ಕಂಪ್ಲಿ: ಜಾಗತಿಕ ಮಟ್ಟದ ಹಲವು ಸವಾಲುಗಳ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು ಮುನ್ನಡೆಸುತ್ತಿದ್ದಾರೆ. ದೇಶ ಆರ್ಥಿಕವಾಗಿ ಪ್ರಗತಿ ಸಾಧಿಸುತ್ತಿದೆ. ಬದಲಾವಣೆ ತರುವ ಪ್ರಾಮಾಣಿಕ ಕಳಕಳಿ ಹಾಗೂ ಮನಸ್ಥಿತಿ ಇದ್ದಾಗ ಮಾತ್ರ ಸಾಧನೆ ಸಾಧ್ಯ. ಯುವಕರು ತಮ್ಮ ಮುಂದಿರುವ ಅವಕಾಶಗಳನ್ನು ಬಳಸಿಕೊಂಡು ಹೊಸ ಚಿಂತನೆಯೊಂದಿಗೆ ಮುನ್ನಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಯುವಕರಿಗೆ ಕರೆ ನೀಡಿದರು.
ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ. 60ರಷ್ಟು ಯುವಕರಿದ್ದಾರೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಯುವಶಕ್ತಿಯ ಸಾಮರ್ಥ್ಯವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ರಾಜ್ಯದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ ಈ ವರೆಗೆ ಒಂದು ಸಾವಿರ ಹುದ್ದೆಗಳನ್ನೂ ಸಮರ್ಪಕವಾಗಿ ಭರ್ತಿ ಮಾಡಿಲ್ಲ. ಪರೀಕ್ಷೆ ನಡೆಸುವುದು, ಫಲಿತಾಂಶ ಪ್ರಕಟಿಸುವುದು, ಅಂತಿಮ ಪಟ್ಟಿ ಬಿಡುಗಡೆ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಅನಗತ್ಯ ವಿಳಂಬ ಮಾಡಲಾಗುತ್ತಿದೆ. ಇದರಿಂದ ಸರ್ಕಾರದ ಇಚ್ಛಾಶಕ್ತಿಯ ಕೊರತೆ ಎದ್ದು ಕಾಣುತ್ತಿದೆ ಎಂದು ವಿಜಯೇಂದ್ರ ಟೀಕಿಸಿದರು.2028ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಸರ್ಕಾರಿ ಹುದ್ದೆಗಳ ಭರ್ತಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಕಲ್ಯಾಣ ಕರ್ನಾಟಕದ ನೀರಾವರಿ, ಶಿಕ್ಷಣ, ಆರೋಗ್ಯ ಹಾಗೂ ಕೈಗಾರಿಕಾ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಬೇಕು. ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಭಾಗದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.
ವಿಜಯೇಂದ್ರ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ಯುವಕರ ಪ್ರಶ್ನೆಗಳಿಗೆ ಉತ್ತರಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕುರಿತು ಚರ್ಚಿಸಿದರು.