ಕಲ್ಯಾಣ ಕರ್ನಾಟಕ ಅಭಿವೃದ್ಧಿ ಯೋಜನೆಯಡಿ ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸರ್ಕಾರದಿಂದ ಬಿಡುಗಡೆಯಾದ ಅನುದಾನ ಹಾಗೂ ಫಲಾನುಭವಿಗಳಿಗೆ ವಿತರಿಸಬೇಕಾದ ಸಾಮಗ್ರಿಗಳ ದುರುಪಯೋಗದ ಕುರಿತು ಕೇಳಿ ಬರುತ್ತಿರುವ ಆರೋಪಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ಆಗ್ರಹಿಸಿ ಬುಧವಾರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಬರೆದ ಮನವಿ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಬೀದರ್

ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದಂತೆ 2018-19ನೇ ಸಾಲಿನಲ್ಲಿ ಫಲಾನುಭವಿಗಳಿಗೆ ನೀಡಬೇಕಿದ್ದ ಹೊಲಿಗೆ ಯಂತ್ರಗಳು, ಜಮಖಾನೆಗಳು, ಪುಸ್ತಕಗಳು, ಬೋರ್ಡಗಳು ಹಾಗೂ ದಿನಚರಿ ಪುಸ್ತಕಗಳು ಸೇರಿದಂತೆ ವಿವಿಧ ಸಾಮಗ್ರಿಗಳು ಅರ್ಹ ಫಲಾನುಭವಿಗಳಿಗೆ ತಲುಪದೇ ಬೇರೆ ರೀತಿಯಲ್ಲಿ ಬಳಕೆಯಾಗಿವೆ ಎಂಬ ಆರೋಪಗಳಿವೆ. ಈ ಬಗ್ಗೆ ಖರೀದಿ ಹಾಗೂ ವಿತರಣೆಯ ಸಂಪೂರ್ಣ ದಾಖಲೆಗಳನ್ನು ಪರಿಶೀಲಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.
ಅದೇ ರೀತಿ ಯಾದಗಿರಿ ಜಿಲ್ಲೆಯ ಸುರಪುರ, ಯಾದಗಿರಿ, ಶಹಾಪುರ ಹಾಗೂ ಬೀದರ್ ಜಿಲ್ಲೆಯ ಹುಮ್ನಾಬಾದ್ ಜೈಲುಗಳಲ್ಲಿ ವಿತರಿಸಲಾದ ಪುಸ್ತಕಗಳ ಮೂಲ, ಖರೀದಿ ಬಿಲ್, ವಿತರಣೆ ದಾಖಲೆ ಹಾಗೂ ಪುಸ್ತಕಗಳ ಮೇಲಿರುವ ಗುರುತು / ಸ್ಟಿಕ್ಕರ್‌ಗಳನ್ನೂ ಪರಿಶೀಲಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು, ಸಂಸ್ಥೆಗಳು ಹಾಗೂ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದವರಿಂದ ಮಾಹಿತಿ ಪಡೆದು, ದಾಖಲೆಗಳು, ಛಾಯಾಚಿತ್ರಗಳು, ವೀಡಿಯೋ ಗಳು ಮತ್ತು ಪತ್ರಿಕಾ ವರದಿಗಳನ್ನು ತನಿಖೆಯ ಭಾಗವಾಗಿ ಪರಿಶೀಲಿಸಬೇಕು. ಆರೋಪಗಳು ತನಿಖೆಯಲ್ಲಿ ಸಾಬೀತಾದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.
ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪೀಟರ್ ಚಿಟಗುಪ್ಪಾ, ಜಿಲ್ಲಾ ಸಹ ಕಾರ್ಯದರ್ಶಿ ಪಿಂಟು ಸಿರ್ಸಿ, ಬೀದರ್ ದಕ್ಷಿಣ ಕ್ಷೇತ್ರದ ಅಧ್ಯಕ್ಷ ನೀಲೇಶ್ ರಾಥೋಡ್, ನಗರ ಪ್ರಧಾನ ಕಾರ್ಯದರ್ಶಿ ಗಿರೀಶ ಓಂಕಾರೆ, ಜಿಲ್ಲಾ ಮುಖಂಡರಾದ ಸಾಗರ್ ಕಡ್ಯಾಳ್, ಮಾಣಿಕ ಭೋವಿ, ಅಭಿಷೇಕ್ ಕಮಠಾಣೆ, ಪುನೀತ್ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.