ಮಾಗಡಿ: ಪೌರಾಡಳಿತ ಸಚಿವ ಎಚ್.ಸಿ.ಬಾಲಕೃಷ್ಣ ಕ್ಷೇತ್ರಕ್ಕೆ ನೂರಾರು ಕೋಟಿ ಅನುದಾನ ತಂದು ಅಭಿವೃದ್ಧಿಗೆ ಮುಂದಾಗಿದ್ದಾರೆ ಎಂದು ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪೂಜಾರಿಪಾಳ್ಯ ಕೃಷ್ಣಮೂರ್ತಿ ಹೇಳಿದರು.
ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ತಾಲೂಕಿಗೆ ₹ 50 ಕೋಟಿ ರು. ವಿಶೇಷ ಅನುದಾನ ಬಂದಿದ್ದು, ಪ್ರತಿ ಗ್ರಾಮ ಪಂಚಾಯಿತಿಗೆ ತಲಾ 1 ಕೋಟಿ ಪ್ರತ್ಯೇಕ ಅನುದಾನ ನೀಡಲಾಗುತ್ತಿದೆ. ಕೃಷಿ ಸಚಿವ ಚಲುವರಾಯಸ್ವಾಮಿ ಮೂಲಕ ಹೆಚ್ಚುವರಿ ₹ 30 ಕೋಟಿ ನೀಡಿದ್ದಾರೆ. ಗ್ರಾಮೀಣ ರಸ್ತೆಗಳ ಡಾಂಬರೀಕರಣಕ್ಕೆ ಶೀಘ್ರದಲ್ಲಿ ಗುದ್ದಲಿಪೂಜೆ ನೆರವೇರಲಿದೆ. ಮಾಗಡಿ ಪಟ್ಟಣವನ್ನು ಮಾದರಿ ನಗರವನ್ನಾಗಿಸಲು ಪೌರಾಡಳಿತ ಇಲಾಖೆಯಿಂದ ₹ 50 ಕೋಟಿ ವಿಶೇಷ ಅನುದಾನ ಮೀಸಲಿಡಲಾಗಿದೆ. ಮಾಗಡಿ ಕೋಟೆಯ ಅಭಿವೃದ್ಧಿಗೆ ₹ 103 ಕೋಟಿ ಕಾಮಗಾರಿ ಪ್ರಗತಿಯಲ್ಲಿದೆ. ಕೆಂಪಾಪುರವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ದತ್ತು ತೆಗೆದುಕೊಂಡಿದ್ದು, ನ. 2ರಂದು ಬಮೂಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್, ಬಿಡಿಎ ಅಧ್ಯಕ್ಷ ಹ್ಯಾರೀಸ್ ಹಾಗೂ ಸಚಿವ ಬಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಜೊತೆಗೆ ಸೋಮೇಶ್ವರ ಹಾಗೂ ಮಾಗಡಿ ಶ್ರೀರಂಗನಾಥಸ್ವಾಮಿ ದೇವಾಲಯಗಳಿಗೆ ವಿಶೇಷ ಅನುದಾನ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಕೆಶಿಪ್ ರಸ್ತೆ ಕಾಮಗಾರಿ ವಿಳಂಬದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸಂಬಂಧಪಟ್ಟ ಗುತ್ತಿಗೆದಾರರಿಗೆ ಅಂತಿಮ ನೋಟಿಸ್ ಜಾರಿ ಮಾಡಲಾಗಿದ್ದು, ಅಕ್ಟೋಬರ್ 30 ರ ಗಡುವು ನೀಡಲಾಗಿದೆ. ನಿಗದಿತ ಸಮಯದೊಳಗೆ ಕಾಮಗಾರಿ ಆರಂಭಿಸದಿದ್ದರೆ ಟೆಂಡರ್ ರದ್ದುಪಡಿಸಿ, ಪರ್ಯಾಯ ವ್ಯವಸ್ಥೆಯ ಮೂಲಕ ಗುಣಮಟ್ಟದ ರಸ್ತೆ ನಿರ್ಮಿಸಲಾಗುವುದು ಎಂದು ಕೃಷ್ಣಮೂರ್ತಿ ಎಚ್ಚರಿಸಿದರು.ಈ ವೇಳೆ ಪಂಚ ಗ್ಯಾರಂಟಿ ಸಮಿತಿ ಮಾಜಿ ಅಧ್ಯಕ್ಷ ಕಲ್ಕೆರೆ ಶಿವಣ್ಣ, ಗ್ಯಾರಂಟಿ ಸಮಿತಿ ಅಧ್ಯಕ್ಷ ಬೆಳ್ಳಿಯಪ್ಪ, ಟಿಎಪಿಸಿಎಂಎಸ್ ಅಧ್ಯಕ್ಷ ರಮೇಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ರವೀಶ್, ಹಿರಿಯ ಮುಖಂಡ ಕುದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್, ಎಂಡಿಎ ಅಧ್ಯಕ್ಷ ಪ್ರಕಾಶ್, ಆಗ್ರೋ ಪುರುಷೋತ್ತಮ್, ಜಯಮ್ಮ, ಮೀನಾ, ಶೈಲಜಾ, ಜ್ಯೋತಿನಗರ ಮಂಜುನಾಥ್, ರವಿ ಇತರರು ಭಾಗವಹಿಸಿದ್ದರು.
ಮಾಗಡಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪೂಜಾರಿಪಾಳ್ಯ ಕೃಷ್ಣಮೂರ್ತಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಲ್ಕೆರೆ ಶಿವಣ್ಣ, ಗ್ಯಾರಂಟಿ ಸಮಿತಿ ಅಧ್ಯಕ್ಷ ಬೆಳ್ಳಿಯಪ್ಪ, ಟಿಎಪಿಸಿಎಂಎಸ್ ಅಧ್ಯಕ್ಷ ರಮೇಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ರವೀಶ್ ಇತರರಿದ್ದರು.