ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಮೋದಿ

KannadaprabhaNewsNetwork |  
Published : Jun 11, 2025, 12:11 PM ISTUpdated : Jun 11, 2025, 12:12 PM IST
ಕಾಗೇರಿ ಅವರನ್ನು ಸತ್ಕರಿಸಲಾಯಿತು  | Kannada Prabha

ಸಾರಾಂಶ

ವಿಶ್ವದಲ್ಲಿ ನಾವು ಭಾರತೀಯರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುವ ವಾತಾವರಣ ನಿರ್ಮಾಣವಾಗಿದೆ. ಇದು ಮೋದಿ ಭಾರತವನ್ನು ವಿಶ್ವಗುರು ಮಾಡುವಲ್ಲಿ ನಿರಂತರ ಶ್ರಮಿಸುತ್ತಿರುವುದೇ ಕಾರಣವಾಗಿದೆ

ಕಾರವಾರ: ಭ್ರಷ್ಟಾಚಾರ ರಹಿತ ಆಡಳಿತ ನೀಡಿರುವ ಪ್ರಧಾನಿ ನರೇಂದ್ರ ಮೋದಿ ದೇಶದ 140 ಕೋಟಿ ಭಾರತೀಯರನ್ನು ಒಗ್ಗೂಡಿಸಿ ದೇಶದ ಸರ್ವತೋಮುಖ ಪ್ರಗತಿಗೆ ಶ್ರಮಿಸುತ್ತಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ 11 ವರ್ಷ ಆದ ಹಿನ್ನೆಲೆಯಲ್ಲಿ ನಗರದ ಖಾಸಗಿ ಹೊಟೇಲ್ ನಲ್ಲಿ ಜಿಲ್ಲಾ ಬಿಜೆಪಿ ಏರ್ಪಡಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ನರೇಂದ್ರ ಮೋದಿ ಅಂತ್ಯೋದಯ ಅನುಷ್ಠಾನಕ್ಕೆ ಒತ್ತು ನೀಡುತ್ತಿರುವ ಬಗ್ಗೆ ಮಾಹಿತಿ ನೀಡಿ ಸೇವೆ-ಸುಶಾಸನ ಮತ್ತು ಬಡವರ ಕಲ್ಯಾಣ ಯೋಜನೆ ಜಾರಿಗೆ ತಂದಿರುವುದನ್ನು ವಿವರಿಸಿದರು.

ವಿಶ್ವದಲ್ಲಿ ನಾವು ಭಾರತೀಯರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುವ ವಾತಾವರಣ ನಿರ್ಮಾಣವಾಗಿದೆ. ಇದು ಮೋದಿ ಭಾರತವನ್ನು ವಿಶ್ವಗುರು ಮಾಡುವಲ್ಲಿ ನಿರಂತರ ಶ್ರಮಿಸುತ್ತಿರುವುದೇ ಕಾರಣವಾಗಿದೆ ಎಂದರು.

ಜಾಗತಿಕವಾಗಿ 4ನೇ ಆರ್ಥಿಕ ಶಕ್ತಿಯಾಗಿ ಭಾರತ ಇಂದು ಹೊರಹೊಮ್ಮಿದೆ. ದೇಶ ಮೊದಲು ಎನ್ನುವುದೇ ಬಿಜೆಪಿಯ ಪ್ರಮುಖ ವಿಚಾರಗಳಲ್ಲಿ ಒಂದು. ಕೇಂದ್ರದ ಎನ್‌ಡಿಎ ಸರ್ಕಾರ ರಾಷ್ಟ್ರೀಯ ವಿಚಾರಕ್ಕೆ ಮನ್ನಣೆ ನೀಡಿರುವುದು ಆತ್ಮನಿರ್ಭರತೆಯ ಕಡೆಗೆ ರಾಷ್ಟ್ರ ಸಾಗಲು ಕಾರಣವಾಗಿದೆ ಎಂದು ಹೇಳಿದರು.

ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ ಕರ್ಕಿ, ಮೋದಿ ಸರ್ಕಾರದ 11ವರ್ಷದ ಸಾಧನೆಗಳನ್ನು ಜನರಿಗೆ ಮುಟ್ಟಿಸುವ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.

ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಮಾಜಿ ಶಾಸಕಿ ರೂಪಾಲಿ ನಾಯ್ಕ್, ಪಕ್ಷ ಸಂಘಟನೆಯಲ್ಲಿ ನಿರಂತರ ಕಾರ್ಯಚಟುವಟಿಕೆ ಇರುವುದು ಬಿಜೆಪಿಯಲ್ಲಿ ಮಾತ್ರ ಹಾಗೂ ಪಕ್ಷದಲ್ಲಿ ಕಾರ್ಯಕರ್ತರಿಗೆ ಗೌರವ ಇರುವುದು ಕೇವಲ ಬಿಜೆಪಿಯಲ್ಲಿ ಮಾತ್ರ ನೋಡಲು ಸಾಧ್ಯ ಎಂದರು.

ಒಂದೆಡೆ ಪ್ರಧಾನಿ ನರೇಂದ್ರ ಮೋದಿ ಜನಪರ ಯೋಜನೆ ನೀಡುತ್ತಿದ್ದಾರೆ, ಆದರೆ ಬಡ ಜನತೆಗೆ ನೀಡಿದ ಈ ಕಾರ್ಯಕ್ರಮಗಳನ್ನು ಇಲ್ಲಿನ ರಾಜ್ಯ ಸರ್ಕಾರ ತಡೆ ಹಿಡಿಯುತ್ತಿದೆ, ಜನೌಷಧಿ ಅಂಗಡಿಗಳನ್ನು ಮುಚ್ಚುವ ಹುನ್ನಾರ ನಡೆಸಿದೆ ಎಂದು ಬೇಸರ ವ್ಯಕ್ತಪಡಿಸಿದರು.

ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ವೃಕ್ಷಾರೋಪಣ ಸೇರಿದಂತೆ ರಾಷ್ಟ್ರ ಹಾಗೂ ರಾಜ್ಯ ನಾಯಕತ್ವ ನೀಡಿರುವ ಎಲ್ಲ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸೋಣ ಎಂದು ತಿಳಿಸುತ್ತ ವಿಕಸಿತ ಭಾರತ ಸಂಕಲ್ಪ ಪತ್ರ ಪ್ರತಿಜ್ಞಾ ವಿಧಿ ಬೋಧಿಸಿದರು.

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸದರಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಸಮಿತಿಯಿಂದ ಹಾಗೂ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ್ ಸನ್ಮಾನಿಸಿದರು.

ಮಾಜಿ ಶಾಸಕ ಸುನಿಲ್ ಹೆಗಡೆ, ನಿಕಟಪೂರ್ವ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ, ಮಾಜಿ ಜಿಲ್ಲಾಧ್ಯಕ್ಷ ಎಂ.ಜಿ. ನಾಯ್ಕ, ಜಿಲ್ಲಾ ಉಪಾಧ್ಯಕ್ಷರಾದ ಆರತಿ ಗೌಡ, ಅಶೋಕ ಚಲವಾದಿ, ಸುಬ್ರಾಯ ವಾಳ್ಕೆ, ಸಂಜಯ ಸಾಳುಂಕೆ, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಈಶ್ವರ ನಾಯ್ಕ, ಶಿಕ್ಷಣ ಪ್ರಕೋಷ್ಠದ ರಾಜ್ಯ ಸಹ ಸಂಚಾಲಕ ಎಂ.ಜಿ. ಭಟ್, ಕಾರವಾರ ನಗರ ಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ ಮತ್ತಿತರರು ಇದ್ದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಾಜಿ ನರಸಾನಿ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ ನಿರ್ವಹಿಸಿದರು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''