ನಿಗಮ ಮಂಡಳಿಯಲ್ಲಿ ಶಾಸಕರಾದ ಶಿವಾನಂದ ಕೌಜಲಗಿ, ರಾಜು ಕಾಗೆ ಮಣೆ

KannadaprabhaNewsNetwork | Published : Jan 27, 2024 1:15 AM

ಸಾರಾಂಶ

ಬೆಳಗಾವಿ: ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಕೊನೆಗೂ ರಾಜ್ಯ ಸರ್ಕಾರ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳನ್ನು ಹಿರಿಯ ಶಾಸಕರಿಗೆ ನೀಡಲಾಗಿದ್ದು,ಬೆಳಗಾವಿ ಜಿಲ್ಲೆಯ ಇಬ್ಬರು ಶಾಸಕರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ಸಿಕ್ಕಿದೆ. ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಕರ್ನಾಟಕ ಹಣಕಾಸು ನಿಗಮ ಸಿಕ್ಕಿದೆ. ಕೌಜಲಗಿ ಕಾಂಗ್ರೆಸ್‌ನ ಹಿರಿಯ ಶಾಸಕರಾಗಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಯೂ ಆಗಿದ್ದರು. ಆದರೆ, ಸಚಿವ ಸಂಪುಟದಲ್ಲಿ ಸ್ಥಾನ ಲಭಿಸಲಿಲ್ಲ. ಸದ್ಯ ನಿಗಮ ಮಂಡಳಿಗೆ ಅವರನ್ನು ಪರಿಗಣಿಸಲಾಗಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಕೊನೆಗೂ ರಾಜ್ಯ ಸರ್ಕಾರ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳನ್ನು ಹಿರಿಯ ಶಾಸಕರಿಗೆ ನೀಡಲಾಗಿದ್ದು,ಬೆಳಗಾವಿ ಜಿಲ್ಲೆಯ ಇಬ್ಬರು ಶಾಸಕರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ಸಿಕ್ಕಿದೆ.

ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಕರ್ನಾಟಕ ಹಣಕಾಸು ನಿಗಮ ಸಿಕ್ಕಿದೆ. ಕೌಜಲಗಿ ಕಾಂಗ್ರೆಸ್‌ನ ಹಿರಿಯ ಶಾಸಕರಾಗಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಯೂ ಆಗಿದ್ದರು. ಆದರೆ, ಸಚಿವ ಸಂಪುಟದಲ್ಲಿ ಸ್ಥಾನ ಲಭಿಸಲಿಲ್ಲ. ಸದ್ಯ ನಿಗಮ ಮಂಡಳಿಗೆ ಅವರನ್ನು ಪರಿಗಣಿಸಲಾಗಿದೆ.

ಅದರಂತೆ ಕಾಗವಾಡ ಶಾಸಕ ರಾಜು ಕಾಗೆ ಅವರಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಈ ಹಿಂದೆ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದ ರಾಜು ಕಾಗೆ ಕೂಡ ಹಿರಿಯ ಶಾಸಕರಲ್ಲಿ ಒಬ್ಬರು. ಹಿರಿತನದ ಆಧಾರದಲ್ಲಿ ನಿರೀಕ್ಷೆಯಂತೆ ಶಾಸಕರಾದ ಕೌಜಲಗಿ ಹಾಗೂ ಕಾಗೆ ಅವರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಲಾಗಿದೆ. ಆದರೆ, ಮೊದಲ ಹಂತದ ನಿಗಮ ಮಂಡಳಿ ಪಟ್ಟಿಯಲ್ಲಿ ಶಾಸಕರಿಗೆ ಮಾತ್ರ ಮಣೆ ಹಾಕಲಾಗಿದೆ. ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ.

ನಿಗಮ ಮಂಡಳಿ ನೇಮಕ ಪ್ರಕ್ರಿಯೆ ಹಿನ್ನೆಲೆಯಲ್ಲಿ ಪಕ್ಷದ ಮಾಜಿ ಶಾಸಕರು ಹಾಗೂ ಕಾರ್ಯಕರ್ತರು ತಮಗೂ ಕೂಡ ನಿಗಮ ಮಂಡಳಿಗಳಲ್ಲಿ ಸ್ಥಾನ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಪಕ್ಷದ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರು. ಆದರೆ, ಕಾರ್ಯಕರ್ತರಿಗೆ ಮಣೆ ಹಾಕಿಲ್ಲ. ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ( ಬುಡಾ) ಹಾಗೂ ಮಲಪ್ರಭಾ , ಘಟಪ್ರಭಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ( ಕಾಡಾ) ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕರು ಹಾಗೂ ಕಾರ್ಯಕರ್ತರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಪಕ್ಷದ ಕಾರ್ಯಕರ್ತರಿಗೆ ನಿಗಮ ಮಂಡಳಿಗಳಲ್ಲಿ ಆದ್ಯತೆ ನೀಡಿದರೆ ಮುಂಬರುವ ಲೋಕಸಭಾ ಚುನಾವಣೆ ವೇಳೆ ತುಂಬಾ ಅನುಕೂಲವಾಗುತ್ತದೆ ಎನ್ನುವ ಲೆಕ್ಕಾಚಾರವೂ ಇದೆ.

ಜಿಲ್ಲೆಯ 18 ಕ್ಷೇತ್ರಗಳ ಪೈಕಿ 11 ಕ್ಷೇತ್ರಗಳು ಕಾಂಗ್ರೆಸ್‌ ಹಿಡಿತದಲ್ಲಿವೆ. ಜಿಲ್ಲೆಯಲ್ಲಿ ಮತ್ತಷ್ಟು ಪಕ್ಷದ ಸಂಘಟನೆಯ ಅನುಕೂಲದ ದೃಷ್ಟಿಯಿಂದ ಪಕ್ಷದ ಕಾರ್ಯಕರ್ತರಿಗೆ ನಿಗಮ ಮಂಡಳಿಗಳ ನೇಮಕದಲ್ಲಿ ಆದ್ಯತೆ ನೀಡಬೇಕು. ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವ ಕಾರ್ಯಕರ್ತರಿಗೆ ನಿಮಗ ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನ ನೀಡಬೇಕು ಎನ್ನುವುದು ಕಾರ್ಯಕರ್ತರ ಒಕ್ಕೊರಿಲಿನ ಒತ್ತಾಯ.

Share this article