ಶಿವಮೊಗ್ಗ: ಬೈಂದೂರು ವಿಧಾನಸಭಾ ಕ್ಷೇತ್ರದ ತೊಂಡ್ಲೆ ಸಂಪರ್ಕ ಸೇತುವೆ ನಿರ್ಮಾಣಕ್ಕಾಗಿ ಒಂದು ಕೋಟಿ ಅನುದಾನ ಮಂಜೂರಾಗಿದ್ದು, ಸಂಸದ ಬಿ.ವೈ.ರಾಘವೇಂದ್ರ ಅವರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು. ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರ ಸಮ್ಮುಖದಲ್ಲಿ ಹಾಗೂ ಸ್ಥಳೀಯ ಗ್ರಾಮಸ್ಥರ ಸಮ್ಮುಖದಲ್ಲಿ ಈ ಕಾರ್ಯಕ್ರಮ ಜರುಗಿತು. ಈ ನೂತನ ಸೇತುವೆಯು ಸುತ್ತಮುತ್ತಲಿನ ಹಳ್ಳಿಗಳ ಜನರಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರ ಕಲ್ಪಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು. ಗ್ರಾಮೀಣ ಭಾಗದ ಮೂಲಸೌಕರ್ಯಗಳನ್ನು ಬಲಪಡಿಸಿ, ಪ್ರತಿಯೊಬ್ಬ ನಾಗರಿಕರಿಗೂ ಉತ್ತಮ ಸಂಪರ್ಕ ವ್ಯವಸ್ಥೆ ಕಲ್ಪಿಸುವುದೇ ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದರು.