ನೈತಿಕ ಪೊಲೀಸ್‌ ಗಿರಿ ಖಂಡನಾರ್ಹ: ಲಕ್ಷ್ಮೀ ಹೆಬ್ಬಾಳ್ಕರ

KannadaprabhaNewsNetwork | Published : Jan 14, 2024 1:30 AM

ಸಾರಾಂಶ

ಹಾನಗಲ್ಲಿನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸ್‌ ಇಲಾಖೆ ಕ್ರಮ ಕೈಗೊಂಡಿದೆ. ಮಹಿಳೆಯರು ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ರಾಜ್ಯದಲ್ಲಿ ಪದೇ ಪದೇ ನೈತಿಕ ಪೊಲೀಸ್‌ ಗಿರಿ ನಡೆಯುತ್ತಿರುವುದು ಖೇದಕರ ಸಂಗತಿಯಾಗಿದೆ. ಹಾನಗಲ್ಲಿನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸ್‌ ಇಲಾಖೆ ಕ್ರಮ ಕೈಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾರು ಕೂಡ ನೈತಿಕ ಪೊಲೀಸ್ ಗಿರಿ ಮಾಡಬಾರದು. ಈಗಾಗಲೇ ಘಟನಾ ಸ್ಥಳಕ್ಕೆ ಹಾವೇರಿ ಎಸ್ಪಿ ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ. ಸರ್ಕಾರ ಇದರ ಬಗ್ಗೆ ಕಠಿಣ ಕ್ರಮ ಕೈಗೊಳ್ಳುತ್ತದೆ. ಮಹಿಳೆಯರು ಯಾರೂ ಆತಂಕ ಪಡುವ ಅಗತ್ಯವಿಲ್ಲ. ಕಿಡಿಗೇಡಿಗಳು ಇಂತಹ ಕೃತ್ಯ ಮಾಡುತ್ತಾರೆ. ಅವರಿಗೆ ತಕ್ಕ ಶಿಕ್ಷೆ ಆಗುತ್ತದೆ ಎಂದು ಭರವಸೆ ನೀಡಿದರು.

ಅಳೆದು, ತೂಗಿ ಅಭ್ಯರ್ಥಿಗಳ ಆಯ್ಕೆ:

ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ನಿಟ್ಟಿನಲ್ಲಿ ಕೆಲಸಗಳು ನಡೆಯುತ್ತಿವೆ. ಚುನಾವಣೆ ಪೂರ್ವ ತಯಾರಿ ಚರ್ಚೆ ನಡೆದಿದೆ. ಅಭ್ಯರ್ಥಿಗಳ ಆಯ್ಕೆ ಕುರಿತು ದೆಹಲಿಯಲ್ಲಿ ಚರ್ಚೆಯೂ ನಡೆದಿದೆ. ಅಳೆದು, ತೂಗಿ ಪಕ್ಷದ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು ಎಂದರು.

ಕಾಂಗ್ರೆಸ್ಸಿಗೆ ಹೆಚ್ಚಿನ ಸ್ಥಾನ:

ರಾಜ್ಯದ ಜನತೆ ಕಾಂಗ್ರೆಸ್‌ ಪಕ್ಷಕ್ಕೆ ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನ ನೀಡಿದ್ದಾರೆ. 5 ಗ್ಯಾರಂಟಿ ಭರವಸೆಯನ್ನು 6 ತಿಂಗಳಲ್ಲೇ ಈಡೇರಿಸಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ಗೆ ಆಶೀರ್ವಾದ ಮಾಡುವ ವಿಶ್ವಾಸವಿದೆ. ಬಿಜೆಪಿಗಿಂತ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಸ್ಲೀಪಿಂಗ್ ಅಭಿಯಾನ ವಿಚಾರವಾಗಿ ಮಾತನಾಡಿ, ಬಿಜೆಪಿಯವರಿಗೆ ಇದೀಗ ಎಚ್ಚರವಾಗಿದೆ. ಜನತೆ ಎಲ್ಲವನ್ನೂ ನೋಡುತ್ತಿದ್ದಾರೆ. ಮುಂದೆ ಮತದಾರರೇ ತಕ್ಕದಾದ ಉತ್ತರ ನೀಡಲಿದ್ದಾರೆ ಎಂದರು.

ಧಾರವಾಡ ಲೋಕಸಭಾ ಕ್ಷೇತ್ರದ ಕುರಿತು ವರಿಷ್ಠರು ಸೂಕ್ತ ನಿರ್ಧಾರ ತೆಗೆದುಕೊಳ್ಳತ್ತಾರೆ. ಜಾತಿವಾರು, ಪ್ರಾಂತ್ಯ ಸೇರಿದಂತೆ ಸಿದ್ಧತೆ ನೋಡಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇದೀಗ ನಮಗೆ ಒಪ್ಪಿಸಿದ ಕೆಲಸವನ್ನು ನಾವು ಮಾಡಿದ್ದೇವೆ ಎಂದರು.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ವಿಚಾರದಲ್ಲಿ ಪಕ್ಷದ ನಿಲುವಿಗೆ ನಾನು ಬದ್ಧ, ನಾನು ಶ್ರೀರಾಮನ ಭಕ್ತೆ, ಅದರ ಬಗೆ ಹೆಚ್ಚಿಗೆ ಮಾತನಾಡುವುದಿಲ್ಲ ಎಂದರು.

Share this article