ಸೋಮವಾರಪೇಟೆ: ತಾಲೂಕಿನ ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೋರಿಕಲ್ ಬಸವನಹಳ್ಳಿ ಹಾಗೂ ಶಿರಹ ಗ್ರಾಮಗಳ ವ್ಯಾಪ್ತಿಯಲ್ಲಿ ಹರಿಯುವ ಕಕ್ಕೆಹೊಳೆಗೆ, ಸೇತುವೆಯೊಂದಿಗೆ ಚೆಕ್‌ಡ್ಯಾಮ್ ನಿರ್ಮಾಣಕ್ಕೆ ಶಾಸಕ ಡಾ. ಮಂತರ್ ಗೌಡ ಈಚೆಗೆ ಭೂಮಿಪೂಜೆ ನೆರವೇರಿಸಿದರು.ನಂತರ ಶಾಸಕರು ಮಾತನಾಡಿ, ಗ್ರಾಮೀಣ ಭಾಗದ ಜನರ ಬಹುದಿನಗಳ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಚೆಕ್‌ಡ್ಯಾಮ್ ನಿರ್ಮಾಣದಿಂದ ಮಳೆಗಾಲದಲ್ಲಿ ನೀರಿನ ಹರಿವಿನ ನಿರ್ವಹಣೆಗೆ ಅನುಕೂಲವಾಗುವುದರ ಜೊತೆಗೆ, ನೀರಿನ ಸಂಗ್ರಹಣೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಳಕ್ಕೂ ಸಹಕಾರಿಯಾಗಲಿದೆ. ಇದರಿಂದ ಸುತ್ತಮುತ್ತಲಿನ ಕೃಷಿ ಚಟುವಟಿಕೆಗಳಿಗೂ ಅನುಕೂಲವಾಗುವ ನಿರೀಕ್ಷೆಯಿದೆ ಎಂದರು.ಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲಿಯೂ ಜನರ ಅಗತ್ಯಗಳಿಗೆ ಸ್ಪಂದಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಗ್ರಾಮೀಣ ಜನರ ಜೀವನಮಟ್ಟ ಸುಧಾರಣೆ ಹಾಗೂ ಶಾಶ್ವತ ಮೂಲಸೌಕರ್ಯ ಕಲ್ಪಿಸುವುದು ತಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದರು.ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್ ಹಾಗೂ ಗ್ರಾಮಸ್ಥರು ಇದ್ದರು.