ಪ್ರತ್ಯೇಕ ರಾಜ್ಯಕ್ಕೆ ಉತ್ತರ ಕರ್ನಾಟಕ ಭಾಗದ ಶಾಸಕರು ಬೆಂಬಲಿಸಿ

KannadaprabhaNewsNetwork |  
Published : Nov 21, 2025, 03:00 AM IST

ಸಾರಾಂಶ

ನಮ್ಮ ಭಾಗದ ಸಮಗ್ರ ಅಭಿವೃದ್ಧಿಯಾಗಬೇಕಾದರೆ ಪ್ರತ್ಯೇಕ ರಾಜ್ಯ ಅವಶ್ಯ ಮತ್ತು ಅನಿವಾರ್ಯವಾಗಿದೆ. ಈ ಭಾಗದ ಯುವಕರಿಗೆ ಉದ್ಯೋಗಾವಕಾಶಗಳು ಸಿಗಲು ಐಟಿ, ಬಿಟಿ, ಬಹುರಾಷ್ಟ್ರೀಯ ಕಂಪನಿಗಳು ಸ್ಥಾಪನೆಯಾಗಬೇಕು.

ಕನ್ನಡಪ್ರಭ ವಾರ್ತೆ ವಿಜಯಪುರ

ಉತ್ತರ ಕರ್ನಾಟಕ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ಅನುಕೂಲಕ್ಕಾಗಿ ಪ್ರತ್ಯೇಕ ರಾಜ್ಯ ಆಗಬೇಕು ಎನ್ನುವ ಶಾಸಕ ಹಾಗೂ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜು ಕಾಗೆಯವರ ಪ್ರತ್ಯೇಕತೆಯ ಕೂಗಿಗೆ ಈ ಭಾಗದ ಎಲ್ಲ ಶಾಸಕರು ಬೆಂಬಲಿಸಬೇಕು ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಶ ಗೋಲಶೆಟ್ಟಿ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಭಾಗದ ಸಮಗ್ರ ಅಭಿವೃದ್ಧಿಯಾಗಬೇಕಾದರೆ ಪ್ರತ್ಯೇಕ ರಾಜ್ಯ ಅವಶ್ಯ ಮತ್ತು ಅನಿವಾರ್ಯವಾಗಿದೆ. ಈ ಭಾಗದ ಯುವಕರಿಗೆ ಉದ್ಯೋಗಾವಕಾಶಗಳು ಸಿಗಲು ಐಟಿ, ಬಿಟಿ, ಬಹುರಾಷ್ಟ್ರೀಯ ಕಂಪನಿಗಳು ಸ್ಥಾಪನೆಯಾಗಬೇಕು. ಈ ಭಾಗದ ನೀರಾವರಿ ಯೋಜನೆಗಳು ಪೂರ್ಣಗೊಳ್ಳಬೇಕು. ರೈತರ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಸಿಗಬೇಕು. ಎಲ್ಲ ವರ್ಗದ ಜನರು ಸ್ವಾಭಿಮಾನ, ಸ್ವಾತಂತ್ರ್ಯ, ಸ್ವಾವಲಂಬನೆಯೊಂದಿಗೆ ಸಮಗ್ರ ಅಭಿವೃದ್ಧಿಯಾಗಬೇಕಾದರೆ ಪ್ರತ್ಯೇಕ ರಾಜ್ಯ ಅನಿವಾರ್ಯವಾಗಿದೆ. ಉ.ಕ‌ ಭಾಗದ 15 ಜಿಲ್ಲೆಗಳಾದ ಬೀದರ, ಕಲಬುರ್ಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿ, ವಿಜಯನಗರ, ಉತ್ತರ ಕನ್ನಡ, ಹಾವೇರಿ, ದಾವಣಗೆರೆಗಳ ಪ್ರತ್ಯೇಕ ರಾಜ್ಯ ರಚನೆ ಆಗಬೇಕು ಎಂದರು.

208ರಿಂದ ಜನಾಭಿಪ್ರಾಯ ಸಂಗ್ರಹ ಮಾಡಿದ್ದೇವೆ. ಪ್ರತ್ಯೇಕ ರಾಜ್ಯ ಬೇಕು ಎಂದು 1 ಕೋಟಿ 40 ಸಾವಿರ ಜನರು ಸಹಿ ಮಾಡಿದ್ದಾರೆ. ಇತ್ತೀಚೆಗೆ ಪ್ರತ್ಯೇಕ ಮೈಸೂರು ರಾಜ್ಯ ರಚನೆಗೆ ಆ ಭಾಗದ ಹೋರಾಟಗಾರರು ಆಗ್ರಹಿಸಿದ್ದು ಉತ್ತರ ಕರ್ನಾಟಕ ಹೋರಾಟ ಸಮಿತಿಯು ಸ್ವಾಗತಿಸಿದೆ. ಕಾಗೆಯವರ ಪತ್ರಕ್ಕೆ ಈಗಾಗಲೇ ಅನೇಕ ಶಾಸಕರು ಬೆಂಬಲ ವ್ಯಕ್ತಪಡಿಸಿದ್ದು ಉತ್ತರ ಕರ್ನಾಟಕ ಭಾಗದ ಎಲ್ಲಾ ಜನಪ್ರತಿನಿಧಿಗಳು ಬೆಂಬಲಿಸಬೇಕಾಗಿದೆ ಎಂದು ಹೇಳಿದರು.

ಗೌರವ ಸಲಹೆಗಾರ ಸಂಗನಗೌಡ ಪಾಟೀಲ ಮಾತನಾಡಿ, ಈ ಹಿಂದೆ ಸಂಸದ ರಮೇಶ ಜಿಗಜಿಣಗಿ ರಾಜ್ಯಪಾಲರಿಗೆ ಪ್ರತ್ಯೇಕ ರಾಜ್ಯ ಆಗ್ರಹಿಸಿ ಪತ್ರ ಬರೆದಿದ್ದಾರೆ. ಪಕ್ಷಾತೀತವಾಗಿ ಉತ್ತರ ಕರ್ನಾಟಕ ಭಾಗದ ಎಲ್ಲಾ ಜನಪ್ರತಿನಿಧಿಗಳು ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ಲೋಕಸಭಾ ಸದಸ್ಯರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟಕ್ಕೆ ಬೆಂಬಲಿಸಬೇಕಾಗಿದೆ. 2018 ರಿಂದ ಉತ್ತರ ಕರ್ನಾಟಕ ಹೋರಾಟ ಸಮಿತಿಯು ಪ್ರತ್ಯೇಕ ರಾಜ್ಯಕ್ಕಾಗಿ ಲಿಖಿತ ಅಭಿಪ್ರಾಯ ಮತ್ತು ಸಹಿ ಸಂಗ್ರಹಣ ಅಭಿಯಾನವನ್ನು ಪ್ರಾರಂಭಿಸಿದ್ದು ಒಂದು ಕೋಟಿ ನಲವತ್ತು ಲಕ್ಷಕ್ಕೂ ಅಧಿಕ ಜನರ ಸಹಿ ಸಂಗ್ರಹ ಮಾಡಿದೆ. ನವೆಂಬರ್ ಒಂದರಿಂದ ಜನಪ್ರತಿನಿಧಿಗಳಿಂದ ಸಹಿ ಸಂಗ್ರಹ ಹಾಗೂ ಪತ್ರ ಚಳವಳಿಯ ಅಭಿಯಾನವನ್ನು ಪ್ರಾರಂಭಿಸಿದ್ದು ಈಗಾಗಲೇ ಈ ಭಾಗದ ಅನೇಕ ಜನಪ್ರತಿನಿಧಿಗಳು ಇದನ್ನು ಬೆಂಬಲಿಸಿದ್ದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಪತ್ರವನ್ನು ಕೂಡ ಬರೆದಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಭಾಗ್ಯರಾಜ ಸೊನ್ನದ, ಅಪ್ಪಾಸಾಬ ಯರನಾಳ, ಅಪ್ಪಾಸಾಬ ಬುಗಡೆ, ಚೆನ್ನು ಕಟ್ಟಿಮನಿ, ನಾರಾಯಣ ಕುಲಕರ್ಣಿ ಶ್ರೀಶೈಲ ಮುಳಜಿ ಉಪಸ್ಥಿತರಿದ್ದರು.

PREV

Recommended Stories

ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
ಅಧಿಕಾರ ಕೊಟ್ಟಿರುವುದು 5 ವರ್ಷಕ್ಕೆ: ಸಿಎಂ ಸಿದ್ದರಾಮಯ್ಯ