ಮೋದಿ ಗ್ಯಾರಂಟಿಯೇ ಶ್ರೇಷ್ಠ: ಬಿ.ವೈ. ವಿಜಯೇಂದ್ರ

KannadaprabhaNewsNetwork |  
Published : Feb 04, 2024, 01:33 AM ISTUpdated : Feb 04, 2024, 01:31 PM IST
BY Vijayendra

ಸಾರಾಂಶ

ರಾಜ್ಯದ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಹರಿಹಾಯ್ದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮೋದಿ ಗ್ಯಾರಂಟಿಯೇ ಶ್ರೇಷ್ಠ ಎಂದಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಕಾಂಗ್ರೆಸ್ಸಿನ ಬೂಟಾಟಿಕೆ ಗ್ಯಾರಂಟಿಗಿಂತ ಪ್ರಧಾನಿ ನರೇಂದ್ರ ಮೋದಿ ಅವರ ಗ್ಯಾರಂಟಿಯೇ ಶ್ರೇಷ್ಠ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಜಯನಗರದ ಚಂದ್ರಗುಪ್ತ ಮೌರ್ಯ ಮೈದಾನದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರಾಗಿ ಶಾಸಕ ಸಿ.ಕೆ.ರಾಮಮೂರ್ತಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ಯಾರಂಟಿಯ ಮೂಲಕ ಗೆಲುವಿನ ಭ್ರಮೆಯಲ್ಲಿ ತೇಲುತ್ತಿದ್ದ ಕಾಂಗ್ರೆಸ್ ಪಕ್ಷವು ಈಗ ಮರ್ಮಾಘಾತಕ್ಕೆ ಒಳಗಾಗಿದೆ ಎಂದರು.

ಇಡೀ ದೇಶದಲ್ಲಿ ಲೋಕಸಭಾ ಚುನಾವಣೆಯ ಕುರಿತು ಚರ್ಚೆ ನಡೆಯುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯ ನಂತರ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಸಹಜವಾಗಿ ಇಡೀ ದೇಶದಲ್ಲಿ ಉತ್ಸಾಹ ಇತ್ತು. 

ಕರ್ನಾಟಕದ ವಿಜಯ ಪತಾಕೆಯನ್ನು ರಾಷ್ಟ್ರದಾದ್ಯಂತ ತೆಗೆದುಕೊಂಡು ಹೋಗುವ ಭ್ರಮೆಯಲ್ಲಿ ಕಾಂಗ್ರೆಸ್ ಪಕ್ಷದವರು ಇದ್ದರು. ಆದರೆ, ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಢಗಳ ಫಲಿತಾಂಶ ಬಂದ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಮರ್ಮಾಘಾತ ಉಂಟಾಗಿದೆ ಎಂದು ಹೇಳಿದರು.

ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಒಂದು ಭಾಗ, ಹಾಗೆಯೇ ಅಲ್ಲಿರುವ ಮತದಾರರು ಸ್ಪಷ್ಟ ಸಂದೇಶವನ್ನು ದೇಶಕ್ಕೇ ನೀಡಿದ್ದಾರೆ.

ದೇಶದ ಭವಿಷ್ಯದ ದೃಷ್ಟಿಯಿಂದ ಭಾರತವನ್ನು ಒಂದು ಸಮೃದ್ಧಶಾಲಿ, ಶಕ್ತಿಶಾಲಿ ರಾಷ್ಟ್ರವನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಈ ದೇಶವನ್ನು ಜಗತ್ತಿನ ಅಗ್ರಗಣ್ಯ ದೇಶದ ಸಾಲಿನಲ್ಲಿ ಒಯ್ಯುವ ಶಕ್ತಿ, ಎದೆಗಾರಿಕೆ ಇರುವುದು ಪ್ರಧಾನಿ ಮೋದಿ ಅವರಿಗೆ ಮಾತ್ರ. 

ಹಾಗಾಗಿ ದೇಶದ ಉಜ್ವಲ ಭವಿಷ್ಯದ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷದ ಬೂಟಾಟಿಕೆ ಗ್ಯಾರಂಟಿಗಿಂತ ನರೇಂದ್ರ ಮೋದಿ ಅವರ ಗ್ಯಾರಂಟಿಯೇ ಶ್ರೇಷ್ಠ ಎಂಬ ಸಂದೇಶವನ್ನು ಆ ಮೂರು ರಾಜ್ಯಗಳ ಮತದಾರರು ನೀಡಿದ್ದಾರೆ ಎಂದು ತಿಳಿಸಿದರು.

ಖರ್ಗೆಗೆ ಅಭಿನಂದನೆ: ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ಅಪೇಕ್ಷೆ ದೇಶದ ಮತದಾರರಲ್ಲಿದೆ. ರಾಜ್ಯ ಮತ್ತು ದೇಶದ ಮತದಾರರು ಸಹ ಮತದಾನ ದಿನಾಂಕವನ್ನು ರಣೋತ್ಸಾಹದಿಂದ ಎದುರು ನೋಡುತ್ತಿದ್ದಾರೆ. 

ದೇಶದ ಅಲ್ಲಲ್ಲಿ ಅವಶೇಷ ರೂಪದಲ್ಲಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೂ ದೇಶದಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಇಂದು ಅನಿಸಿದೆ. ಮತದಾರರ ಆಶಯವನ್ನು ಅರ್ಥ ಮಾಡಿಕೊಂಡು ಜನರಿಗೆ ತಿಳಿಸಿದ ಖರ್ಗೆ ಅವರಿಗೆ ಅಭಿನಂದನೆಗಳು ಎಂದು ಹೇಳಿದರು.

ಇದೇ ವೇಳೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಅಭಿನಂದಿಸಲಾಯಿತು.

ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಸತೀಶ್‌ ರೆಡ್ಡಿ, ಎಂ.ಕೃಷ್ಣಪ್ಪ, ರವಿ ಸುಬ್ರಹ್ಮಣ್ಯ, ಉದಯ ಬಿ.ಗರುಡಚಾರ್‌, ವಿಧಾನ ಪರಿಷತ್‌ ಸದಸ್ಯ ಗೋಪಿನಾಥ ರೆಡ್ಡಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ