ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ನಿಧಾನಗತಿ ಕಾಮಗಾರಿ ಬಗ್ಗೆ ಗುತ್ತಿಗೆದಾರರ ಮೇಲೆ ಅಸಾಮಾಧಾನಗೊಂಡ ಶಾಸಕರು ಒಂದು ವಾರದೊಳಗೆ ಚರಂಡಿ ಸೇರಿದಂತೆ ಪ್ರಮುಖವಾದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡಿ ಮುಗಿಸಬೇಕೆಂದು ಸೂಚಿಸಿದರು.
ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಮಳೆಗಾಲ ಪ್ರಾರಂಭವಾದ ಬಳಿಕ ಚರಂಡಿ ಸೇರಿದಂತೆ ಇನ್ನಿತರ ನಿಧಾನಗತಿ ಕಾಮಗಾರಿಯಿಂದ ರಸ್ತೆ ಸಂಚಾರಕ್ಕೆ ಸಾರ್ವಜನಿಕರಿಗೆ ತೊಂದರೆಯಾಗಿತ್ತು. ಈ ಬಗ್ಗೆ ಕಳೆದ ಕೆಲವು ದಿನಗಳ ಹಿಂದೆ ಶಾಸಕ ಹರೀಶ್ ಪೂಂಜ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆಸಿ ಸಾರ್ವಜನಿಕ ಸಂಚಾರಕ್ಕೆ ಹಾಗೂ ಶಾಲೆಯ ಬಳಿ ಮಕ್ಕಳಿಗೆ ತೊಂದರೆ ಆಗದ ರೀತಿಯಲ್ಲಿ ತ್ವರಿತ ಗತಿಯ ಕಾಮಗಾರಿ ಮಾಡಬೇಕು ಎಂದು ಸೂಚಿಸಿದ್ದರು. ಆದರೆ ಗುತ್ತಿಗೆದಾರರು ಕಾಮಗಾರಿ ನಿಧಾನಗತಿಯಲ್ಲಿ ನಡೆಸುತ್ತಿದ್ದರಿಂದ ಸಮಸ್ಯೆ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಪೂಂಜ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ಕೆಲವೊಂದು ಕಡೆಗಳಲ್ಲಿ ಕೆಸರಿನಿಂದಾಗಿ ವಾಹನ ಸವಾರರಿಗೆ ತೊಂದರೆಯಾಗಿದೆ ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು. ಅಲ್ಲಲ್ಲಿ ಚರಂಡಿಯಲ್ಲಿ ನೀರು ನಿಂತಿರುವುದನ್ನು ಸರಿಪಡಿಸುವಂತೆ ಸೂಚಿಸಿದರು. ಭಾರೀ ಮಳೆಯ ನಡುವೆಯೂ ಶಾಸಕರು ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ತೆರಳಿ ಸಮಸ್ಯೆಗಳನ್ನು ಖುದ್ದು ವೀಕ್ಷಿಸಿ ತಕ್ಷಣ ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.