ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ: ಭೋಸರಾಜು

KannadaprabhaNewsNetwork |  
Published : Jul 11, 2025, 11:48 PM IST
ಚಿತ್ರ : 11ಎಂಡಿಕೆ4 : ಸಭೆಯಲ್ಲಿ ಉಸ್ತುವಾರಿ ಸಚಿವ ಭೋಸರಾಜು ಮಾತನಾಡಿದರು.  | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಸಚಿವರು ತಿಳಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಯಾವುದೇ ರೀತಿಯ ಅನಾಹುತ ಆಗದಂತೆ ಮುನ್ನೆಚ್ಚರ ವಹಿಸಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಜೂನ್, 26 ರಂದು ನಡೆದ ಕೆಡಿಪಿ ಸಭೆಯಲ್ಲಿ ಸೂಚಿಸಲಾಗಿದ್ದ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಸಚಿವರು ಮಾತನಾಡಿದರು. ಅಂಗನವಾಡಿ, ಶಾಲೆ, ವಿದ್ಯಾರ್ಥಿ ನಿಲಯ, ವಸತಿ ಶಾಲೆಗಳು ಸೇರಿದಂತೆ ಕಟ್ಟಡ ಸುಸ್ಥಿತಿ ಸಂಬಂಧಿಸಿದಂತೆ ವರದಿ ನೀಡಲು ಸೂಚಿಸಲಾಗಿತ್ತು. ಅದರಂತೆ ಅಧಿಕಾರಿಗಳು ವರದಿ ನೀಡಿದ್ದು, ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.ಶೀಘ್ರ ರಸ್ತೆ ಗುಂಡಿ ಮುಚ್ಚುವ ಕಾರ್ಯ:

ಹೆಚ್ಚಿನ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಹಲವು ರಸ್ತೆಗಳು ಗುಂಡಿ ಬಿದ್ದಿದ್ದು, ಸದ್ಯ ವೆಟ್‌ಮಿಕ್ಸ್ ಅಳವಡಿಸುವಂತಾಗಬೇಕು. ಶೀಘ್ರ ರಸ್ತೆ ಗುಂಡಿ ಮುಚ್ಚುವ ಕಾರ್ಯ ಆಗಬೇಕು ಎಂದು ಎಂಜಿನಿಯರ್‌ಗಳಿಗೆ ಸಚಿವರು ಸೂಚಿಸಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಕಳೆದ ಬಾರಿಯ ಮಳೆಹಾನಿ ಕಾಮಗಾರಿಯನ್ನು ಇನ್ನೂ ಕೈಗೊಂಡಿಲ್ಲ ಎಂದು ಅತೃಪ್ತಿ ವ್ಯಕ್ತಪಡಿಸಿದರು.

ಸರ್ಕಾರ ಹಣ ನೀಡಿದೆ. ಆದರೂ ಎಂಜಿನಿಯರ್ ಕೆಲಸ ನಿರ್ವಹಿಸಲು ಮುಂದಾಗುವುದಿಲ್ಲ. ಈ ರೀತಿಯಾದರೆ ಹೇಗೆ ಎಂದು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಇರುತ್ತದೆ. ಆದ್ದರಿಂದ ರಸ್ತೆ ಸರಿಪಡಿಸುವಂತಾಗಬೇಕು ಎಂದು ಸಲಹೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರು ಮಳೆಯಿಂದಾಗಿ ರಸ್ತೆಗಳು ತುಂಬಾ ಗುಂಡಿಬಿದ್ದಿದ್ದು ಇವುಗಳನ್ನು ಸರಿಪಡಿಸುವಂತಾಗಬೇಕು ಎಂದು ಹೇಳಿದರು. ರಸ್ತೆಗಳ ನಿರ್ವಹಣೆ ಮಾಡಬೇಕು:

ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಗಳಲ್ಲಿ ಸಹ ರಸ್ತೆಗಳ ನಿರ್ವಹಣೆ ಮಾಡಬೇಕು. ಜಿಲ್ಲಾ ಪಂಚಾಯಿತಿ ರಸ್ತೆ ಮತ್ತು ಕಟ್ಟಡಗಳ ಸಂಬಂಧ ಆಗಿರುವ ಕೆಲಸಗಳು ಮತ್ತು ಆಗಬೇಕಿರುವ ಕೆಲಸಗಳ ಬಗ್ಗೆ ಪಟ್ಟಿ ಮಾಡಿ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಜಿಲ್ಲಾ ಪಂಚಾಯತ್ ರಸ್ತೆ ಹಾಗೂ ಕಟ್ಟಡಗಳ ನಿರ್ವಹಣೆ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಜಲಜೀವನ್ ಮಿಷನ್ ಯೋಜನೆ ಕಾಮಗಾರಿಗಳ ಸಂಬಂಧಿಸಿದಂತೆ ಅಗತ್ಯ ಕ್ರಮವಹಿಸಲಾಗಿದೆ ಎಂದರು. ಸಚಿವರಾದ ಎನ್.ಎಸ್.ಭೋಸರಾಜು ಅವರು ಮಾತನಾಡಿ 71 ಅಂಗನವಾಡಿಗಳು, 1154 ಶಾಲೆಗಳ ಸಣ್ಣ ಪುಟ್ಟ ದುರಸ್ತಿ ಮಾಡುವುದು. ಇತರೆ ವಿದ್ಯಾರ್ಥಿ ನಿಲಯಗಳು ಸೇರಿದಂತೆ ಕಟ್ಟಡವನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳುವತ್ತ ಗಮನಹರಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಗರ ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಎನ್‌ಡಿಆರ್‌ಎಫ್ ಹಣ ಬಿಡುಗಡೆ ಮಾಡಲಾಗುವುದು, ಆ ನಿಟ್ಟಿನಲ್ಲಿ ರಸ್ತೆ ಸರಿಪಡಿಸುವಂತೆ ಸೂಚಿಸಿದರು. ಹಾಸ್ಟೆಲ್‌ಗಳ ನಿರ್ವಹಣೆ ಸಮರ್ಪಕವಾಗಿ ಆಗಬೇಕು. ದೂರುಗಳು ಬರದಂತೆ ಎಚ್ಚರವಹಿಸಬೇಕು ಎಂದು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು. ಕೃಷಿ ಇಲಾಖೆಯ ಕರ್ತವ್ಯ:

ಮುಂಗಾರು ಸಂದರ್ಭದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಮರ್ಪಕವಾಗಿ ಪೂರೈಸಬೇಕು. ಕೃಷಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸುವುದು ಕೃಷಿ ಇಲಾಖೆಯ ಕರ್ತವ್ಯವಾಗಿದೆ ಎಂದು ಸಚಿವರು ಹೇಳಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಕನ್ನಂಡಬಾಣೆ ವ್ಯಾಪ್ತಿಯಲ್ಲಿ ವಾಸ ಮಾಡುವವರಿಗೆ ಕನಿಷ್ಠ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ಮಾನವೀಯತೆ ತೋರಬೇಕು. ಮೆಟ್ಟಿಲು ಇರುವ ಕಡೆ ರಸ್ತೆ ನಿರ್ಮಾಣ ಮಾಡುವಂತೆ ಶಾಸಕರು ಸಲಹೆ ಮಾಡಿದರು. ಕೊಡಗು ಜಿಲ್ಲೆಯಲ್ಲಿ ಗಾಂಜಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಅಧಿಕಾರಿಗಳು ಹೆಚ್ಚಿನ ನಿಗಾವಹಿಸುವಂತೆ ಸೂಚಿಸಿದರು. ಬೀಟ್ ಪೊಲೀಸರು ಗಾಂಜಾ ಪ್ರಕರಣ ಹೆಚ್ಚಾಗದಂತೆ ಗಮನಹರಿಸಬೇಕು ಎಂದು ಶಾಸಕರು ನಿರ್ದೇಶನ ನೀಡಿದರು. ಹೆಚ್ವುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಇತರರು ಇದ್ದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರಾದ ಎನ್.ಎಸ್.ಭೋಸರಾಜು 71 ಅಂಗನವಾಡಿಗಳು, 406 ಶಾಲೆಗಳನ್ನು ತಕ್ಷಣ ರಿಪೇರಿ ಮಾಡಲು ಸೂಚಿಸಲಾಗಿದೆ ಎಂದು ಹೇಳಿದರು. ಮೇ-ಜೂನ್ ತಿಂಗಳಲ್ಲಿ ಸುರಿದ ಹೆಚ್ಚಿನ ಮಳೆಗೆ 77 ಮನೆಗಳಿಗೆ ಹಾನಿಯಾಗಿದ್ದು, ಈ ಸಂಬಂಧ ಪರಿಹಾರ ವಿತರಿಸಲಾಗಿದೆ ಎಂದು ತಿಳಿಸಿದರು. 2364 ವಿದ್ಯುತ್ ಕಂಬಗಳು ಹಾಗೂ 22 ವಿದ್ಯುತ್ ಪರಿವರ್ತಕಗಳನ್ನು ಬದಲಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು. ಶಕ್ತಿ ಯೋಜನೆ ಜಾರಿಗೊಂಡು ಇದುವರೆಗೆ ರಾಜ್ಯದಲ್ಲಿ 500 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಜಿಲ್ಲೆಯಲ್ಲಿ 1.20 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ. 50 ಕೋಟಿ ರು..ವನ್ನು ಸರ್ಕಾರ ಭರಿಸಿದೆ ಎಂದು ಹೇಳಿದರು.

PREV