ ರೈತರೊಂದಿಗೆ ಇದೆ. ಅರ್ಹ ರೈತರಿಗೆ ಶೀಘ್ರದಲ್ಲೇ ಪರಿಹಾರ ತಲುಪಬೇಕು " ಎಂದು ಹೇಳಿದರು. ವಿಶೇಷ ಪರಿಷ್ಕರಣೆ ಯೋಜನೆಯಡಿ ಬಾಕಿ ಇರುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ ಅವರು, ಬೆಳೆ ವಿಮೆ ಪಾವತಿಸಿರುವ ರೈತರಿಗೆ ನಿಯಮಾನುಸಾರ ಶೇ.25ರಷ್ಟು ಮಧ್ಯಂತರ ಪರಿಹಾರವನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ನಿಖರ ಮಾಹಿತಿ ದಾಖಲಿಸಬೇಕು. ರೈತರಿಗೆ ಯಾವುದೇ ರೀತಿಯ ಮೋಸ ಅಥವಾ ಅನ್ಯಾಯವಾಗದಂತೆ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು ಎಂದು ಎಚ್ಚರಿಕೆ ನೀಡಿದರು.ಮೆಕ್ಕೆಜೋಳ ಬೀಜ ಹಾಗೂ ರೋಗದ ಸಮಸ್ಯೆ ಕುರಿತು ಸಂಬಂಧಿಸಿದ ಕಂಪನಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ರೈತರಿಗೆ ನಷ್ಟ ಉಂಟಾಗಲು ಕಾರಣವಾದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಇದೇ ವೇಳೆ ಕೃಷಿ, ತೋಟಗಾರಿಕೆ, ಕಂದಾಯ ಹಾಗೂ ಸಂಬಂಧಿತ ಇಲಾಖೆಗಳ ಎಲ್ಲಾ ಅಧಿಕಾರಿಗಳನ್ನು ತುರ್ತು ಸಭೆಗೆ ಕರೆಯಿಸಿ, ಬೆಳೆ ಹಾನಿ, ಪರಿಹಾರ ವಿತರಣೆ ಹಾಗೂ ಮುಂದಿನ ಕ್ರಮಗಳ ಕುರಿತು ಸಮಗ್ರ ಚರ್ಚೆ ನಡೆಸುವಂತೆ ಸೂಚಿಸಿದರು.