ಬೇಲೂರಲ್ಲಿ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಸುರೇಶ್‌

KannadaprabhaNewsNetwork | Published : Mar 13, 2024 2:05 AM

ಸಾರಾಂಶ

ರಾಜ್ಯ ಸರ್ಕಾರ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ ನೀಡಲು ಉಚಿತ ಲ್ಯಾಪ್‌ಟಾಪ್ ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು. ಬೇಲೂರಿನ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ ಬೇಲೂರು: ರಾಜ್ಯ ಸರ್ಕಾರ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ ನೀಡಲು ಉಚಿತ ಲ್ಯಾಪ್‌ಟಾಪ್ ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.

ಕರ್ನಾಟಕ ಸರ್ಕಾರ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು ವತಿಯಿಂದ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮವನ್ನು ಪಟ್ಟಣದ ತಾಲೂಕು ಪಂಚಾಯತಿ ಶಾಸಕರ ಕಚೇರಿಯಲ್ಲಿ ಶಾಸಕ ಎಚ್.ಕೆ.ಸುರೇಶ್ ನೇತೃತ್ವದಲ್ಲಿ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿ, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸರ್ಕಾರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡುತ್ತಿದೆ. ಇದರ ಸದುಪಯೋಗ ಪಡೆದು ಉನ್ನತ ಶಿಕ್ಷಣ ಪಡೆದು ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.

ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸನ್ನಿಹಿತವಾಗುತ್ತಿದೆ. ಮಕ್ಕಳು ಚೆನ್ನಾಗಿ ಓದಿಕೊಳ್ಳಬೇಕು. ಲ್ಯಾಪ್‌ಟ್ಯಾಪ್ ವಿತರಣೆ ಬಡ ವರ್ಗಕ್ಕೆ ಸೇರುವ ಕಟ್ಟಡ ಕಾರ್ಮಿಕ ಮಕ್ಕಳಿಗೆ ಅನುಕೂಲವಾಗಲಿದೆ. ಸರ್ಕಾರದ ಯೋಜನೆಗಳನ್ನು ಅರ್ಹ ಪಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ನಾನು ಪ್ರಾಮಾಣಿಕವಾಗಿ ಮಾಡುತ್ತೇನೆ. ಅಧಿಕಾರಿಗಳು ಕೂಡ ಜನರ ಕಷ್ಟಗಳಿಗೆ ಸ್ಪಂದಿಸಬೇಕು. ಕಾರ್ಮಿಕರ ಮಕ್ಕಳು ಓದಿ ವಿದ್ಯಾವಂತರಾಗಿ ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಏರಬೇಕು ಎಂದು ಹೇಳಿದರು.

ಕೂಲಿ ಕಾರ್ಮಿಕರ ಕಾರ್ಡ್ ಹೊಂದಿರುವವರಿಗೆ ಸರ್ಕಾರ ಸ್ಕಾಲರ್ಶಿಪ್ ಹಾಗೂ ಇದೇ ಮೊದಲ ಬಾರಿಗೆ ಸರ್ಕಾರ ಕಾರ್ಮಿಕರ ಬಡ ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡುತ್ತಿದೆ ಎಂದು ಹೇಳಿದರು.

ತಾಪಂ ಕಾರ್ಯ ನಿರ್ವಹಣಾಧಿಕಾರಿ ಸತೀಶ್, ಕಾರ್ಮಿಕ ಅಧಿಕಾರಿ ಯಮುನಾ, ಬೇಲೂರು ಕಟ್ಟಡ ಕಾರ್ಮಿಕರ ಇಲಾಖೆಯ ವಿಜಯ್ ಕುಮಾರ್, ಪುರಸಭೆ ಅಧ್ಯಕ್ಷರಾದ ಮೀನಾಕ್ಷಿ ವೆಂಕಟೇಶ್, ಬೇಲೂರಿನ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಅಹಮದ್ ಅಲಿಖಾನ್, ಶರೀಫ್ ಇದ್ದರು. ರಾಜ್ಯ ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Share this article