ಕನ್ನಡಪ್ರಭ ವಾರ್ತೆ ಅಥಣಿ
ಸಚಿವ ಸತೀಶ್ ಜಾರಕಿಹೊಳಿ ಬಹಿರಂಗವಾಗಿ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದರೇ, ಇತ್ತ ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಅಭಿಮಾನಿಗಳ ವಿರುದ್ಧ ಪರೋಕ್ಷವಾಗಿ ತಮ್ಮ ಅಸಮಾಧಾನ ಹೊರಹಾಕಿರುವುದು ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಗುಟ್ಟಾಗಿ ಉಳಿದಿಲ್ಲ.ಇದರ ನಡುವೆ ಅಥಣಿಯಲ್ಲಿ ಶಾಸಕ ಲಕ್ಷ್ಮಣ ಸವದಿ ನಿವಾಸಕ್ಕೆ ಶುಕ್ರವಾರ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ದಿಢೀರ್ ಭೇಟಿ ನೀಡಿ ಗಂಟೆಗಳ ಕಾಲ ಗುಪ್ತ ಮಾತುಕತೆ ನಡೆಸಿದ್ದಾರೆ. ಇದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.ಅಥಣಿಯಲ್ಲಿ ಲಕ್ಷ್ಮಣ ಸವದಿ ಬೆಂಬಲಿಗರು ಬಿಜೆಪಿಗೆ ಬೆಂಬಲಿಸಿದ್ದಾರೆ. ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ಪಕ್ಷೇತರ ಅಭ್ಯರ್ಥಿ ಪರ ಕೆಲಸ ಮಾಡಿದ್ದಾರೆ ಎಂದು ಸಚಿವ ಸತೀಶ ಜಾರಕಿಹೊಳಿ ಕಳೆದ ಎರಡ್ಮೂರು ದಿನಗಳಿಂದ ಸವದಿ, ತಮ್ಮಣ್ಣವರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಸತೀಶ್ ಆರೋಪದ ಬೆನ್ನಲ್ಲೇ ಉಭಯ ನಾಯಕರ ಭೇಟಿ, ಸುದೀರ್ಘ ಮಾತುಕತೆ ನಡೆಸಿದ್ದಾರೆ.