ಕನ್ನಡಪ್ರಭ ವಾರ್ತೆ ಹಾಸನಈ ವರ್ಷದ ಎಸ್‌ಎಸ್‌ಎಲ್ಸಿ ಫಲಿತಾಂಶದಲ್ಲಿ ಹಾಸನ ಜಿಲ್ಲೆಯು ಉತ್ತಮ ಸಾಧನೆ ತೋರಿದ್ದು, ದ್ವಿತೀಯ ಸ್ಥಾನ ಪಡೆದಿರುವ ಹಿನ್ನೆಲೆಯಲ್ಲಿ ಹಾಸನದ ಬ್ರಿಲಿಯಂಟ್ ಕಾಲೇಜಿನ ಮೂವರು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್ ಸನ್ಮಾನಿಸಿ ಗೌರವಿಸಿದರು. ಚರಿತ್ರಾ ಎಚ್. ಆರ್ ೬೨೨/೬೨೫ ಅಂಕಗಳನ್ನು ಗಳಿಸಿ ಮೆಚ್ಚುಗೆಗೆ ಪಾತ್ರರಾದರೆ, ಚೇತನ್ ಎಸ್.ಎ ೬೧೫/೬೨೫ ಹಾಗೂ ಪ್ರಜ್ವಲ್ ಎ.ಡಿ ೬೧೨/೬೨೫ ಅಂಕಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದು, ಕಠಿಣ ಪರಿಶ್ರಮ, ನಿಯಮಿತ ಅಭ್ಯಾಸ ಮತ್ತು ಶಿಕ್ಷಕರ ಸಮರ್ಪಿತ ಮಾರ್ಗದರ್ಶನವೇ ಯಶಸ್ಸಿನ ಮೂಲ ಎಂದು ತಿಳಿಸಿದರು. ವಿದ್ಯಾರ್ಥಿಗಳ ಶ್ರದ್ಧೆ ಮತ್ತು ಗುರಿ ಸಾಧನೆಗೆ ಇರುವ ನಿಷ್ಠೆ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು ಎಂಬ ಅಭಿಪ್ರಾಯವೂ ವ್ಯಕ್ತವಾಯಿತು.ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಶಕರು, ಈ ಸಾಧನೆ ಕೇವಲ ವಿದ್ಯಾರ್ಥಿಗಳ ವೈಯಕ್ತಿಕ ಜಯವಲ್ಲ, ಜಿಲ್ಲೆಯ ಶೈಕ್ಷಣಿಕ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿ ಎಂದು ಹೇಳಿದರು. ಹಾಸನ ಜಿಲ್ಲೆಯಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಎಂದು ಆಶಯ ವ್ಯಕ್ತಪಡಿಸಿದರು. ಇದೇ ವೇಳೆ, ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಶಾಲಾ ಆಡಳಿತ ಮಂಡಳಿ ಭರವಸೆ ನೀಡಿತು. ಈ ಸಾಧನೆ ಮುಂದಿನ ಪೀಳಿಗೆಯ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದು, ಜಿಲ್ಲೆಯಲ್ಲಿ ಶೈಕ್ಷಣಿಕ ಮಟ್ಟವನ್ನು ಮತ್ತಷ್ಟು ಸಹಕಾರಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತವಾಯಿತು.