ಕನ್ನಡಪ್ರಭ ವಾರ್ತೆ ಅರಸೀಕೆರೆ
ತಾಲೂಕಿನ ಹಲವು ಭಾಗಗಳಲ್ಲಿ ಡೆಂಘೀ ರೋಗ ಪ್ರಕರಣಗಳು ಉಲ್ಬಣಿಸಿದ್ದು, ಈ ಬಗ್ಗೆ ಸರಿಯಾಗಿ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಶಾಸಕ ಕೆ. ಎಂ. ಶಿವಲಿಂಗೇಗೌಡ ತಾಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ, ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರಕಬೇಕು ಜತೆಗೆ ಆಸ್ಪತ್ರೆಯ ಒಳಗೆ ಮತ್ತು ಹೊರಗೆ ಸ್ವಚ್ಛತೆ ಕಾಪಾಡಿಕೊಳ್ಳುವಲ್ಲಿ ನಿಗಾ ವಹಿಸಬೇಕು ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ಹಾಗೂ ಸಿಬ್ಬಂದಿಗೆ ಸೂಚಿಸಿದರು.ನಗರದ ತಾಲೂಕು ಸರ್ಕಾರಿ ಜೆ. ಸಿ. ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೆಂಘೀ ನಿಯಂತ್ರಣಕ್ಕೆ ಸರಕಾರಿ ಆಸ್ಪತ್ರೆಯ ವೈದ್ಯರು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಅಲ್ಲದೇ ತಾಲೂಕಿನ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಡೆಂಘೀ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಬೇಕಿದೆ. ಜತೆಯಲ್ಲಿ ಆರೋಗ್ಯ ಇಲಾಖೆಯ ನಿರ್ದೇಶನಗಳನ್ನು ಸಾರ್ವಜನಿಕರು ಪಾಲಿಸುವುದು ಬಹುಮುಖ್ಯವಾಗಿದೆ ಎಂದರು. ಸಾರ್ವಜನಿಕರು ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡರೆ ಯಾವುದೇ ರೋಗಗಳು ಹರಡಲು ಸಾಧ್ಯವೇ ಇಲ್ಲ, ವೈದ್ಯರು ಆಸ್ಪತ್ರೆಗೆ ಬರುವ ರೋಗಿಗಳ ಬಗ್ಗೆ ಹೆಚ್ಚು ನಿಗಾ ವಹಿಸಬೇಕಿದೆ, ರೋಗಿಗಳು ಆಸ್ಪತ್ರೆಗೆ ದಾಖಲಾದ ತಕ್ಷಣ ಸೂಕ್ತ ಚಿಕಿತ್ಸೆ ನೀಡಲು ಮುಂದಾಗಬೇಕು, ವೈದ್ಯರು ಮೊದಲು ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕು ಎಂದು ಹೇಳಿದರು. ರೋಗಿಗಳಿಗೆ ಔಷಧಿ ವ್ಯವಸ್ಥೆ ಸಮರ್ಪಕವಾಗಿ ಒದಗಬೇಕು, ಹೆರಿಗೆ ವಾರ್ಡ್ ಮತ್ತು ಮಕ್ಕಳ ವಾರ್ಡ್, ತುರ್ತು ನಿಗಾ ಘಟಕ ವಾರ್ಡ್ ಸೇರಿದಂತೆ ಇಡೀ ಆಸ್ಪತ್ರೆಯ ಸ್ವಚ್ಛತೆಗೆ ಆದ್ಯತೆ ನೀಡುವುದು ಅನಿವಾರ್ಯವಾಗಿದೆ, ಶೌಚಾಲಯ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳು ಸಮರ್ಪಕವಾಗಿಟ್ಟುಕೊಳ್ಳಲು ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಹೆಚ್ಚು ಗಮನಹರಿಸಬೇಕು ಎಂದರು.
ಆಸ್ಪತ್ರೆಯಲ್ಲಿ ಹೊರ ರೋಗಿಗಳಿಗೆ ಚುಚ್ಚುಮದ್ದು ನೀಡುವ ಕೊಠಡಿಗೆ ಭೇಟಿ ನೀಡಿ, ಒಂದೇ ಕೊಠಡಿಯಲ್ಲಿ ಮಹಿಳೆಯರು ಮತ್ತು ಪುರುಷರಿಗೆ ಚುಚ್ಚುಮದ್ದು ನೀಡುತ್ತಿರುವುದನ್ನು ಗಮನಿಸಿದ ಶಾಸಕರು ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಚುಚ್ಚುಮದ್ದು ಕೊಠಡಿ ವ್ಯವಸ್ಥೆ ಮಾಡುವಂತೆ ವೈದ್ಯಾಧಿಕಾರಿ ಡಾ. ಸುರೇಶ್ ಅವರಿಗೆ ಸೂಚಿಸಿದರು. ಅಲ್ಲದೆ ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯೊಬ್ಬರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲು ವಿಳಂಬ ಮಾಡುತ್ತಿದ್ದ ಆ್ಯಂಬುಲೆನ್ಸ್ ಚಾಲಕನನ್ನು ಕರೆದು ತಕ್ಷಣವೇ ಕರೆದೊಯ್ಯುವಂತೆ ತಾಕೀತು ಮಾಡಿದರು.ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ತಿಮ್ಮರಾಜು, ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸುರೇಶ್, ಡಾ. ಷಡಕ್ಷರಿ, ಡಾ. ಪ್ರದೀಪ್, ಆಸ್ಪತ್ರೆಯ ಆಡಳಿತ ವರ್ಗ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.