ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಂಸದ ಬೊಮ್ಮಾಯಿ

KannadaprabhaNewsNetwork |  
Published : Jun 16, 2024, 01:51 AM ISTUpdated : Jun 16, 2024, 11:20 AM IST
೧೫ಎಚ್‌ವಿಆರ್೧ | Kannada Prabha

ಸಾರಾಂಶ

ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ನೂತನ ಸಂಸದ ಬಸವರಾಜ ಬೊಮ್ಮಾಯಿಯವರು ಶನಿವಾರ ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

ಹಾವೇರಿ: ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ನೂತನ ಸಂಸದ ಬಸವರಾಜ ಬೊಮ್ಮಾಯಿಯವರು ಶನಿವಾರ ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.ಬೆಂಗಳೂರಿನ ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ರಾಜೀನಾಮೆ ಸಲ್ಲಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಸತ್ತಿನಲ್ಲಿ ಕರ್ನಾಟಕದ ನೀರಾವರಿ ಯೋಜನೆಗಳಾದ ಕೃಷ್ಣಾ, ಕಾವೇರಿ ಅಂತರಾಜ್ಯ ಜಲ ವಿವಾದಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುತ್ತೇನೆ. ಸಂಸತ್ತಿನಲ್ಲಿ ಪ್ರಾಮಾಣಿಕವಾಗಿ ಕನ್ನಡಿಗರ ಪರವಾಗಿ ಧ್ವನಿ ಎತ್ತುವೆ. ನಾನು ಸಂಸದನಾಗಿ ಆಯ್ಕೆಯಾಗಿ ದೆಹಲಿಗೆ ಹೋದರೂ, ಕರ್ನಾಟಕದ ರಾಜಕಾರಣದಲ್ಲಿ ನಾನು ಸಕ್ರಿಯನಾಗಿರುತ್ತೇನೆ. 

ನಮ್ಮ ವರಿಷ್ಠರು ಅದೇ ಕಾರಣಕ್ಕೆ ಕೆಲವು ನಿರ್ಣಯ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಪಡೆಯುವ ಬಗ್ಗೆ ರಾಜ್ಯ ಸರ್ಕಾರ ನಿಯಮಾನುಸಾರ ಮನವಿ ಸಲ್ಲಿಸಬೇಕು. ಹಿಂದೆ ನಾವು ಎಐಬಿಪಿಯಲ್ಲಿ ಸುಮಾರು ಆರು ತಿಂಗಳು ದೆಹಲಿಯಲ್ಲಿ ನಮ್ಮ ಅಧಿಕಾರಿಗಳನ್ನು ಇಟ್ಟು ಸುಮಾರು 3800 ಕೊಟಿ ರು. ತಂದಿದ್ದೆ. 

ಕೇಂದ್ರದ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಮೀಸಲಿಟ್ಟಿರುವ ೫೦೦೦ ಕೋಟಿ ರು. ತರಲು ರಾಜ್ಯದ ಸಚಿವರು ಹಾಗೂ ಕೇಂದ್ರ ಸರ್ಕಾರದ ಸಚಿವರ ಜೊತೆ ಮಾತನಾಡಿ ಹಣ ತರಲು ಪ್ರಯತ್ನಿಸುತ್ತೇನೆ ಎಂದರು.ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ನಾವು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವು. 

ಇದುವರೆಗೂ ಕೇಂದ್ರ ಸರ್ಕಾರ ಯಾವುದೇ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಿಲ್ಲ. ಆದರೆ, ನಮ್ಮ ಒತ್ತಾಸೆಯ ಕಾರಣಕ್ಕೆ ಈ ಯೋಜನೆಗೆ ವಿಶೇಷವಾಗಿ ೫೦೦೦ ಕೋಟಿ ರು. ನೀಡುವ ಭರವಸೆ ನೀಡಿದ್ದರು ಎಂದರು. ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಶಾಸಕರಾದ ಜಿ.ಟಿ. ದೇವೇಗೌಡ, ಮುನಿರಾಜು, ಡಾ. ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಮಾರುತಿ ಮೂಳೆ, ಬೋಜೆಗೌಡ ಇದ್ದರು. 

ಶಿಗ್ಗಾಂವಿ ಕ್ಷೇತ್ರದ ಜನತೆಗೆ ಕೃತಜ್ಞತೆ: ಶಿಗ್ಗಾಂವಿ ಕ್ಷೇತ್ರದ ಜನತೆಗೆ ಕೃತಜ್ಞತೆ ಹೇಳುತ್ತೇನೆ. ನಿರಂತರವಾಗಿ ೪ ಬಾರಿ ಆಯ್ಕೆ ಮಾಡಿ ಅಭಿವೃದ್ಧಿ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು. ಶಿಗ್ಗಾಂವಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಇನ್ನಷ್ಟು ಅಭಿವೃದ್ಧಿಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿದ್ದೇನೆ. ಸಿಎಂ ಬೆಂಗಳೂರಿಗೆ ಬಂದ ತಕ್ಷಣ ಅವರ ಬಳಿ ಚರ್ಚಿಸಿ ಅಭಿವೃದ್ಧಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಚರ್ಚಿಸುತ್ತೇನೆ. ಹಾವೇರಿ ಜಿಲ್ಲೆಯಲ್ಲಿ ಶಿಗ್ಗಾಂವಿ ಬರುವುದರಿಂದ ಅದರ ಅಭಿವೃದ್ಧಿಗೆ ನನ್ನ ಶ್ರಮ ಮುಂದುವರೆಯಲಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ