ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ಶ್ರೀಸೌಮ್ಯಕೇಶವಸ್ವಾಮಿ ದೇವಸ್ಥಾನದ ಮುಂಭಾಗದಿಂದ ಆರಂಭಗೊಂಡ ಪೊಲೀಸ್ ಪಥ ಸಂಚಲನ ಪಟ್ಟಣದ ಪ್ರಮುಖ ರಸ್ತೆ, ವೃತ್ತಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಸಂಚರಿಸಿ ನಿಮ್ಮೊಂದಿಗೆ ನಾವಿದ್ದೇವೆಂದು ಜನರಲ್ಲಿ ವಿಶ್ವಾಸ ಮೂಡಿಸುವ ಜೊತೆಗೆ, ಶಾಂತಿ ಕದಡಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮಜರುಗಿಸುವ ಸಂದೇಶ ರವಾನಿಸಿದರು.
ಈ ವೇಳೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಶ್ರೀಕೋಟೆ ವಿದ್ಯಾಗಣಪತಿ ಉತ್ಸವದ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ಸಾಕಷ್ಟು ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ. ಹಾಗಾಗಿ ಸಾರ್ವಜನಿಕರು ಶಾಂತಿ ಸುವ್ಯವಸ್ಥೆ ಕಾಪಾಡುವ ಜೊತೆಗೆ ಸಣ್ಣ ಪುಟ್ಟ ಅಹಿತಕರ ಘಟನೆಗಳಿಗೂ ಅವಕಾಶ ನೀಡದಂತೆ ಯಾವುದೇ ಭಯವಿಲ್ಲದೆ ವಿಜೃಂಭಣೆಯಿಂದ ಗಣೇಶೋತ್ಸವದಲ್ಲಿ ಪಾಲ್ಗೊಳ್ಳಬಹುದು.ಈ ಗಣೇಶೋತ್ಸವದಲ್ಲಿ ಸಹಸ್ರಾರು ಮಂದಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಸೂಕ್ತ ಪೊಲೀಸ್ ಭದ್ರತೆ ಮಾಡಲಾಗುತ್ತಿದೆ. ಇದರ ಒಂದು ಭಾಗವಾಗಿ ಪಟ್ಟಣದಲ್ಲಿ ರೂಟ್ ಮಾರ್ಚ್ ನಡೆಸಲಾಗಿದೆ ಎಂದರು.
ಗಣೇಶೋತ್ಸವದಲ್ಲಿ ಯಾವುದೇ ಸಣ್ಣ ಪುಟ್ಟ ಅಹಿತಕರ ಘಟನೆಗಳು ಸಂಭವಿದಂತೆ ಕಟ್ಟೆಚ್ಚರ ವಹಿಸಲಾಗಿದೆ. ಪಟ್ಟಣ ಸೇರಿದಂತೆ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯ ಪ್ರದೇಶದಲ್ಲಿ ಎಲ್ಲಾ ಬಗೆಯ ಮದ್ಯದಂಗಡಿಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಹೆದ್ದಾರಿ ವಾಹನ ಸಂಚಾರದ ಮಾರ್ಗ ಬದಲಾವಣೆಗೆ ಸಾಕಷ್ಟು ತಯಾರಿ ಮಾಡಿಕೊಳ್ಳಲಾಗಿದೆ ಎಂದರು.
ಈ ವೇಳೆ ಎಎಸ್‌ಪಿ ತಿಮ್ಮಯ್ಯ, ಡಿವೈಎಸ್ಪಿಗಳಾದ ಬಿ.ಚಲುವರಾಜು, ಲಕ್ಷ್ಮೀನಾರಾಯಣ ಪ್ರಸಾದ್, ಸಿಪಿಐ ನಿರಂಜನ್, ಪಟ್ಟಣ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಶಿವಕುಮಾರ್, ಪಿಎಸ್‌ಐಗಳಾದ ವೈ.ಎನ್.ರವಿಕುಮಾರ್, ರಾಜೇಂದ್ರ, ಮಾರುತಿ ಸೇರಿದಂತೆ ಕೆಎಸ್‌ಆರ್‌ಪಿ, ಜಿಲ್ಲಾ ಶಸಸ್ತ್ರ ಮೀಸಲು ಪಡೆ ಪಥಸಂಚಲನ ನಡೆಸಿದರು.