ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ವಸತಿ ಶಾಲೆಯ ಪ್ರತಿ ಕೊಠಡಿಗೂ ತೆರಳಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಶಾಸಕರು, ಶಾಲೆಯಲ್ಲಿನ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳು, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ಊಟ ಮತ್ತು ವಸತಿ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದು, ಸರ್ಕಾರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಪ್ರತಿವರ್ಷ ಕೋಟ್ಯಂತರ ರು. ಅನುದಾನ ನೀಡುತ್ತಿದೆ. ಇದರ ಸದ್ಬಳಕೆಯಾಗಬೇಕಾದರೆ ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಹೆಚ್ಚಳವಾಗಬೇಕು. ಸರ್ಕಾರದ ಸವಲತ್ತು ಪಡೆಯುತ್ತಿರುವ ಮಕ್ಕಳು ಕಲಿಕೆಯ ವಿಚಾರದಲ್ಲಿ ಕಠಿಣ ಪರಿಶ್ರಮ ಪಡಬೇಕು. ಉತ್ತಮ ಫಲಿತಾಂಶ ನೀಡುವ ಮೂಲಕ ಪೋಷಕರಿಗೆ ಮತ್ತು ಕಲಿತ ಶಾಲೆಗೆ ಗೌರವ ತಂದುಕೊಡುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಕೆ.ಆರ್.ಪೇಟೆ ತಾಲೂಕು ಜಿಲ್ಲೆಯಲ್ಲಿಯೇ ಮೊದಲ ಸ್ಥಾನಕ್ಕೆ ಬರಬೇಕು ಎನ್ನುವುದು ನನ್ನ ಆಶಯ. ಅದರಿಂದ ತಾಲೂಕಿನ ಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪ್ರತಿ ಶಾಲೆಯ ಶೈಕ್ಷಣಿಕ ಚಟುವಟಿಕೆಗಳ ಪರಿಶೀಲನೆ ಮಾಡುವ ಉದ್ದೇಶ ಹೊಂದಿದ್ದೇನೆ ಎಂದರು.ಶಿಕ್ಷಕರು ಬದ್ಧತೆಯಿಂದ ಕೆಲಸ ಮಾಡಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮ ವಹಿಸಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೂ ಈಗಾಗಲೇ ಮಾತನಾಡಿದ್ದು, ಪರೀಕ್ಷಾ ಫಲಿತಾಂಶ ಹೆಚ್ಚಳಕ್ಕೆ ಗಮನ ಹರಿಸುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.