ಗುತ್ತಿಗೆದಾರನ ಮನೆಯಲ್ಲಿ ದುಡ್ಡು: ಬಿಜೆಪಿ ಪ್ರತಿಭಟನೆ

KannadaprabhaNewsNetwork | Published : Oct 17, 2023 12:45 AM

ಸಾರಾಂಶ

ಬೆಂಗಳೂರಲ್ಲಿ ಗುತ್ತಿಗೆದಾರ ಅಂಬಿಕಾಪತಿ ಮನೆಯಲ್ಲಿ ₹42 ಕೋಟಿ ಹಣ ಸಿಕ್ಕಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಧಾರವಾಡ

ಬೆಂಗಳೂರಲ್ಲಿ ಗುತ್ತಿಗೆದಾರ ಅಂಬಿಕಾಪತಿ ಮನೆಯಲ್ಲಿ ₹42 ಕೋಟಿ ಹಣ ಸಿಕ್ಕಿರುವುದನ್ನು ಖಂಡಿಸಿ ಹಾಗೂ ಇದರ ಜವಾಬ್ದಾರಿ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಸಿಎಂ ಹಾಗೂ ಡಿಸಿಎಂ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಗುತ್ತಿಗೆದಾರ ಅಂಬಿಕಾಪತಿ ಬಿಬಿಎಂಪಿಯ ಮಾಜಿ ಸದಸ್ಯೆಯ ಪತಿಯಾಗಿದ್ದಾರೆ. ಕಾಂಗ್ರೆಸ್‌ ಸರ್ಕಾರ ಗುತ್ತಿಗೆದಾರರಿಗೆ ನೀಡಿದ ಬಾಕಿ ಬಿಲ್‌ನ ₹650 ಕೋಟಿಗೆ ಪ್ರತಿಯಾಗಿ ಗುತ್ತಿಗೆದಾರರಿಂದ ಬಂದಿರುವ ಹಣವಾಗಿದೆ ಎಂಬ ಸುದ್ದಿ ದಟ್ಟವಾಗಿ ಹಬ್ಬಿದೆ. ಇದು ಗುತ್ತಿಗೆದಾರರ ಕಮಿಷನ್‌ ಹಣವಾಗಿದೆ. ಕಾಂಗ್ರೆಸ್‌ ಪಾಲಿಗೆ ಕರ್ನಾಟಕ ಎಟಿಎಂ ಆದಂತಾಗಿದೆ ಎಂಬ ನಮ್ಮ ಆರೋಪಕ್ಕೆ ಈ ಹಣ ಸಿಕ್ಕಿರುವುದೇ ಸಾಕ್ಷಿಯಾಗಿದೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಮಳೆ ಇಲ್ಲದೇ ರೈತರು ಬರದಿಂದ ತತ್ತರಿಸುತ್ತಿದ್ದಾರೆ. ಬರ ಪರಿಹಾರ ಕಾಮಗಾರಿಗಳು ಎಲ್ಲೂ ನಡೆಯುತ್ತಿಲ್ಲ. ವಿದ್ಯುತ್‌ ಕಡಿತ ವಿಪರೀತವಾಗಿದೆ. ಆದರೆ ಈ ಸರ್ಕಾರ ವರ್ಗಾವಣೆ ದಂಧೆ ನಡೆಸುತ್ತಿದೆ. ತುಷ್ಟೀಕರಣದಲ್ಲಿ ಕಾಲಹರಣ ಮಾಡುತ್ತಿದೆ. ರಾಜ್ಯದಲ್ಲಿ ಗಲಭೆಗಳು ಹೆಚ್ಚಾಗುತ್ತಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರಾಜ್ಯದಲ್ಲಿನ ಘಟನೆಗಳ ಜವಾಬ್ದಾರಿ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಶಾಸಕಿ ಸೀಮಾ ಮಸೂತಿ, ಮಹಾನಗರ ಜಿಲ್ಲಾಧ್ಯಕ್ಷ ಸಂಜಯ ಕಪಟಕರ, ಪಾಲಿಕೆ ಸದಸ್ಯರಾದ ಶಿವು ಹಿರೇಮಠ, ರಾಜಣ್ಣ ಕೊರವಿ, ವಿಜಯಾನಂದ ಶೆಟ್ಟಿ, ಮುಖಂಡರಾದ ದತ್ತಮೂರ್ತಿ ಕುಲಕರ್ಣಿ, ರವಿ ನಾಯಕ, ಅಮಿತ ಪಾಟೀಲ, ಶಿವಾನಂದ ಗುಂಡಗೋವಿ, ಬಸವರಾಜ ಬಾಳಗಿ, ಬಸವರಾಜ ರುದ್ರಾಪುರ, ಶ್ರೀನಿವಾಸ ಕೊಟ್ಯಾನ, ರುದ್ರಪ್ಪ ಅರಿವಾಳ, ಚಂದ್ರಶೇಖರ ಮನಗುಂಡಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Share this article