ಹೊಸಪೇಟೆ: ನರೇಂದ್ರ ಮೋದಿ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮುಖಂಡ ಸಿದ್ಧಾರ್ಥ ಸಿಂಗ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ನಗರದ ಭಟ್ಟರಹಳ್ಳಿ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಬೃಹತ್ ಬೈಕ್ ರ್‍ಯಾಲಿ ನಡೆಸಿದರು.
ವಿಜಯನಗರ ಕ್ಷೇತ್ರದ ಗ್ರಾಮೀಣ ಹಾಗೂ ನಗರ ಭಾಗದಿಂದ ನೂರಾರು ಬೈಕ್‌ಗಳಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು. ಎಲ್ಲೆಡೆ ಮೋದಿ, ಮೋದಿ ಎಂಬ ಜಯಘೋಷ ಮೊಳಗಿತ್ತು. ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ಸ್ವೀಕಾರ ಸಮಾರಂಭದ ನೇರ ಪ್ರಸಾರಕ್ಕೆ ಎಲ್‌ಇಡಿ ಪರದೆ ವ್ಯವಸ್ಥೆ ಮಾಡಲಾಗಿತ್ತು. ಇನ್ನು ಡಿಜೆ ವ್ಯವಸ್ಥೆ ಮಾಡಲಾಗಿತ್ತು. ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
ಸಿಹಿ ಹಂಚಿ ಸಂಭ್ರಮಾಚರಣೆ:ನರೇಂದ್ರ ಮೋದಿ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮುಖಂಡ ಸಿದ್ಧಾರ್ಥ ಸಿಂಗ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು, ನಗರದ ವಿವಿಧ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ನಗರದ ಸಿದ್ಧಿವಿನಾಯಕ, ವಡಕರಾಯ, ಭಟ್ರಹಳ್ಳಿ ಆಂಜನೇಯ, ಚಿತ್ತವಾಡ್ಗಿ ಅಂಜನೇಯ ಸೇರಿದಂತೆ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅನಂತಶಯನ ಗುಡಿಯ ಪಂಡರಾಪುರ ಕಾಲನಿಗೆ ಭೇಟಿ ನೀಡಿ, ನಾಗರಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು. ಬಿಜೆಪಿ ಮಂಡಲ ಅಧ್ಯಕ್ಷ ಶಂಕರ್ ಮೇಟಿ, ನಗರಸಭೆ ಸದಸ್ಯ ತಾರಿಹಳ್ಳಿ ಜಂಬುನಾಥ, ಮುಖಂಡರಾದ ಐಯಾಳಿ ತಿಮ್ಮಪ್ಪ, ಅಶೋಕ್ ಜೀರೆ, ಪ್ರವೀಣ್, ಸೇರಿ ಕಾರ್ಯಕರ್ತರು ಇದ್ದರು.