ಕೊಡಗು ಜಿಲ್ಲೆಯ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಶಾಸಕರು ತಮ್ಮ ಅವಧಿಯಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳ ಕುರಿತು ಜಿಲ್ಲೆಯ ಇಬ್ಬರು ಶಾಸಕರು ಶ್ವೇತಪತ್ರ ಹೊರಡಿಸಬೇಕು ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಆಗ್ರಹಿಸಿದ್ದಾರೆ.
ಮಡಿಕೇರಿ : ಕೊಡಗು ಜಿಲ್ಲೆಯ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಶಾಸಕರು ತಮ್ಮ ಅವಧಿಯಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳ ಕುರಿತು ಜಿಲ್ಲೆಯ ಇಬ್ಬರು ಶಾಸಕರು ಶ್ವೇತಪತ್ರ ಹೊರಡಿಸಬೇಕು ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯ ಗ್ರಾಮೀಣ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಜನರು ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಅಭಿವೃದ್ಧಿ ಕಾಮಗಾರಿಗಳ ಕುರಿತು ಜನರಿಗೆ ಸ್ಪಷ್ಟ ಮಾಹಿತಿ ನೀಡುವ ಜವಾಬ್ದಾರಿ ಶಾಸಕರ ಮೇಲಿದೆ ಎಂದರು.ರಾಜ್ಯ ಸರ್ಕಾರ ತೆರಿಗೆ ಹೆಚ್ಚಳದ ಮೂಲಕ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹೇರುತ್ತಿದೆ. ಹೊಸ ವಾಹನಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಲಾಗುತ್ತಿದೆ. ಮಡಿಕೇರಿಯಲ್ಲಿ ೭೦೦ ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಇದೀಗ ಆಸ್ಪತ್ರೆಯಲ್ಲಿ ಔಷಧಿಗಳ ಕೊರತೆಯಿಂದ ರೋಗಿಗಳು ಹೊರಗಿನಿಂದ ಖರೀದಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ಅತ್ತೂರು-ಯಡವನಾಡು ಪುನರ್ವಸತಿ ಪ್ರದೇಶವನ್ನು ಅರಣ್ಯ ಪ್ರದೇಶವೆಂದು ಪರಿಗಣಿಸಿರುವುದು ಹಾಗೂ ಸುಮಾರು ೨೫ ಸಾವಿರ ಎಕರೆ ಕೃಷಿ ಭೂಮಿಯನ್ನು ಅರಣ್ಯವೆಂದು ಘೋಷಿಸಲು ಸರ್ಕಾರ ಮುಂದಾಗಿರುವುದು ಕೃಷಿಕರಲ್ಲಿ ಆತಂಕ ಮೂಡಿಸಿದೆ. ಅರಣ್ಯ ಇಲಾಖೆಯಿಂದ ರೈತರಿಗೆ ಕಿರುಕುಳವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಕೊಡಗು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಕುರಿತು ಜನಜಾಗೃತಿ ಮೂಡಿಸಲು ಕೊಡಗು ಜಿಲ್ಲಾ ಬಿಜೆಪಿ ಎರಡು ಹಂತಗಳಲ್ಲಿ ಪ್ರತಿಭಟನಾ ಜಾಥಾ ಆಯೋಜಿಸಿದ್ದು, ನ.೨೦ರಂದು ವಿರಾಜಪೇಟೆಯಿಂದ ಮಡಿಕೇರಿವರೆಗೆ ಹಾಗೂ ನ.೨೩ರಂದು ಬೆಟ್ಟದಳ್ಳಿಯಿಂದ ಸೋಮವಾರಪೇಟೆಯವರೆಗೆ ಜಾಥಾ ನಡೆಯಲಿದೆ ಎಂದು ತಿಳಿಸಿದರು.
ನ.೨೦ರಂದು ವಿರಾಜಪೇಟೆಯಿಂದ ಆರಂಭವಾಗುವ ಜಾಥಾ ಮಾರ್ಗಮಧ್ಯೆ ವಿವಿಧೆಡೆ ಜನಜಾಗೃತಿ ಸಭೆಗಳನ್ನು ನಡೆಸಿ ಮಡಿಕೇರಿ ತಲುಪಲಿದೆ. ಬಳಿಕ ಖಾಸಗಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಸಭೆ ನಡೆಸಿ, ಲೋಕೋಪಯೋಗಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ಭ್ರಷ್ಟಾಚಾರ, ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿರುವುದು ಸೇರಿದಂತೆ ಹಲವು ಸಮಸ್ಯೆಗಳು ತಲೆದೋರಿವೆ. ಹಾಲಿನ ದರ ಹೆಚ್ಚಳದ ಹೊರೆ ಗ್ರಾಹಕರ ಮೇಲೆ ಬಿದ್ದಿದ್ದು, ಬಸ್ ಪ್ರಯಾಣ ದರದಲ್ಲಿ ಶೇ.೩೦ರಿಂದ ೪೦ರಷ್ಟು ಏರಿಕೆಯಾಗಿರುವುದು ಜನಸಾಮಾನ್ಯರಿಗೆ ಹೊರೆಯಾಗಿದೆ ಎಂದು ಟೀಕಿಸಿದರು.ಶಾಸಕರ ಕಚೇರಿಗೆ ಭೇಟಿ ನೀಡುವವರಿಗೆ ಕಾಂಗ್ರೆಸ್ ಶಾಲು ಹಾಕಿ ಪಕ್ಷ ಸೇರ್ಪಡೆಯಾಗಿದ್ದಾರೆ ಎಂದು ಪ್ರಚಾರ ಮಾಡಲಾಗುತ್ತಿದೆ. ಬಿಜೆಪಿಯವರು ಕಾಂಗ್ರೆಸ್ ಸೇರಿರುವುದಕ್ಕೆ ಪುರಾವೆ ನೀಡಲಿ ಎಂದು ರವಿ ಕಾಳಪ್ಪ ಸವಾಲು ಹಾಕಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ ಮಾತನಾಡಿ, ಸರ್ಕಾರದ ರೈತ ವಿರೋಧಿ ಧೋರಣೆಯಿಂದ ಕೊಡಗಿನಲ್ಲಿ ಸಿ ಮತ್ತು ಡಿ ಭೂಮಿ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಜನಸಾಮಾನ್ಯರು ಹಾಗೂ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ದೂರಿದರು.ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಮಾತನಾಡಿ, ಕಾವೇರಿ ನದಿಯ ಮೂಲಕ ಇಡೀ ರಾಜ್ಯಕ್ಕೆ ನೀರು ಒದಗಿಸುವ ಕೊಡಗು ಜಿಲ್ಲೆಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಮುಖಂಡ ಮನು ಮುತ್ತಪ್ಪ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.