ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದು ಬಾರದ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದ ರೈತರಿಗೆ ಪ್ರಸಕ್ತ ಸಾಲಿನಲ್ಲಿ ಕೇವಲ 4 ಕಟ್ಟು ನೀರು ಮಾತ್ರ ಹರಿಸಲು ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕನ್ನಡಪ್ರಭ ವಾರ್ತೆ ಮಂಡ್ಯ
ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದು ಬಾರದ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದ ರೈತರಿಗೆ ಪ್ರಸಕ್ತ ಸಾಲಿನಲ್ಲಿ ಕೇವಲ 4 ಕಟ್ಟು ನೀರು ಮಾತ್ರ ಹರಿಸಲು ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಬೆಂಗಳೂರಿನ ವಿಕಾಸಸೌಧದಲ್ಲಿ ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಮಾತನಾಡಿದ ಸಚಿವರು, ಮುಂಗಾರು ಮಳೆ ಕೈಕೊಟ್ಟಿರುವುದರಿಂದ ಜಲಾಶಯಗಳಲ್ಲಿ ನೀರಿನ ಲಭ್ಯತೆ ನಿರೀಕ್ಷಿತ ಮಟ್ಟದಲ್ಲಿಲ್ಲ. ಈಗ ಹೆಚ್ಚಿನ ನೀರು ಬಿಡುಗಡೆ ಮಾಡಿದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ತೀವ್ರ ಸಮಸ್ಯೆ ಎದುರಾಗುತ್ತದೆ. ಈ ಹಿನ್ನೆಲೆಯಲ್ಲಿ ಲಭ್ಯವಿರುವ ನೀರನ್ನು ವೈಜ್ಞಾನಿಕ ಮತ್ತು ಆದ್ಯತೆ ಆಧಾರದ ಮೇಲೆ ಬಳಕೆ ಮಾಡುವ ಉದ್ದೇಶದಿಂದ 4 ಕಟ್ಟು ನೀರು ಹರಿಸಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.
ನೀರಿನ ಕೊರತೆಯನ್ನು ಪರಿಗಣಿಸಿ ರೈತರು ಈ ಹಂಗಾಮಿನಲ್ಲಿ ಹೆಚ್ಚು ನೀರು ಬೇಡುವ ಭತ್ತ, ಕಬ್ಬು ಬದಲಿಗೆ ಅರೆ ಖುಷ್ಕಿ ಬೆಳೆಗಳಿಗೆ ಆದ್ಯತೆ ನೀಡಬೇಕು. ಕಡಿಮೆ ನೀರಿನಲ್ಲಿ ಉತ್ತಮ ಇಳುವರಿ ನೀಡುವ ಬೆಳೆಗಳನ್ನು ಬೆಳೆಯುವ ಮೂಲಕ ಲಭ್ಯವಿರುವ ನೀರನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು. ಕೃಷಿ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳು ರೈತರಿಗೆ ಸೂಕ್ತ ಬೆಳೆ ಪದ್ಧತಿ ಕುರಿತು ಮಾರ್ಗದರ್ಶನ ನೀಡಲಿದ್ದಾರೆ ಎಂದು ಹೇಳಿದರು.
ಕೇವಲ ಬೆಳೆಗಳಿಗೆ ಮಾತ್ರವಲ್ಲದೆ ಕಾವೇರಿ ಕೊಳ್ಳದ ವ್ಯಾಪ್ತಿಯ ಕೆರೆ-ಕಟ್ಟೆಗಳನ್ನು ತುಂಬಿಸುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸಲು ಸಭೆ ಮಹತ್ವದ ನಿರ್ಧಾರ ಕೈಗೊಂಡಿತು. ಪ್ರಸ್ತುತ ನೀರಿನ ಪ್ರತಿಯೊಂದು ಹನಿಯನ್ನೂ ಜವಾಬ್ದಾರಿಯಿಂದ ಬಳಸಬೇಕು. ರೈತರ ಕೃಷಿಗೆ ನೀರು ಒದಗಿಸುವ ಜೊತೆಗೆ ಕುಡಿಯುವ ನೀರಿನ ಭದ್ರತೆಯೂ ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸಿದರು.
ರೈತರು4 ಕಟ್ಟು ನೀರನ್ನು ಪರಿಣಾಮಕಾರಿಯಾಗಿ ಬಳಸಿ ನೀರು ಉಳಿಸುವ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು. ಜಲಾಶಯಗಳ ನೀರಿನ ಮಟ್ಟ, ಒಳಹರಿವು ಮತ್ತು ಮಳೆ ಪ್ರಮಾಣ ನಿರಂತರವಾಗಿ ಪರಿಶೀಲಿಸಿ ಪರಿಸ್ಥಿತಿಗೆ ಅನುಗುಣವಾಗಿ ಮುಂದಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ, ಕೃಷಿ ಸಚಿವ ನರೇಂದ್ರಸ್ವಾಮಿ, ಶಾಸಕರಾದ ಜಿ.ಟಿ.ದೇವೇಗೌಡ, ರಮೇಶ್ ಬಂಡಿಸಿದ್ದೇಗೌಡ, ಪಿ.ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ಕೆ.ಆರ್. ಪೇಟೆ ಶಾಸಕ ಮಂಜು ಸೇರಿದಂತೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.