ಕೈ ತಪ್ಪಿದ ಸಚಿವ ಸ್ಥಾನ: ಬೆಂಬಲಿಗರ ಆಕ್ರೋಶ

KannadaprabhaNewsNetwork |  
Published : Aug 04, 2026, 01:45 AM IST
ಬೆಂಬಲಿಗರ ಆಕ್ರೋಶ | Kannada Prabha

ಸಾರಾಂಶ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಅವಕಾಶವಂಚಿತರ ಅಸಮಾಧಾನ ಭುಗಿಲೆದ್ದಿದ್ದು, ಅವರ ಬೆಂಬಲಿಗರು ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿದ್ದಾರೆ.

ಕನ್ನಡಪ್ರಭ ವಾರ್ತೆ, ಬೆಂಗಳೂರು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಅವಕಾಶವಂಚಿತರ ಅಸಮಾಧಾನ ಭುಗಿಲೆದ್ದಿದ್ದು, ಅವರ ಬೆಂಬಲಿಗರು ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರಿನ ವಿಜಯನಗರದಲ್ಲಿ ಎಂ.ಕೃಷ್ಣ ಹಾಗೂ ಪ್ರಿಯಕೃಷ್ಣ ಬೆಂಬಲಿಗರು ಪ್ರತಿಭಟನೆ ನಡೆಸಿ, ಡಿಕೆಶಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ಪಕ್ಷದ ಪದಾಧಿಕಾರಿಗಳ ಹುದ್ದೆಗೆ ಸಾಮೂಹಿಕ ರಾಜೀನಾಮೆ ಸಲ್ಲಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇಂಡಿ ಶಾಸಕ ಯಶವಂತರಾಯಗೌಡ ವಿ.ಪಾಟೀಲ್ ಅವರಿಗೆ ಸಚಿವ ಸ್ಥಾನ ತಪ್ಪಿದ ಹಿನ್ನೆಲೆಯಲ್ಲಿ ಇಂಡಿ ಕ್ಷೇತ್ರದ ನೂರಾರು ಬೆಂಬಲಿಗರು ಬೆಂಗಳೂರಿನ ಶಾಸಕರ ಭವನದ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು. ವಿಜಯಪುರ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನಕ್ಕೆ ಬಸವರಾಜ ಬಜಂತ್ರಿ ರಾಜೀನಾಮೆ ನೀಡಿದ್ದಾರೆ.

ಶಾಸಕ ತನ್ವೀರ್ ಸೇಠ್ ಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಅವರ ಬೆಂಬಲಿಗರು, ಮೈಸೂರಲ್ಲಿ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿ, ಕಣ್ಣೀರು ಹಾಕಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿದರು. ಮೈಸೂರು-ಬೆಂಗಳೂರು ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಅಭಿಮಾನಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬ ಅಭಿಮಾನಿ ತನ್ನ ಮೈಮೇಲೆ ಪೆಟ್ರೋಲ್ ಸುರಿದುಕೊಳ್ಳಲು ಮುಂದಾಗಿದ್ದು, ಸ್ಥಳದಲ್ಲಿದ್ದ ಪೊಲೀಸರು ಆತನ ಕೈಯಿಂದ ಪೆಟ್ರೋಲ್ ಬಾಟಲ್ ಕಸಿದುಕೊಂಡರು.

ಶಾಸಕ ರಾಘವೇಂದ್ರ ಹಿಟ್ನಾಳ್‌ ಅವರಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಕೊಪ್ಪಳದ ಅಶೋಕ ವೃತ್ತದಲ್ಲಿ ಬೆಂಬಲಿಗರು ಟೈರುಗಳಿಗೆ ಬೆಂಕಿ ಹಚ್ಚಿ, ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು.

ಶಾಸಕ ಪ್ರಸಾದ ಅಬ್ಬಯ್ಯಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಹುಬ್ಬಳ್ಳಿಯ ಇಂಡಿಪಂಪ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ, ಟೈರ್‌ಗಳಿಗೆ ಬೆಂಕಿ ಹಚ್ಚಿ, ಬಸ್‌ಗಳಿಗೆ ಕಲ್ಲು ತೂರಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು 40ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿ, ನಂತರ, ಬಿಡುಗಡೆಗೊಳಿಸಿದರು.

ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿ ಬೆಳಗಾವಿ ತಾಲೂಕು ಹಿರೇಬಾಗೇವಾಡಿ ಸಮೀಪದ ಟೋಲ್‌ ಬಳಿ ಪುಣೆ-ಬೆಂಗಳೂರು ಹೆದ್ದಾರಿ ತಡೆದು, ಆಕ್ರೋಶ ವ್ಯಕ್ತಪಡಿಸಿದರು.

ಹಾನಗಲ್ಲ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಬೆಂಬಲಿಗರಲ್ಲಿ ಅಸಮಾಧಾನ ಉಂಟಾಗಿದ್ದು, ಪಕ್ಷದ ಹುದ್ದೆಗಳಿಗೆ ರಾಜೀನಾಮೆ ನೀಡಲು ಚಿಂತನೆ ನಡೆಸಿದ್ದಾರೆ.

ಭಟ್ಕಳ ಕ್ಷೇತ್ರದ ಶಾಸಕ ಮಂಕಾಳು ವೈದ್ಯಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಮೊಗವೀರ ಸಮುದಾಯದ ಯುವಕರು, ಸಾಮಾಜಿಕ ಜಾಲತಾಣಗಳಲ್ಲಿ ‘ಇನ್‌ಜಸ್ಟಿಸ್‌ ಫಾರ್‌ ಫೀಶ್ಶರೀಸ್‌ ಕಮ್ಯುನಿಟಿ’ ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡ್ ಮಾಡುತ್ತಿದ್ದಾರೆ. ಉತ್ತರ ಕನ್ನಡಕ್ಕೆ ಸೂಕ್ತ ಪ್ರಾದೇಶಿಕ ಪ್ರಾತಿನಿಧ್ಯ ನೀಡದಿದ್ದರೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಸಿದ್ದಾರೆ.

ಶಾಸಕ ನಾರಾಯಣಸ್ವಾಮಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಅವರ ಬೆಂಬಲಿಗರು ಬಂಗಾರಪೇಟೆಯಲ್ಲಿ ರಸ್ತೆ ತಡೆ ನಡೆಸಿ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿದರು. ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬೆಂಬಲಿಗರು, ಬುಧವಾರ ಬಾಗೆಪಲ್ಲಿ ಬಂದ್‌ಗೆ ಕರೆ ನೀಡಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗ ಸಿ.ಎಂ.ಚಿನ್ಮಯ್ ಅವರು ಸಾಗರ ವಿಧಾನಸಭಾ ಕ್ಷೇತ್ರದ ಎನ್‌ಎಸ್‌ಯುಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಶಾಸಕ ಸಿ.ಎಸ್. ನಾಡಗೌಡ ಅಪ್ಪಾಜಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆ ಮುದ್ದೆಬಿಹಾಳದ ಬಸವೇಶ್ವರ ವೃತ್ತದಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿದರು.

ಶಾಸಕ ಹಂಪನಗೌಡ ಬಾದರ್ಲಿಯವರಿಗೆ ಸಚಿವ ಸ್ಥಾನ ತಪ್ಪಿದ್ದರಿಂದ ತೀವ್ರ ಆಕ್ರೋಶಗೊಂಡ ಕಾರ್ಯಕರ್ತನೊಬ್ಬ ರಾಯಚೂರು ಜಿಲ್ಲೆ ಸಿಂಧನೂರಿನ ಗಾಂಧಿವೃತ್ತದಲ್ಲಿ ನಡೆದ ಪ್ರತಿಭಟನೆ ವೇಳೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದೇ ವೇಳೆ, ಸಿಂಧನೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಅವರ ಬೆಂಬಲಿಗ ಬಿ.ವೆಂಕನಗೌಡ (ಬಾಬುಗೌಡ) ಬಾದರ್ಲಿ ರಾಜೀನಾಮೆ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಭಿವೃದ್ಧಿ ಹರಿಕಾರ ರಾಯರಡ್ಡಿಗೆ ಮಂತ್ರಿಪಟ್ಟ
ಕೊಪ್ಪಳ ಜಿಲ್ಲೆಗೆ ಡಬಲ್ ಧಮಾಕಾ