ಕನ್ನಡಪ್ರಭ ವಾರ್ತೆ ಯಾದಗಿರಿ
ಯಾದಗಿರಿ ಜಿಲ್ಲೆಯ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಲಾಗಿದೆ. ಚುನಾವಣಾ ಅಭ್ಯರ್ಥಿ, ಬೆಂಬಲಿಗರು ಸೇರಿ 5 ಜನರಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರತಕ್ಕದ್ದಲ್ಲ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ ಡೊಣ್ಣಿ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
ಮತಗಟ್ಟೆಗಳ 100 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಲಾಗಿದೆ. ಈ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್ ಅಂಗಡಿ, ಬುಕ್‌ಸ್ಟಾಲ್, ಸೈಬರ್ ಕೆಫೆ ನಿರ್ಬಂಧಿಸಲಾಗಿದೆ. ಕಲ್ಲುಗಳನ್ನು, ಕ್ಷಾರ ಪದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಈ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ, ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಈ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್-19 ಕಾರ್ಯಗಳಿಗೆ ಈ ಆಜ್ಞೆ ಅನ್ವಯಿಸುದಿಲ್ಲ. ಮದುವೆ ಮತ್ತು ಇತರ ಧಾರ್ಮಿಕ ಮೆರವಣಿಗೆಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಹಾಗೂ ಕೋವಿಡ್ ಮಾರ್ಗಸೂಚಿಗಳನ್ನು ನಿಯಮಗಳನ್ನು ಪಾಲಿಸುವುದು.
ಮತಗಟ್ಟೆಗಳ ಸುತ್ತ 100 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್, ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ. ಈ ಅವಧಿಯಲ್ಲಿ ಧ್ವನಿವರ್ಧಕ ಬಳಸುವಂತಿಲ್ಲ. ಈ ಅವಧಿಯಲ್ಲಿ ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗತಕ್ಕದ್ದು, ಕಲ್ಯಾಣ ಮಂಟಪ, ಸಮುದಾಯ ಭವನ, ಹೋಟೆಲ್ ಮತ್ತು ಅತಿಥಿಗೃಹ ವಾಸ್ತವ್ಯ ಹೊಡಿದವರ ಪರಿಶೀಲನೆ ಮಾಡಿ ಮತದಾರರಲ್ಲದವರನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮ ವಹಿಸುವಂತೆ ಅವರು ತಿಳಿಸಿದ್ದಾರೆ.