ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವುದರ ಜೊತೆಗೆ ಕಲಿಕಾ ಗುಣಮಟ್ಟವನ್ನು ಮತ್ತಷ್ಟು ಸುಧಾರಿಬೇಕು. ಈ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಸಾಧಿಸುವ ನಿಟ್ಟಿನಲ್ಲಿ ಶಿಕ್ಷಕರು, ಅಧಿಕಾರಿಗಳು ಹಾಗೂ ಶಿಕ್ಷಣ ಸುಧಾರಣಾ ಸಮಿತಿಯ ಸದಸ್ಯರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಸಚಿವ ರುದ್ರಪ್ಪ ಲಮಾಣಿ ಹೇಳಿದರು.
ಹಾವೇರಿ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಜತೆಗೆ ಕಲಿಕಾ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸಬೇಕು. ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ಸಾಧಿಸುವ ನಿಟ್ಟಿನಲ್ಲಿ ಶಿಕ್ಷಕರು, ಅಧಿಕಾರಿಗಳು ಹಾಗೂ ಶಿಕ್ಷಣ ಸುಧಾರಣಾ ಸಮಿತಿಯ ಸದಸ್ಯರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಸಚಿವ ರುದ್ರಪ್ಪ ಲಮಾಣಿ ಹೇಳಿದರು.
ನಗರದ ಜಿಲ್ಲಾ ಗುರುಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ವಿಧಾನಸಭಾ ಮತಕ್ಷೇತ್ರ ಮಟ್ಟದ ಶಿಕ್ಷಣ ಸುಧಾರಣಾ ಸಮಿತಿ ಹಾಗೂ ತಾಲೂಕು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಾಲೆಗಳ ಮುಖ್ಯ ಶಿಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ಸಹಕಾರ ನೀಡಲಾಗುವುದು. ಶಾಲಾ ಕಟ್ಟಡ, ಶೌಚಾಲಯ, ಕುಡಿಯುವ ನೀರು, ಶಾಲಾ ಆವರಣ ಹಾಗೂ ಇತರ ಮೂಲಸೌಕರ್ಯಗಳ ಅಭಿವೃದ್ಧಿಗೆ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸುವುದು ಇಂದಿನ ಪ್ರಮುಖ ಅಗತ್ಯವಾಗಿದೆ. ಆಂಗ್ಲ ಮಾಧ್ಯಮದತ್ತ ಪೋಷಕರು ಹೆಚ್ಚಿನ ಒಲವು ತೋರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿಯೇ ಗುಣಮಟ್ಟದ ಶಿಕ್ಷಣದೊಂದಿಗೆ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸುವ ಮೂಲಕ ಮಕ್ಕಳನ್ನು ಪ್ರಾಥಮಿಕ ಹಂತದಿಂದಲೇ ಸರ್ಕಾರಿ ಶಾಲೆಗಳತ್ತ ಆಕರ್ಷಿಸಬೇಕು ಎಂದು ತಿಳಿಸಿದರು.
ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ ಮೂಲಕ ಎಲ್‌ಕೆಜಿಯಿಂದ ಪಿಯುಸಿ ವರೆಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಇಂತಹ ಶಾಲೆಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಹಿಂದೆ ನಡೆದ ಚರ್ಚೆಗಳಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಇದರ ಮುಂದುವರಿದ ಭಾಗವಾಗಿ ಹಲವು ಶಾಲೆಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಶೇ. 98 ಫಲಿತಾಂಶ ಸಾಧನೆಗೆ ಶಿಕ್ಷಕರ ಶ್ರಮ ಕಾರಣ..
ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ರಾಜ್ಯದಲ್ಲಿ ಉತ್ತಮ ಸಾಧನೆ ಕಂಡುಬಂದಿರುವುದು ಸಂತಸದ ಸಂಗತಿಯಾಗಿದೆ. ಹಾವೇರಿ ಜಿಲ್ಲೆ ಹಾಗೂ ತಾಲೂಕಿನಲ್ಲಿ ಉತ್ತಮ ಫಲಿತಾಂಶ ದಾಖಲಾಗಲು ಶಿಕ್ಷಕರು ಹಗಲು-ರಾತ್ರಿ ಶ್ರಮಿಸಿದ್ದಾರೆ. ಈ ಸಾಧನೆಯನ್ನು ಮುಂದುವರಿಸಿಕೊಂಡು ಮುಂದಿನ ದಿನಗಳಲ್ಲಿ ಶೇ. 100ರಷ್ಟು ಫಲಿತಾಂಶ ಸಾಧಿಸುವ ಗುರಿ ಹೊಂದಬೇಕು. ಶಿಕ್ಷಣ ಸುಧಾರಣಾ ಸಮಿತಿಯು ನಿಯಮಿತವಾಗಿ ಸಭೆ ನಡೆಸಬೇಕು. ಕನಿಷ್ಠ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ, ಶಾಲೆಗಳಲ್ಲಿನ ಸಮಸ್ಯೆಗಳು, ಮಕ್ಕಳ ದಾಖಲಾತಿ, ಕಲಿಕಾ ಗುಣಮಟ್ಟ ಹಾಗೂ ಮೂಲಸೌಕರ್ಯಗಳ ಕುರಿತು ಚರ್ಚೆ ನಡೆಸಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಶ್ರೀನಿವಾಸ್ ಶಿಕ್ಷಣ ಇಲಾಖೆಯ ಪ್ರಗತಿ ಕುರಿತು ಮಾಹಿತಿ ನೀಡಿ, 2026-27ನೇ ಸಾಲಿನಲ್ಲಿ 1ರಿಂದ 10ನೇ ತರಗತಿ ವರೆಗೆ 47,671 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಹಾವೇರಿ ತಾಲೂಕಿನಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 97.41ರಷ್ಟು ಫಲಿತಾಂಶ ದಾಖಲಾಗಿದ್ದು, ಹಿಂದಿನ ಸಾಲಿನ ಶೇ. 69.73ಕ್ಕೆ ಹೋಲಿಸಿದರೆ ಗಣನೀಯ ಪ್ರಗತಿ ಸಾಧಿಸಲಾಗಿದೆ ಎಂದು ವಿವರಿಸಿದರು.
ಫಲಿತಾಂಶ ಸುಧಾರಣೆಗೆ ಪರಿಹಾರ ಬೋಧನೆ, ವಿಶೇಷ ತರಗತಿಗಳು, ವಿದ್ಯಾರ್ಥಿಗಳ ಗುಂಪು ರಚನೆ, ಶಿಕ್ಷಕರಿಂದ ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸುವ ಮಾದರಿಯ ಮಾರ್ಗದರ್ಶನ, ವಿದ್ಯಾರ್ಥಿಗಳೊಂದಿಗೆ ದೂರವಾಣಿ ಮೂಲಕ ನಿರಂತರ ಸಂಪರ್ಕ, ಪಾಠಾಧಾರಿತ ಮೌಲ್ಯಮಾಪನ, ಬ್ಲೂಪ್ರಿಂಟ್ ಹಾಗೂ ಮಾದರಿ ಪ್ರಶ್ನೆಪತ್ರಿಕೆಗಳ ಆಧಾರದ ಮೇಲೆ ತರಬೇತಿ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಜತೆಗೆ ಶಾಲೆಗಳಲ್ಲಿ ಸ್ವಚ್ಛತೆ, ಮಕ್ಕಳ ಸುರಕ್ಷತೆ ಹಾಗೂ ಕಲಿಕೆಗೆ ಆದ್ಯತೆ ನೀಡಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಅಂಗವಿಕಲ ಮಕ್ಕಳಿಗೆ ಕಲಿಕಾ ಉಪಕರಣಗಳನ್ನು ವಿತರಿಸಲಾಯಿತು.
ಸಭೆಯಲ್ಲಿ ಉಪನಿರ್ದೇಶಕ ಮೋಹನ್ ದಂಡಿನ್, ಸಹಾಯಕ ಕಾರ್ಯಪಾಲಕ ಅಭಿಯಂತರ ಪಂಚಾಯತ್ ರಾಜ್ ಇಲಾಖೆ ಕಿರಣ್ ಕುಮಾರ್ ನಾಯಕ್, ಸವಣೂರು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ. ಭಗವತ್‌ಗೌಡ, ನಗರಸಭೆ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಶಿಕ್ಷಣ ಸುಧಾರಣಾ ಸಮಿತಿಯ ಸದಸ್ಯರು, ಅಧಿಕಾರಿಗಳು ಹಾಗೂ ವಿವಿಧ ಶಾಲೆಗಳ ಶಿಕ್ಷಕರು ಉಪಸ್ಥಿತರಿದ್ದರು.
46 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ: ತಾಲೂಕಿನ 46 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸಲಾಗಿದ್ದು, ಸುಮಾರು 2,000 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಇದರಲ್ಲಿ ಆರು ಶಾಲೆಗಳಲ್ಲಿ ಎಸ್‌ಡಿಎಂಸಿ ಸದಸ್ಯರು ಸ್ವಯಂಪ್ರೇರಣೆಯಿಂದ ತರಗತಿಗಳನ್ನು ನಡೆಸುತ್ತಿದ್ದಾರೆ. ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸಲು ಎರಡು ಹಂತಗಳಲ್ಲಿ ಒಟ್ಟು 164 ಅತಿಥಿ ಶಿಕ್ಷಕರನ್ನು ನಿಯೋಜಿಸಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಇಒ ಬಿ. ಶ್ರೀನಿವಾಸ ಹೇಳಿದರು.
ಶಿಕ್ಷಕರು ರಾಜಕೀಯ ಚಟುವಟಿಕೆಯಿಂದ ದೂರವಿದ್ದು, ಮಕ್ಕಳ ಕಲಿಕೆ ಮತ್ತು ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಬೇಕು. ಶಾಲೆಗಳಲ್ಲಿನ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬೇಕು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಹ ಶಾಲೆಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಅರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಸಚಿವ ರುದ್ರಪ್ಪ ಲಮಾಣಿ ಹೇಳಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.