ಕನ್ನಡಪ್ರಭ ವಾರ್ತೆ ರಾಮನಗರ
ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಬಾಲಕಿ ಖುಷಿಯ ಸ್ವಗ್ರಾಮ ಭದ್ರಾಪುರ ಹಕ್ಕಿಪಿಕ್ಕಿ ಕಾಲೋನಿಗೆ ಮಾಗಡಿ ಕ್ಷೇತ್ರ ಶಾಸಕ ಎಚ್.ಸಿ.ಬಾಲಕೃಷ್ಣ ಹಾಗೂ ಮಾಜಿ ಶಾಸಕ ಎ.ಮಂಜುನಾಥ್ ಮಂಗಳವಾರ ಭೇಟಿ ನೀಡಿ ಮೃತ ಬಾಲಕಿಯ ಕುಟುಂಬದವರಿಗೆ ಸಾಂತ್ವನ ಹೇಳಿದರು.ಮಂಚನಾಯ್ಕನಹಳ್ಳಿ ಗ್ರಾಪಂ ವ್ಯಾಪ್ತಿಯ ಭದ್ರಾಪುರ ಹಕ್ಕಿಪಿಕ್ಕಿ ಕಾಲೋನಿಗೆ ಭೇಟಿ ನೀಡಿದ ಶಾಸಕ ಬಾಲಕೃಷ್ಣ ಅವರನ್ನು ಕಾಲೋನಿಯ ನಿವಾಸಿಗಳು ಮುತ್ತಿಗೆ ಹಾಕಿ ಬಾಲಕಿ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಹಾಗೂ ಕಾಲೋನಿಯ ನಿವಾಸಿಗಳಿಗೆ ಹೆಚ್ಚಿನ ಭದ್ರತೆ ಒದಗಿಸಬೇಕೆಂದು ಅವಲತ್ತುಕೊಂಡರು.
ಭದ್ರಾಪುರ ಕಾಲೋನಿಗೆ ರಸ್ತೆ ಸಂಪರ್ಕ ಹಾಗೂ ಬಿಎಂಟಿಸಿ ಬಸ್ ವ್ಯವಸ್ಥೆ ಕಲ್ಪಿಸಬೇಕು. ನಿತ್ಯ ನಿರಂತರ ವಿದ್ಯುತ್ ಸಮಸ್ಯೆ ಬಗೆಹರಿಸುವಂತೆ, ಬೀದಿ ದೀಪ ಮತ್ತು ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಕಾಲೋನಿಯ ನಿವಾಸಿಗಳು ಶಾಸಕರ ಬಳಿ ಸಾಲು ಸಾಲು ಬೇಡಿಕೆಗಳನ್ನಿಟ್ಟರು. ಎಲ್ಲವನ್ನೂ ತಾಳ್ಮೆಯಿಂದ ಆಲಿಸಿದ ಶಾಸಕ ಬಾಲಕೃಷ್ಣ ಸಂಬಂಧಪಟ್ಟ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಸಮಸ್ಯೆಗಳಿಗೆ ಶೀಘ್ರ ಮುಕ್ತಿ ನೀಡುವಂತೆ ಸೂಚನೆ ನೀಡಿದರು.ಬಾಲಕಿ ಖುಷಿ ಮೃತದೇಹವನ್ನು ಸೋಮವಾರ ಮಧ್ಯಾಹ್ನ ಕೆಂಗೇರಿಯ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಮಂಗಳವಾರ ಮಧ್ಯಾಹ್ನದ ವೇಳೆಗೆ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಿದರು. ನಂತರ ಬಾಲಕಿಯ ಶವವನ್ನು ಆ್ಯಂಬುಲೆನ್ಸ್ ವಾಹನದಲ್ಲಿ ಭದ್ರಾಪುರ ಗ್ರಾಮಕ್ಕೆ ತರಲಾಯಿತು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕಾದು ಕುಳಿತಿದ್ದ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಬಾಲಕಿಯ ಶವಕ್ಕೆ ಅಂತಿಮ ನಮನ ಸಲ್ಲಿಸಿದರು.
ಮಾಜಿ ಶಾಸಕ ಎ.ಮಂಜುನಾಥ್ ರವರು ಜೆಡಿಎಸ್ ಮುಖಂಡರೊಂದಿಗೆ ಭದ್ರಾಪುರ ಗ್ರಾಮಕ್ಕೆ ಭೇಟಿ ನೀಡಿ ಬಾಲಕಿ ಖುಷಿ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಧೈರ್ಯ ಹೇಳಿದರು.