ಕನ್ನಡಪ್ರಭ ವಾರ್ತೆ ಹಾಸನ
ಚುನಾವಣಾ ಆಯೋಗದ ಎಸ್‌ಐಆರ್ ಅಭಿಯಾನದ ಅಂಗವಾಗಿ ತಹಸೀಲ್ದಾರ್ ಗೀತಾ ಅವರ ನೇತೃತ್ವದಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಶಾಸಕರ ನಿವಾಸಕ್ಕೆ ಭೇಟಿ ನೀಡಿ ಪ್ರಕ್ರಿಯೆಯ ಉದ್ದೇಶ, ಅರ್ಜಿ ಭರ್ತಿ ವಿಧಾನ, ಅಗತ್ಯ ದಾಖಲೆಗಳು ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆಯ ಮಹತ್ವದ ಕುರಿತು ವಿವರಿಸಿದರು. ಬಳಿಕ ಶಾಸಕರಿಂದ ಅಗತ್ಯ ಮಾಹಿತಿಯನ್ನು ಪಡೆದು ಅರ್ಜಿ ನಮೂನೆ ಭರ್ತಿ ಮಾಡಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ಅವರು ತಮ್ಮ ಕುಟುಂಬದ ಎಲ್ಲ ಸದಸ್ಯರ ಮಾಹಿತಿಯನ್ನು ಅಧಿಕಾರಿಗಳಿಗೆ ನೀಡಿ ಎಸ್‌ಐಆರ್ ಪ್ರಕ್ರಿಯೆಗೆ ಪೂರ್ಣ ಸಹಕಾರ ನೀಡಿದರು. ಮತದಾರರ ಪಟ್ಟಿಯಲ್ಲಿ ಹೆಸರು, ವಿಳಾಸ ಹಾಗೂ ಇತರೆ ಮಾಹಿತಿಗಳು ನಿಖರವಾಗಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುತ್ತದೆ. ಆದ್ದರಿಂದ ಪ್ರತಿಯೊಬ್ಬ ಮತದಾರರೂ ಈ ಪ್ರಕ್ರಿಯೆಯನ್ನು ಜವಾಬ್ದಾರಿಯುತವಾಗಿ ಪರಿಗಣಿಸಬೇಕು ಎಂದು ಹೇಳಿದರು. ಮನೆಮನೆಗೆ ಭೇಟಿ ನೀಡುವ ಬಿಎಲ್‌ಒ ಅಧಿಕಾರಿಗಳು ಚುನಾವಣಾ ಆಯೋಗದ ಪರವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರಿಗೆ ಅಗತ್ಯ ದಾಖಲೆಗಳು ಹಾಗೂ ಸರಿಯಾದ ಮಾಹಿತಿಯನ್ನು ನೀಡಬೇಕು. ತಪ್ಪು ಮಾಹಿತಿ ನೀಡುವುದಾಗಲಿ ಅಥವಾ ಮಾಹಿತಿ ನೀಡಲು ನಿರಾಕರಿಸುವುದಾಗಲಿ ಮಾಡಬಾರದು. ಸಾರ್ವಜನಿಕರ ಸಹಕಾರದಿಂದಲೇ ಮತದಾರರ ಪಟ್ಟಿ ಸಮರ್ಪಕವಾಗಿ ಪರಿಷ್ಕರಣೆಯಾಗಲು ಸಾಧ್ಯ ಎಂದು ತಿಳಿಸಿದರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿರುವ ಎಲ್ಲ ಅರ್ಹ ಮತದಾರರು ತಮ್ಮ ಹೆಸರು, ವಿಳಾಸ, ಕುಟುಂಬದ ವಿವರ ಸೇರಿದಂತೆ ಅಗತ್ಯ ಮಾಹಿತಿಯನ್ನು ಪರಿಶೀಲಿಸಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ಯಾವುದೇ ಗೊಂದಲಗಳಿದ್ದರೆ ಸ್ಥಳೀಯ ಬಿಎಲ್‌ಒ ಅಥವಾ ಚುನಾವಣಾ ಅಧಿಕಾರಿಗಳನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ನಿಖರ ಮತದಾರರ ಪಟ್ಟಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಮೂಲಾಧಾರವಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ನಾಗರಿಕರೂ ಚುನಾವಣಾ ಇಲಾಖೆಯೊಂದಿಗೆ ಕೈಜೋಡಿಸಿ ಎಸ್‌ಐಆರ್ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು ಎಂದು ಶಾಸಕರು ಕರೆ ನೀಡಿದರು.ಈ ಸಂದರ್ಭದಲ್ಲಿ ತಹಸೀಲ್ದಾರ್ ಗೀತಾ, ಬಿಎಲ್‌ಒ ಅಧಿಕಾರಿಗಳು, ಚುನಾವಣಾ ಇಲಾಖೆಯ ಸಿಬ್ಬಂದಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.