ಅಂಗನವಾಡಿ ಕೇಂದ್ರಗಳನ್ನು ಸರ್ಕಾರಿ ಕಟ್ಟಡಗಳಿಗೆ ಸ್ಥಳಾಂತರಿಸಿ

KannadaprabhaNewsNetwork |  
Published : Jun 11, 2026, 01:45 AM IST
10ಕೆಆರ್ ಎಂಎನ್ 4.ಜೆಪಿಜಿರಾಮನಗರ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಶಾಸಕ ಇಕ್ಬಾಲ್ ಹುಸೇನ್ ರವರು ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯ ಸುಧಾರಣೆ ಸಭೆ ನಡೆಸಿದರು. | Kannada Prabha

ಸಾರಾಂಶ

ರಾಮನಗರ: ನಗರಸಭೆ ವ್ಯಾಪ್ತಿಯಲ್ಲಿ ಬಾಡಿಗೆ ಕಟ್ಟಡಗಳಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಸರ್ಕಾರಿ ಶಾಲೆ ಅಥವಾ ಸರ್ಕಾರಿ ಕಚೇರಿಗಳ ಕಟ್ಟಡಗಳಿಗೆ ಸ್ಥಳಾಂತರಿಸಲು ಕ್ರಮ ವಹಿಸುವಂತೆ ಶಿಶು ಅಭಿವೃದ್ದಿ ಯೋಜನಾಧಿಕಾರಿ ಮತ್ತು ನಗರಸಭೆ ಅಧಿಕಾರಿಗಳಿಗೆ ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ಖಡಕ್ ಸೂಚನೆ ನೀಡಿದರು

ರಾಮನಗರ: ನಗರಸಭೆ ವ್ಯಾಪ್ತಿಯಲ್ಲಿ ಬಾಡಿಗೆ ಕಟ್ಟಡಗಳಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಸರ್ಕಾರಿ ಶಾಲೆ ಅಥವಾ ಸರ್ಕಾರಿ ಕಚೇರಿಗಳ ಕಟ್ಟಡಗಳಿಗೆ ಸ್ಥಳಾಂತರಿಸಲು ಕ್ರಮ ವಹಿಸುವಂತೆ ಶಿಶು ಅಭಿವೃದ್ದಿ ಯೋಜನಾಧಿಕಾರಿ ಮತ್ತು ನಗರಸಭೆ ಅಧಿಕಾರಿಗಳಿಗೆ ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ಖಡಕ್ ಸೂಚನೆ ನೀಡಿದರು.

ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯ ಸುಧಾರಣೆ ಸಭೆಯಲ್ಲಿ ಮಾತನಾಡಿದ ಅವರು, ಅಂಗನವಾಡಿಗಳು ಸ್ವಂತ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುವ ವ್ಯವಸ್ಥೆ ಆಗುವವರೆಗೆ ಸರ್ಕಾರಿ ಶಾಲೆ ಅಥವಾ ಸರ್ಕಾರಿ ಕಚೇರಿಗಳ ಕಟ್ಟಡಗಳಲ್ಲಿ ಕರ್ತವ್ಯ ನಿರ್ವಹಿಸಲು ಪರ್ಯಾಯವಾಗಿ ಯೋಚಿಸಬೇಕಿದೆ. ಹಾಗಾಗಿ ನಗರಸಭೆ ಎಂಜಿನಿಯರ್ ಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ, ಖಾಲಿ ಇರುವ ಸರ್ಕಾರಿ ಶಾಲೆ - ಕಚೇರಿ ಕಟ್ಟಡಗಳನ್ನು ಗುರುತಿಸಿ ವರದಿ ಸಲ್ಲಿಸುವಂತೆ ಸೂಚಿಸಿದರು.

ಮಕ್ಕಳ ಸುರಕ್ಷತೆ ಮತ್ತು ಅವರ ಸಮಗ್ರ ವಿಕಾಸದ ದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡಗಳ ಬದಲಾಗಿ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವ ಹಿಸುವುದು ಅತ್ಯಂತ ಸೂಕ್ತವಾಗಿದೆ. ನಗರ ಪ್ರದೇಶ ವ್ಯಾಪ್ತಿಯಲ್ಲಿ 81 ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಸುಮಾರು 3 ಸಾವಿರ ಮಕ್ಕಳು ಇದ್ದಾರೆ.

10 ಹೊಸ ಅಂಗನವಾಡಿ ಕಟ್ಟಡ ನಿರ್ಮಾಣ :

ಈ 81 ಅಂಗನವಾಡಿಗಳ ಪೈಕಿ 50 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿವೆ. ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು ಒದಗಿಸಲು ಹಲವು ಕ್ರಮಗಳನ್ನು ಕೈಗೊಂಡಿದ್ದು ನನ್ನ ಶಾಸಕರ ಅನುದಾನದಲ್ಲಿ ನಗರ ವ್ಯಾಪ್ತಿಯಲ್ಲಿ 10 ಹೊಸ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.

ಅಂಗನವಾಡಿಗಳು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುವ ವ್ಯವಸ್ಥೆ ಆಗುವವರೆಗೆ ಸರ್ಕಾರಿ ಶಾಲೆ ಮತ್ತು ಸರ್ಕಾರಿ ಕಚೇರಿಗಳ ಕಟ್ಟಡಗಳಲ್ಲಿ ಕರ್ತವ್ಯ ನಿರ್ವಹಿಸಲು ಪರ್ಯಾಯವಾಗಿ ಯೋಚಿಸಬೇಕಿದೆ. ಕೆಲವೆಡೆ ಸ್ಥಳದ ಸಮಸ್ಯೆಯಿದೆ. ಖಾಲಿ ಇರುವ ಸರ್ಕಾರಿ ಕಟ್ಟಡಗಳಲ್ಲಿ ಪರ್ಯಾಯ ವ್ಯವಸ್ಥೆ ಮಾಡಿ ಸುಧಾರಣೆ ತರಲಾಗುವುದು ಎಂದು ತಿಳಿಸಿದರು.

ಅಂಗನವಾಡಿ ಸರ್ಕಾರಿ ಕಟ್ಟಡಗಳಿಗೆ ಸ್ಥಳಾಂತರಗೊಂಡರೆ ಪ್ರತಿ ತಿಂಗಳು ಸರ್ಕಾರ ಅಥವಾ ಇಲಾಖೆ ಪಾವತಿಸಬೇಕಾದ ಬಾಡಿಗೆ ಹಣ ಉಳಿತಾಯವಾಗುತ್ತದೆ. ಶಾಶ್ವತವಾದ ಸರ್ಕಾರಿ ಆಸ್ತಿ ಸೃಷ್ಟಿಯಾಗುತ್ತದೆ. ಗರ್ಭಿಣಿಯರು, ಬಾಣಂತಿಯರು ಮತ್ತು ಕಿಶೋರಿ ಹೆಣ್ಣುಮಕ್ಕಳಿಗೆ ಆರೋಗ್ಯ ತಪಾಸಣೆ, ಲಸಿಕಾ ಕಾರ್ಯಕ್ರಮ ನಡೆಸಲು ಅನುಕೂಲವಾಗಲಿದೆ ಎಂದು ಹೇಳಿದರು.

ನಗರಸಭೆಯ ಗೀತಾಮಂದಿರ ಬಡಾವಣೆ, ಗೆಜ್ಜಲಗುಡ್ಡೆ, ಯಾರಬ್ ನಗರ, ಬಳೇಪೇಟೆ,ಮದರ್ ಖಾನ್ ಮೊಹಲ್ಲಾ, ಟ್ರೂಪ್ ಲೇನ್, ತೋಫ್ ಖಾನ್ ಮೊಹಲ್ಲಾ, ವಿನಾಯಕನಗರ, ಅಂಬೇಡ್ಕರ್ ನಗರ ಸೇರಿದಂತೆ 30 ಕ್ಕೂ ಹೆಚ್ಚು ವಾರ್ಡ್ ಗಳ ಅಂಗನವಾಡಿ ಕಾರ್ಯಕರ್ತೆಯರು ಕಟ್ಟಡದ ಸಂಬಂಧ ಇಕ್ಬಾಲ್ ಹುಸೇನ್ ಅವರೊಂದಿಗೆ ಮುಕ್ತವಾಗಿ ಚರ್ಚೆ ನಡೆಸಿದರು.

ಸಭೆಯಲ್ಲಿ ತಹಸೀಲ್ದಾರ್ ತೇಜಸ್ವಿನಿ, ನಗರಸಭೆ ಆಯುಕ್ತ ಡಾ.ಜಯಣ್ಣ, ಸಿಡಿಪಿಓ ಕಾಂತರಾಜು , ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಬಾಕ್ಸ್ .................

ತಾಲೂಕು ಕಚೇರಿಗೆ ಶಾಸಕರ ದಿಢೀರ್ ಭೇಟಿ:

ರಾಮನಗರ: ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ಅವರು ತಾಲೂಕು ಕಚೇರಿಗೆ ಬುಧವಾರ ಮಧ್ಯಾಹ್ನ ದಿಢೀರ್ ಭೇಟಿ ನೀಡಿ ಅಧಿಕಾರಿಗಳ ಕಾರ್ಯ ವೈಖರಿಯನ್ನು ಪರಿಶೀಲನೆ ನಡೆಸಿದರು.

ಯಾವುದೇ ಮುನ್ಸೂಚನೆ ನೀಡದೆ ಕಚೇರಿಗೆ ದಿಢೀರನೆ ಭೇಟಿ ನೀಡಿದ ಶಾಸಕರನ್ನು ಕಂಡು ಅಧಿಕಾರಿಗಳು ಹಾಗೂ ಸಿಬ್ಬಂದಿ ಕ್ಷಣಕಾಲ ತಬ್ಬಿಬ್ಬಾದರು.

ಕಚೇರಿ ಹಾಜರಾತಿ ಪುಸ್ತಕವನ್ನು ಖುದ್ದಾಗಿ ಪರಿಶೀಲಿಸಿದ ಶಾಸಕರು, ಅದೇ ಸಮಯಕ್ಕೆ ಕಚೇರಿಯಲ್ಲಿದ್ದ ಸಾರ್ವಜನಿಕರ ಬಳಿ ತೆರಳಿ ಅವರ ಅಹವಾಲುಗಳನ್ನು ಆಲಿಸಿದರು.

ಜನಸಾಮಾನ್ಯರನ್ನು ಸಣ್ಣ ಪುಟ್ಟ ಕೆಲಸಗಳಿಗಾಗಿ ವಿನಾಕಾರಣ ಅಲೆದಾಡಿಸಬಾರದು ಎಂದು ಅಧಿಕಾರಿಗಳಿಗೆ ಇಕ್ಬಾಲ್ ಹುಸೇನ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

10ಕೆಆರ್ ಎಂಎನ್ 4.ಜೆಪಿಜಿ

ರಾಮನಗರ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಶಾಸಕ ಇಕ್ಬಾಲ್ ಹುಸೇನ್ ರವರು ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯ ಸುಧಾರಣೆ ಸಭೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾದಕ ದ್ರವ್ಯ ಸೇವನೆಯಿಂದ ಜೀವಕ್ಕೆ ಹಾನಿ: ಪಿಎಸ್‌ಐ ಹೊಳೆಬಸಪ್ಪ ಸಲಹೆ
ಇನ್ನು ಕಾಯೋಕೆ ಆಗಲ್ಲ, ಬೇಗ ಮಿನಿಸ್ಟರ್ ಆಗಿ ಬನ್ನಿ