ನಿಯಂತ್ರಣ ಸಾಧಿಸದ ಪ್ರದೇಶಗಳ ಕಡೆ ನಿಗಾವಹಿಸಿ: ನಲಿನ್ ಅತುಲ್

KannadaprabhaNewsNetwork |  
Published : Sep 14, 2024, 01:47 AM IST
ಪೋಟೊ12ಕೆಪಿಎಲ್14: ಸಭೆಯಲ್ಲಿ ಡಿಸಿ ನಲಿನ್ ಅತುಲ್ ಅವರು ಮಾತನಾಡಿದರು. | Kannada Prabha

ಸಾರಾಂಶ

ಎಸ್ಸಿ-ಎಸ್ಟಿ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ನಿಯಂತ್ರಣ ಸಾಧಿಸದ ಪ್ರದೇಶಗಳ ಕಡೆ ಹೆಚ್ಚಿನ ನಿಗಾವಹಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಕೊಪ್ಪಳದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೊಪ್ಪಳ: ಎಸ್ಸಿ-ಎಸ್ಟಿ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ನಿಯಂತ್ರಣ ಸಾಧಿಸದ ಪ್ರದೇಶಗಳ ಕಡೆ ಹೆಚ್ಚಿನ ನಿಗಾವಹಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುವ ಪ್ರದೇಶಗಳನ್ನು ಗುರುತಿಸಿ, ಆ ಪ್ರದೇಶಗಳ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ನಿಗಾವಹಿಸಬೇಕು. ಹೆಚ್ಚಿನ ಪ್ರಮಾಣದಲ್ಲಿ ದೌರ್ಜನ್ಯ ಪ್ರಕರಣಗಳು ಕಂಡುಬರುವ ಪ್ರದೇಶಗಳಿಗೆ ಪೊಲೀಸ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಜನರಲ್ಲಿ ಕಾನೂನಿನ ಅರಿವು ಮೂಡಿಸುವ ಮೂಲಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹತೋಟಿಗೆ ತರುವ ಪ್ರಯತ್ನ ಮಾಡಬೇಕು. ದೌರ್ಜನ್ಯ ನಿಯಂತ್ರಣದ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಏರ್ಪಡಿಸಬೇಕು. ಈಗಾಗಲೇ ದೌರ್ಜನ್ಯ ಪ್ರಕರಣಗಳಲ್ಲಿ ನಿಯಂತ್ರಣ ಸಾಧಿಸಿರುವ ಪ್ರದೇಶಗಳ ಕಡೆ ಹೆಚ್ಚಿನ ಗಮನ ನೀಡದೇ, ನಿಯಂತ್ರಣ ಸಾಧಿಸದ ಪ್ರದೇಶಗಳ ಕಡೆ ತೀವ್ರ ನಿಗಾವಹಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಯಾವುದೇ ಭಾಗದಲ್ಲಿ ಎಸ್ಸಿ, ಎಸ್ಟಿ ಸಮುದಾಯದವರ ಮೇಲೆ ದೌರ್ಜನ್ಯ ಆದಲ್ಲಿ ಕೂಡಲೇ ಈ ಸಂಬಂಧವಾಗಿ ದೂರು ದಾಖಲಿಸಬೇಕು. ಅಗತ್ಯ ವೈದ್ಯಕೀಯ ಸೇವೆ ಒದಗಿಸಬೇಕು. ರಕ್ಷಣೆ ನೀಡುವುದರ ಜೊತೆಗೆ ಸಂತ್ರಸ್ತರಿಗೆ ನಿಯಮಾನುಸಾರ ನಿಗದಿತ ಅವಧಿಯಲ್ಲಿ ಪರಿಹಾರ ವಿತರಿಸಬೇಕು. ಸಂತ್ರಸ್ತರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು. ಅನಗತ್ಯ ತೊಂದರೆ, ವಿಳಂಬ, ನಿರ್ಲಕ್ಷ್ಯ ತೋರುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜು ತಳವಾರ ಮಾತನಾಡಿ, 2024ರಲ್ಲಿ ಒಟ್ಟು ಎಫ್.ಐ.ಆರ್ ಹಂತದ 51 ಪ್ರಕರಣಗಳಿಗೆ ₹ 47.375 ಲಕ್ಷ ಪರಿಹಾರಧನ ಮಂಜೂರಿಸಲಾಗಿದೆ. ಚಾರ್ಜ್ ಶೀಟ್ ಹಂತದಲ್ಲಿನ 33 ಪ್ರಕರಣಗಳಿಗೆ ₹73.00 ಲಕ್ಷ ಪರಿಹಾರಧನ ಮಂಜೂರಿಸಲಾಗಿದೆ. ಪ್ರಸ್ತುತ ವರ್ಷದಲ್ಲಿ ಒಟ್ಟು 2 ಪ್ರಕರಣದಲ್ಲಿ ಮೃತರ ಸಂತ್ರಸ್ತರಿಗೆ ₹4.125 ಲಕ್ಷ ಪರಿಹಾರಧನ ನೀಡಲಾಗಿದೆ. ದಾಖಲಾದ ದೌರ್ಜನ್ಯ ಪ್ರಕರಣಗಳಲ್ಲಿ ವಿಳಂಬವಿಲ್ಲದೆ ಪರಿಹಾರಧನ ಮಂಜೂರಾತಿಗೆ ಕ್ರಮ ವಹಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಈ ಸಭೆಯಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಪಂ ಕಾರ್ಯನಿರ್ವಹಣಾ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು, ಎಸ್ಸಿ-ಎಸ್ಟಿ, ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಅಧಿಕಾರೇತರ ಸದಸ್ಯರು, ಎನ್.ಜಿ.ಓ ಮುಖ್ಯಸ್ಥರು ಹಾಗೂ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಂ ಜಿ ವಿರೋಧಕ್ಕೆ ರೈತರಿಗೆ ಸಿಎಂ ಕರೆ
ನೀವೂ ಸಿಎಂ ಆಗಬೇಕು : ಡಿಕೆಗೆ ಪೂಜಾರಿ ಹಾರೈಕೆ