ರಾಜ್ಯಕ್ಕಾದ ವಂಚನೆ ಬಗ್ಗೆ ಮೋದಿ ಚರ್ಚೆಗೆ ಬರಲಿ: ಸಿಎಂ ಸಿದ್ಧರಾಮಯ್ಯ

KannadaprabhaNewsNetwork | Updated : Jan 18 2024, 01:37 PM IST

ಸಾರಾಂಶ

ಕೇಂದ್ರ ಸರ್ಕಾರದಿಂದ ರಾಜ್ಯ ಹಾಗೂ ಕನ್ನಡಿಗರಿಗೆ ಅನ್ಯಾಯವಾಗುತ್ತಿದ್ದು, ಪ್ರಧಾನಿಯವರು ಈ ಬಗ್ಗೆ ಸ್ಥಳ ಹಾಗೂ ಸಮಯ ನಿಗದಿಪಡಿಸಿದರೆ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಸಾರ್ವಜನಿಕ ಚರ್ಚೆಗೆ ಸಿದ್ಧವಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೋದಿಗೆ ಆಹ್ವಾನ ನೀಡಿದ್ದಾರೆ. 

ಕನ್ನಡಪ್ರಭ ವಾರ್ತೆ ಬೆಂಗಳೂರು

‘ಕೇಂದ್ರ ಸರ್ಕಾರದಿಂದ ರಾಜ್ಯ ಹಾಗೂ ಕನ್ನಡಿಗರಿಗೆ ಆಗುತ್ತಿರುವ ಸಾಲು-ಸಾಲು ಅನ್ಯಾಯಗಳನ್ನು ಹೇಳುತ್ತಲೇ ಇದ್ದೇನೆ. ಇದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉತ್ತರಿಸಬೇಕೆ ಹೊರತು ಬಿಜೆಪಿ ಐಟಿ ಘಟಕ ಅಲ್ಲ. 

ಹೀಗಾಗಿ ಪ್ರಧಾನಮಂತ್ರಿಗಳು ಸ್ಥಳ ಹಾಗೂ ಸಮಯ ನಿಗದಿಪಡಿಸಿದರೆ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಸಾರ್ವಜನಿಕ ಚರ್ಚೆಗೆ ಸಿದ್ಧವಾಗಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತನ್ಮೂಲಕ ಬಹಿರಂಗ ಚರ್ಚೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯಕ್ಕೆ ಆಗಿರುವ ಪ್ರಮುಖ ಆರು ಅನ್ಯಾಯಗಳನ್ನು ಪಟ್ಟಿ ಮಾಡಿದ್ದಾರೆ. ತೆರೆದ ಪುಸ್ತಕದಲ್ಲಿ ಕಾಣುವ ಈ ಅನ್ಯಾಯಗಳನ್ನು ಕಂಡು ಮೌನವಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ವರ್ತನೆಯನ್ನು ಉದ್ದೇಶಪೂರ್ವಕವಾದ ನಿರ್ಲಕ್ಷ್ಯ ಎನ್ನಲೇ? ಅಥವಾ ಸಹಜವಾದ ನಿದ್ರಾ ಸ್ಥಿತಿ ಎನ್ನಲೇ ಎಂದು ಪ್ರಶ್ನಿಸಿದ್ದಾರೆ.

ನಾಡಿನಲ್ಲಿ ಆರು ತಿಂಗಳಿಂದ ತೀವ್ರ ಬರಗಾಲ ಉಂಟಾಗಿದೆ. ಬರಪರಿಹಾರದ ಕೆಲಸಗಳಿಗಾಗಿ 18,177 ಕೋಟಿ ರು. ನೀಡಲು ಮೂರು ತಿಂಗಳುಗಳಿಂದ ಒತ್ತಾಯಿಸುತ್ತಾ ಬಂದಿದ್ದೇವೆ. 

ಇಲ್ಲಿಯವರೆಗೆ ಒಂದು ಪೈಸೆ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಸಿದ್ದರಾಮಯ್ಯ ದೂರಿದ್ದಾರೆ.ಯುಪಿಎ ಸರ್ಕಾರದ 14ನೇ ಹಣಕಾಸು ಆಯೋಗವು ಕರ್ನಾಟಕಕ್ಕೆ ನಿಗದಿಪಡಿಸಿದ್ದ ಶೇ.4.72 ತೆರಿಗೆ ಪಾಲನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದ 15ನೇ ಹಣಕಾಸು ಆಯೋಗವು ಶೇ.3.64 ಕ್ಕೆ ಇಳಿಕೆ ಮಾಡಿ ವಂಚಿಸಲಾಗಿದೆ. 

ಇದರಿಂದ ಕನ್ನಡಿಗರು ಕಳೆದ 4 ವರ್ಷಗಳಲ್ಲಿ ಸುಮಾರು 45,000 ಕೋಟಿ ರು.ಗಳಷ್ಟು ಬೆವರ ಗಳಿಕೆಯಿಂದ ಕಟ್ಟಿದ ತೆರಿಗೆ ಹಣ ಕಳೆದುಕೊಂಡಿದ್ದಾರೆ.

ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿರುವ ಕೇಂದ್ರ ಸರ್ಕಾರದ ಸಹಭಾಗಿತ್ವದ ಯೋಜನೆಗಳಿಗೆ ನೀಡುತ್ತಿರುವ ಅನುದಾನವನ್ನು ವರ್ಷದಿಂದ ವರ್ಷಕ್ಕೆ ಕಡಿತಗೊಳಿಸಲಾಗುತ್ತಿದೆ. 2021-22ರ ಅವಧಿಯಲ್ಲಿ 20 ಸಾವಿರ ಕೋಟಿ ರು. ಇದ್ದ ಅನುದಾನ, 2022-23ರಲ್ಲಿ 13 ಸಾವಿರ ಕೋಟಿ ರು.ಗಳಿಗೆ ಇಳಿಕೆಯಾಗಿದೆ.

ಕರ್ನಾಟಕಕ್ಕೆ 5,495 ಕೋಟಿ ರು. ವಿಶೇಷ ಅನುದಾನ ನೀಡುವಂತೆ 15ನೇ ಹಣಕಾಸು ಆಯೋಗವು ಶಿಫಾರಸು ಮಾಡಿತ್ತು. ಆದರೆ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್‌ ಅವರು ಈ ಶಿಫಾರಸ್ಸನ್ನು ತಿರಸ್ಕರಿಸಿದ್ದಾರೆ.

ಏಮ್ಸ್ ಸಂಸ್ಥೆ ಬೇಕೆಂಬ ಕನ್ನಡಿಗರ ಕನಸು ಇನ್ನೂ ಕನಸಾಗಿಯೇ ಉಳಿದಿದೆ. ಕನ್ನಡಿಗರು ಶ್ರಮದಿಂದ ಕಟ್ಟಿದ ಬ್ಯಾಂಕುಗಳು ವಿಲೀನದ ಹೆಸರಲ್ಲಿ ಬೇರೆ ರಾಜ್ಯಗಳ ನಷ್ಟದಲ್ಲಿರುವ ಬ್ಯಾಂಕುಗಳ ಜೊತೆ ವಿಲೀನ ಮಾಡಿ ಕನ್ನಡಿಗರಿಗೆ ದ್ರೋಹ ಬಗೆಯಲಾಗಿದೆ.

ನಮ್ಮ ಹಿರೀಕರು ಕಷ್ಟಪಟ್ಟು ನಿರ್ಮಾಣ ಮಾಡಿದ್ದ ವಿಮಾನ ನಿಲ್ದಾಣವನ್ನು ಖಾಸಗಿಯವರಿಗೆ ಮಾರಲಾಯಿತು. ಹದಿನೆಂಟು ಸಾವಿರ ಕೋಟಿ ರು. ಬೆಂಗಳೂರು ಸಬ್‌ ಅರ್ಬನ್‌ ರೈಲು ಯೋಜನೆಗೆ ಅನುದಾನ ಇಲ್ಲದೆ ಸೊರಗಿ ಹೋಗಿದೆ. ಇನ್ನು ರಾಜ್ಯದ ಇತರೆ ರೈಲ್ವೇ ಯೋಜನೆಗಳನ್ನು ಮೂಲೆಗೆ ತಳ‍್ಳಲಾಗಿದೆ ಎಂದು ದೂರಿದ್ದಾರೆ.

Share this article