ಕನ್ನಡಪ್ರಭ ವಾರ್ತೆ ಕುಂದಾಪುರ
ನಮ್ಮ ಕರ್ನಾಟಕ ಭೌಗೋಳಿಕವಾದ ಸುಂದರ ತಾಣ. ಇಲ್ಲಿ ಶಿಲ್ಪಕಲೆ, ಸಾಹಿತ್ಯ, ವಾಸ್ತುಶಿಲ್ಪ ಮೇಳೈಸಿದೆ. ನಮ್ಮೆಲ್ಲರ ಉಡುಗೆ-ತೊಡುಗೆ, ಆಚಾರ-ವಿಚಾರ, ಕನ್ನಡ ಭಾಷೆಯಲ್ಲಿ ವಿಭಿನ್ನತೆ ಇದ್ದರೂ ವೈವಿಧ್ಯತೆಯಲ್ಲಿ ಏಕತೆಯನ್ನು ಕಂಡು ನಾವೆಲ್ಲರೂ ಕನ್ನಡಾಂಭೆಯ ಮಕ್ಕಳು ಎನ್ನುವ ಭಾವನೆ ಇದೆ. ಇವೆಲ್ಲವನ್ನು ಒಟ್ಟಾರೆ ಗಮನಿಸಿದಾಗ ಭಾರತ ಮಾತೆಯ ನೆಚ್ಚಿನ ಪುತ್ರಿ ನಮ್ಮ ಕನ್ನಡಾಂಬೆ ಎನ್ನಲು ಯಾವುದೇ ಸಂದೇಹವಿಲ್ಲ ಎಂದು ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಹೇಳಿದರು.ತಾಲೂಕು ಆಡಳಿತದ ನೇತೃತ್ವದಲ್ಲಿ ಇಲ್ಲಿನ ಗಾಂಧಿ ಮೈದಾನದಲ್ಲಿ ಜರುಗಿದ 70ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಿ, ಕನ್ನಡ ಹೋರಾಟದ ಇತಿಹಾಸವನ್ನು ನಮ್ಮ ಮುಂದಿನ ಪೀಳಿಗೆಗೆ ತಿಳಿಸುವುದು ಇಂದಿನ ತುರ್ತು. ಮುಂದಿನ ವರ್ಷ ಎಲ್ಲ ಶಾಲಾ ಮಕ್ಕಳನ್ನು ಹೆಚ್ಚೆಚ್ಚು ತೊಡಗಿಸಿಕೊಳ್ಳುವ ಪ್ರಯತ್ನವನ್ನು ಶಿಕ್ಷಣ ಇಲಾಖೆ ಮಾಡಿದರೆ ಇನ್ನಷ್ಟು ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಿಸಿದಂತಾಗುತ್ತದೆ ಎಂದರು.
ಪುರಸಭೆ ಅಧ್ಯಕ್ಷ ಮೋಹನ್ ದಾಸ್ ಶೆಣೈ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿನೋದ್ ಕ್ರಾಸ್ತಾ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮಹೇಶ್, ಪುರಸಭಾ ಮುಖ್ಯಾಧಿಕಾರಿ ಆನಂದ ಜೆ., ಪುರಸಭಾ ಉಪಾಧ್ಯಕ್ಷೆ ವನಿತಾ ಬಿಲ್ಲವ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭಾಕರ ವಿ., ಸದಸ್ಯರಾದ ದೇವಕಿ ಸಣ್ಣಯ್ಯ, ಶ್ರೀಧರ ಶೇರುಗಾರ್, ನಾಮನಿರ್ದೇಶಿತ ಸದಸ್ಯರು, ಮಾಜಿ ಉಪಾಧ್ಯಕ್ಷ ರಾಜೇಶ್ ಕಾವೇರಿ, ಕಲಾಕ್ಷೇತ್ರ ಕುಂದಾಪುರ ಅಧ್ಯಕ್ಷ ಕಿಶೋರ್ ಕುಮಾರ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಾ. ನಾಗೇಶ್, ತಾಲೂಕು ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಕುಸುಮಾಕರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.ನಗರ ಠಾಣೆಯ ಠಾಣಾಧಿಕಾರಿ ನಂಜಾ ನಾಯ್ಕ್, ಸಂಚಾರಿ ಠಾಣಾಧಿಕಾರಿ ನೂತನ್ ನೇತೃತ್ವದಲ್ಲಿ ಪೊಲೀಸ್, ವಿವಿಧ ಶಾಲೆಗಳ ಎನ್‍ಸಿಸಿ, ಸೇವಾದಳ, ಸ್ಕೌಟ್ ಮತ್ತು ಗೈಡ್ಸ್, ಸೈಂಟ್ ಜೋಸೇಫ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ಬ್ಯಾಂಡ್ ಸೆಟ್ ವಾದ್ಯದಲ್ಲಿ ಆಕರ್ಷಕ ಪಥ ಸಂಚಲನ ನಡೆಯಿತು. ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ತಹಸೀಲ್ದಾರ್ ಪ್ರದೀಪ್ ಕುರುಡೇಕರ್ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ವಂದಿಸಿದರು. ಶಿಕ್ಷಕ ಚಂದ್ರಶೇಖರ್ ಬೀಜಾಡಿ ನಿರೂಪಿಸಿದರು.