ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಟನಾಯಕನಹಳ್ಳಿ ಗ್ರಾಮದಲ್ಲಿ ಬೆಳೆ ಹಾನಿಗೊಳಗಾದ ರೈತರ ಜಮೀನುಗಳಿಗೆ ಭಾನುವಾರ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಬೆಳೆಹಾನಿ ಪ್ರಮಾಣ, ಕೃಷಿಯ ಖರ್ಚು, ರೈತರ ಸಮಸ್ಯೆಗಳ ಕುರಿತು ಚರ್ಚೆ
- ದಾವಣಗೆರೆಗೆ ವಿಂಟೇಜ್ ಯುದ್ಧ, ವಿಮಾನ ಮಂಜೂರಿಗೆ ಸಂಸದೆ ಮನವಿ
- - -
ಕನ್ನಡಪ್ರಭ ವಾರ್ತೆ ದಾವಣಗೆರೆ
ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಟನಾಯಕನಹಳ್ಳಿ ಗ್ರಾಮದಲ್ಲಿ ಬೆಳೆ ಹಾನಿಗೊಳಗಾದ ರೈತರ ಜಮೀನುಗಳಿಗೆ ಭಾನುವಾರ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ರಾಮದ ವಿವಿಧ ರೈತರ ಹೊಲಗಳಿಗೆ ತೆರಳಿದ ಅವರು, ಹಾನಿಗೊಳಗಾದ ಬೆಳೆಗಳನ್ನು ಖುದ್ದಾಗಿ ವೀಕ್ಷಿಸಿ ರೈತರಿಂದ ಮಾಹಿತಿ ಪಡೆದರು. ಬೆಳೆ ಹಾನಿಯ ಪ್ರಮಾಣ, ಕೃಷಿಗೆ ಮಾಡಿರುವ ಖರ್ಚು ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅವರೊಂದಿಗೆ ಚರ್ಚಿಸಿದರು.
ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ತಮ್ಮ ಅಹವಾಲುಗಳನ್ನು ಸಂಸದರ ಮುಂದೆ ವಿವರಿಸಿದರು. ಬೆಳೆ ಬೆಳೆಯಲು ಮಾಡಿರುವ ಖರ್ಚು, ಪ್ರಸ್ತುತ ಉಂಟಾಗಿರುವ ನಷ್ಟ ಹಾಗೂ ಇದರಿಂದ ಎದುರಾಗಿರುವ ಆರ್ಥಿಕ ತೊಂದರೆಗಳ ಕುರಿತು ರೈತರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ರೈತರ ಸಮಸ್ಯೆಗಳನ್ನು ಆಲಿಸಿದ ಡಾ.ಪ್ರಭಾ ಮಲ್ಲಿಕಾರ್ಜುನ, ಬೆಳೆ ಹಾನಿಯ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದು, ಹಾನಿಯ ಪ್ರಮಾಣವನ್ನು ಸೂಕ್ತವಾಗಿ ಅಂದಾಜಿಸುವಂತೆ ಸೂಚಿಸಿದರು. ಅರ್ಹ ರೈತರಿಗೆ ಸರ್ಕಾರದಿಂದ ದೊರೆಯಬಹುದಾದ ಪರಿಹಾರ ಹಾಗೂ ನೆರವು ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಕೃಷಿಯನ್ನೇ ಅವಲಂಬಿಸಿ ಜೀವನ ನಡೆಸುತ್ತಿರುವ ರೈತರಿಗೆ ಬೆಳೆ ಹಾನಿಯಿಂದ ಆರ್ಥಿಕ ಸಂಕಷ್ಟ ಉಂಟಾಗುತ್ತದೆ. ಸಂಕಷ್ಟದ ಸಂದರ್ಭದಲ್ಲಿ ರೈತರ ಹಿತ ಕಾಪಾಡುವುದು ನಮ್ಮ ಆದ್ಯತೆಯಾಗಿದೆ. ಅವರಿಗೆ ಅಗತ್ಯ ನೆರವು ದೊರಕಿಸಲು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ರೈತರು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
- - -
* ದಾವಣಗೆರೆಗೆ ವಿಂಟೇಜ್ ಯುದ್ಧ, ವಿಮಾನ ಮಂಜೂರಿಗೆ ಸಂಸದೆ ಮನವಿ
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಗುರುವಾರ ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ಜಿಲ್ಲೆಯ ಹಿತದೃಷ್ಟಿಯಿಂದ ಎರಡು ಪ್ರಮುಖ ಬೇಡಿಕೆಗಳನ್ನು ಒಳಗೊಂಡ ಮನವಿ ಸಲ್ಲಿಸಿದರು.ದಾವಣಗೆರೆಯ ಅಮರ್ ಜವಾನ್ ಪಾರ್ಕ್‌ನಲ್ಲಿ ಸ್ಥಾಪಿಸಲು ಸೇವೆಯಿಂದ ನಿವೃತ್ತಿಗೊಳಿಸಲಾದ (ಡಿ-ಕಮಿಷನ್ಡ್) ಒಂದು ವಿಂಟೇಜ್ ಯುದ್ಧ ಟ್ಯಾಂಕ್ ಹಾಗೂ ಒಂದು ಯುದ್ಧ ವಿಮಾನ ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ. ಈ ಯೋಜನೆ ದೇಶಕ್ಕಾಗಿ ತ್ಯಾಗ ಮಾಡಿದ ವೀರಯೋಧರಿಗೆ ಶಾಶ್ವತ ಗೌರವ ಸಲ್ಲಿಸುವುದರ ಜೊತೆಗೆ, ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿ ದೇಶಭಕ್ತಿ ಮತ್ತು ಭಾರತೀಯ ಸಶಸ್ತ್ರ ಪಡೆಗಳ ಇತಿಹಾಸ ಹಾಗೂ ಕಾರ್ಯ ಚಟುವಟಿಕೆಗಳ ಕುರಿತು ಅರಿವು ಮೂಡಿಸಲು ಸಹಕಾರಿಯಾಗಲಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಇದರೊಂದಿಗೆ ದಾವಣಗೆರೆಯಲ್ಲಿ ಜಿಲ್ಲಾ ಸೈನಿಕ ಮಂಡಳಿ **(District Sainik Board)** ಯನ್ನು ಮರುಸ್ಥಾಪಿಸಿ, ಸಿಎಸ್‌ಡಿ ಮಳಿಗೆಯನ್ನು ಆರಂಭಿಸುವಂತೆ ಮತ್ತೊಂದು ಮನವಿ ಸಲ್ಲಿಸಿದ್ದಾರೆ. ಇದರಿಂದ ಮಾಜಿ ಸೈನಿಕರು, ವೀರನಾರಿಯರು ಹಾಗೂ ಅವರ ಕುಟುಂಬಗಳಿಗೆ ಅಗತ್ಯ ಕಲ್ಯಾಣ ಸೇವೆಗಳು, ಪಿಂಚಣಿ ಸಂಬಂಧಿತ ನೆರವು ಮತ್ತು ಸಿಎಸ್‌ಡಿ ಸೌಲಭ್ಯಗಳು ಜಿಲ್ಲೆಯಲ್ಲಿಯೇ ಸುಲಭವಾಗಿ ದೊರೆಯಲಿದ್ದು, ದೂರದ ಜಿಲ್ಲೆಗಳಿಗೆ ತೆರಳುವ ಅನಿವಾರ್ಯತೆ ತಪ್ಪಲಿದೆ ಎಂದು ಉಲ್ಲೇಖಿಸಿದ್ದಾರೆ.ಈ ಎರಡೂ ಮನವಿಗಳಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿ ಶೀಘ್ರ ಅನುಮೋದನೆ ನೀಡುವ ವಿಶ್ವಾಸವಿದೆ ಎಂದು ಡಾ. ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.
- - --6ಕೆಡಿವಿಜಿ33:
ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ಜಿಲ್ಲೆಯ ಹಿತದೃಷ್ಟಿಯಿಂದ ಎರಡು ಪ್ರಮುಖ ಬೇಡಿಕೆಗಳ ಮನವಿ ಪತ್ರಗಳನ್ನು ಸಲ್ಲಿಸಿದರು.
- - -
-9ಕೆಡಿವಿಜಿ42, 43:
ಮಾಯಕೊಂಡ ಕ್ಷೇತ್ರದ ಕಾಟನಾಯಕನಹಳ್ಳಿಯಲ್ಲಿ ಬೆಳೆ ಹಾನಿಗೊಳಗಾದ ರೈತರ ಜಮೀನುಗಳಿಗೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.