ಮೂಡುಬಿದಿರೆ: ಕೃಷಿಕರು ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ರಾಜ್ಯ ಸರ್ಕಾರ ಕೃಷಿ ಶಿಕ್ಷಣದಲ್ಲಿ 3,200 ಸೀಟುಗಳನ್ನು ಮೀಸಲಿಟ್ಟಿದ್ದು, ಈ ಅವಕಾಶವನ್ನು ಪಡೆಯಲು ಅರ್ಹತೆ, ಪ್ರಾಯೋಗಿಕ ಪರೀಕ್ಷೆಯ ಸಿದ್ಧತೆ ಹಾಗೂ ಪ್ರವೇಶ ಪ್ರಕ್ರಿಯೆಯ ಕುರಿತು ವಿದ್ಯಾರ್ಥಿಗಳು ಸಮಗ್ರ ಅರಿವು ಹೊಂದಿರಬೇಕು ಎಂದು ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಅಗ್ರಿಕಲ್ಚರಲ್ ಸೈನ್ಸಸ್ ಆ್ಯಂಡ್ ಟೆಕ್ನಾಲಜಿಯ ಡೀನ್ ಡಾ. ಎಸ್.ಎನ್. ವಾಸುದೇವ ಜೈನ್ ಹೇಳಿದರು.ಆಳ್ವಾಸ್ ಪಿಯು ಕಾಲೇಜಿನಲ್ಲಿ ನಡೆದ ಕೃಷಿಕರ ಕೋಟಾದಡಿ ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಕುರಿತ ಓರಿಯಂಟೇಶನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೃಷಿ ಕ್ಷೇತ್ರವು ದೇಶದ ಆರ್ಥಿಕತೆ ಹಾಗೂ ಆಹಾರ ಭದ್ರತೆಯ ಪ್ರಮುಖ ಆಧಾರವಾಗಿದ್ದು, ದೇಶದ ಸುಮಾರು 80 ಕೋಟಿ ಜನರು ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ.
ದೇಶದ ಪ್ರಧಾನಿಗಳ ಪರ್ ಡ್ರಾಪ್, ಮೋರ್ ಕ್ರಾಪ್ ಪರಿಕಲ್ಪನೆಯನ್ನು ಉಲ್ಲೇಖಿಸಿದ ಡಾ. ಜೈನ್, ಕಡಿಮೆ ನೀರಿನಲ್ಲಿ ಹೆಚ್ಚು ಉತ್ಪಾದನೆ ಪಡೆಯುವಂತಹ ವೈಜ್ಞಾನಿಕ ಕೃಷಿ ಪದ್ಧತಿಗಳ ಕುರಿತು ವಿದ್ಯಾರ್ಥಿಗಳು ಅರಿವು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಕೃಷಿ ಕೋಟಾದಡಿ ಪ್ರವೇಶ ಪಡೆಯಲು ಇರುವ ಮೀಸಲಾತಿ ಹಾಗೂ ಅರ್ಹತಾ ಮಾನದಂಡಗಳ ಬಗ್ಗೆ ವಿವರಿಸಿದ ಅವರು, ಪ್ರಾಯೋಗಿಕ ಪರೀಕ್ಷೆಯನ್ನು ಎದುರಿಸುವ ವಿಧಾನ, ಅಗತ್ಯ ಸಿದ್ಧತೆ ಹಾಗೂ ಕೃಷಿ ಶಿಕ್ಷಣದ ಮೂಲಕ ಲಭ್ಯವಿರುವ ವಿವಿಧ ವೃತ್ತಿ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಕರಾವಳಿಯಲ್ಲಿ ಕೃಷಿ ಶಿಕ್ಷಣಕ್ಕೆ ಹೊಸ ಆಯಾಮ: ಆಳ್ವಾಸ್ ಕೃಷಿ ವಿಜ್ಞಾನಗಳ ಸಂಸ್ಥೆಯು ಕರಾವಳಿ ಕರ್ನಾಟಕದಲ್ಲಿ ಕೃಷಿ ಶಿಕ್ಷಣಕ್ಕೆ ಹೊಸ ಆಯಾಮ ನೀಡಿದ ಮೊದಲ ಕೃಷಿ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸಂಸ್ಥೆಯಲ್ಲಿ ದೊರೆಯುತ್ತಿರುವ ವಿಶೇಷ ತರಬೇತಿ ಹಾಗೂ ಮಾರ್ಗದರ್ಶನದಿಂದ ವಿದ್ಯಾರ್ಥಿಗಳು ಕೃಷಿ ಕ್ಷೇತ್ರದ ಪ್ರವೇಶ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಕಳೆದ ವರ್ಷ ಸಂಸ್ಥೆಯ ವಿದ್ಯಾರ್ಥಿಯೊಬ್ಬರು ಕೃಷಿ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಗಳಿಸಿರುವುದನ್ನೂ ಉಲ್ಲೇಖಿಸಿದರು.ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಪಿಯು ಕಾಲೇಜಿನ ಪ್ರಾಂಶುಪಾಲ ಪ್ರೊ. ಮೊಹಮ್ಮದ್ ಸಾದಕತ್ ಮಾತನಾಡಿ, ಆಳ್ವಾಸ್ ಸಂಸ್ಥೆಯು ದೇಶದ ವಿವಿಧ ರಾಜ್ಯಗಳ ವಿದ್ಯಾರ್ಥಿಗಳಿಗೆ ಶಿಕ್ಷಣದ ಅವಕಾಶ ಕಲ್ಪಿಸುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ಉನ್ನತ ರ‍್ಯಾಂಕ್‌ಗಳನ್ನು ಪಡೆದು ಸಾಧನೆ ಮಾಡುತ್ತಿರುವುದು ಸಂಸ್ಥೆಯ ಶೈಕ್ಷಣಿಕ ಪರಂಪರೆಗೆ ಸಾಕ್ಷಿಯಾಗಿದೆ ಎಂದರು. ಕೃಷಿ ಕ್ಷೇತ್ರದಲ್ಲಿ ಉನ್ನತ ಶಿಕ್ಷಣ ಮತ್ತು ವೃತ್ತಿಜೀವನದ ಅವಕಾಶಗಳನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.