ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಹೊರವಲಯದ ಮಾರೇಹಳ್ಳಿ ಲಕ್ಷ್ಮಿನರಸಿಂಹಸ್ವಾಮಿ, ಗಂಗಾಧಾರೇಶ್ವರಸ್ವಾಮಿ ಹಾಗೂ ದಂಡಿನ ಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ತಮ್ಮ ನಾಯಕನ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದರು.
ಪಟ್ಟಣದ ಪ್ರವಾಸಿ ಮಂದಿರ ಮುಂಭಾಗದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಬ್ಲಾಕ್ ಕಾಂಗ್ರೆಸ್‌ನಿಂದ ಹಮ್ಮಿಕೊಂಡಿದ್ದ ವಿಶೇಷ ಪೂಜಾ ಕಾರ್ಯಕ್ರಮಕ್ಕೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕುಟುಂಬ ಸಮೇತ ದೇವಸ್ಥಾನಗಳಿಗೆ ಆಗಮಿಸಿ ದೇವರಿಗೆ ಪೂಜೆ ಸಲ್ಲಿಸಿದರು.ನಂತರ ಮಾರೇಹಳ್ಳಿ ದೇವಸ್ಥಾನದ ಮುಂಭಾಗ ಮಂಡ್ಯ ಜಿಲ್ಲಾ ಮಟ್ಟದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ತಂದಿದ್ದ ಕೇಕ್ ಕತ್ತರಿಸಿ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು. ನೂರಾರು ಮಂದಿ ಆಗಮಿಸಿ ಶುಭಾಶಯ ಕೋರಿದರು. ಗಂಗಾಧರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಕುಟುಂಬ ಸದಸ್ಯರೊಂದಿಗೆ ಸಾರ್ವಜನಿಕರಿಗೆ ಪ್ರಸಾದ ವಿತರಿಸಿದರು. ದಂಡಿನ ಮಾರಮ್ಮ ದೇವಸ್ಥಾನದಲ್ಲಿ 101 ತೆಂಗಿನ ಕಾಯಿ ಹೊಡೆಯುವ ಮೂಲಕ ಕಾಂಗ್ರೆಸ್ ಕಾರ್ಯಕರ್ತ ಪೇಟೆಬೀದಿ ರವಿ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಕಾರ್ಯಕರ್ತರಿಂದ ಪಾನಕ ಮಜ್ಜಿಗೆ ವಿತರಿಸಲಾಯಿತು.
ಮತ್ತೊಂದಡೆ ಕಾಂಗೆಸ್ ಕಾರ್ಯಕರ್ತರು ಪಿ.ಎಂ.ನರೇಂದ್ರಸ್ವಾಮಿ ಅವರ ಹುಟ್ಟು ಹಬ್ಬದ ಅಂಗವಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.
ಶಾಸಕರಿಗೆ ಅಭಿನಂದನೆ ಸಲ್ಲಿಸಲು ಬಂದವರು ನೋಟ್ ಬುಕ್ ಜೊತೆಯಲ್ಲಿ ಬರುವುದು ಸಾಮಾನ್ಯವಾಗಿದ್ದು, ಇದರಿಂದ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ತುಂಬ ಅನುಕೂಲವಾಗುತ್ತಿದೆ ಎಂದರು.
ಈ ವೇಳೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಸಿ.ಜೋಗಿಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಚಿಕ್ಕಲಿಂಗಯ್ಯ, ಮನ್ಮುಲ್ ನಿರ್ದೇಶಕ ಆರ್.ಎನ್.ವಿಶ್ವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಪಿ.ರಾಜು, ದೊಡ್ಡಯ್ಯ, ನಿಕಟಪೂರ್ವ ಅಧ್ಯಕ್ಷ ಕೆ.ಜೆ.ದೇವರಾಜು, ಟಿಎಪಿಸಿಎಂಎಸ್ ಅಧ್ಯಕ್ಷ ಟಿ.ಸಿ.ಚೌಡಯ್ಯ, ಮಹಿಳಾ ಘಟಕದ ಜಿಲ್ಲಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ತಾಲ್ಲೂಕು ಘಟಕದ ಅಧ್ಯಕ್ಷರಾದ ಸುಜಾತಾ ಕೆ.ಎಂ.ಪುಟ್ಟು, ಸುಷ್ಮಾ ರಾಜು, ಯುವ ಘಟಕದ ಅಧ್ಯಕ್ಷ ಶ್ರೀಕಾಂತ್ ಇದ್ದರು.