ಶಿಗ್ಗಾಂವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ರಾಜ್ಯಾದ್ಯಂತ ಕಾವು ಪಡೆದುಕೊಂಡಿದೆ. ಈ ಬೆನ್ನಲ್ಲೇ ಶಿಗ್ಗಾಂವಿ ಪಟ್ಟಣದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಹಾಗೂ ಶಾಸಕ ಯಾಸೀರಖಾನ್ ಪಠಾಣ್ ಅವರ ವಾಹನಗಳನ್ನು ತಡೆದ ರೈತರು ಟ್ರ್ಯಾಕ್ಟರ್ ಅಡ್ಡ ನಿಲ್ಲಿಸಿ, ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶನಿವಾರ ನಡೆಯಿತು.
ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹5,500 ಬೆಲೆ ನಿಗದಿಪಡಿಸಬೇಕು. ಸೂಕ್ತ ದರ ಘೋಷಣೆಯಾಗುವವರೆಗೆ ಯಾವುದೇ ಸಕ್ಕರೆ ಕಾರ್ಖಾನೆಗಳು ಕಬ್ಬು ಅರೆಯುವಿಕೆ ಪ್ರಾರಂಭಿಸಬಾರದು, ಕಬ್ಬಿನ ಇಳುವರಿ ಮತ್ತು ಸಕ್ಕರೆ ಅಂಶದ (ರಿಕವರಿ) ಆಧಾರದ ಮೇಲೆ ವೈಜ್ಞಾನಿಕ ದರ ನಿಗದಿಪಡಿಸಿ ಬೆಳೆಗಾರರಿಗೆ ನ್ಯಾಯ ಒದಗಿಸುವುದು ಸೇರಿದಂತೆ ಹಲವಾರು ಬೇಡಿಕೆಗಳ ಕುರಿತು ಹಲವು ದಿನಗಳಿಂದ ಸತತವಾಗಿ ಹೋರಾಟ ನಡೆಸುತ್ತಿದ್ದರೂ ಸರ್ಕಾರಗಳು ಸೂಕ್ತವಾಗಿ ಸ್ಪಂದಿಸದ ಕಾರಣ, ರೈತರು ಜನಪ್ರತಿನಿಧಿಗಳ ಗಮನ ಸೆಳೆಯಲು ಈ ಹಾದಿ ತುಳಿದಿದ್ದಾರೆ, ಕಬ್ಬಿಗೆ ಸೂಕ್ತ ಬೆಲೆ ಸಿಗುವವರೆಗೂ ಹೋರಾಟವನ್ನು ಹಿಂಪಡೆಯುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿರುವ ಬೆಳೆಗಾರರು, ಗ್ರಾಮೀಣ ಭಾಗಗಳಲ್ಲೂ ರಸ್ತೆ ತಡೆ ನಡೆಸಿ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.
ಶಾಸಕ ಪಠಾಣ್ ಭರವಸೆಗೆ ಸ್ಪಂದಿಸದ ರೈತರು :ಪ್ರತಿಭಟನಾ ಸ್ಥಳಕ್ಕೆ ಶಾಸಕ ಯಾಸೀರಖಾನ್ ಪಠಾಣ್ ಅವರು ಆಗಮಿಸಿ ರೈತರೊಂದಿಗೆ ಮಾತನಾಡಿ, ಅವರ ಸಮಸ್ಯೆಗಳನ್ನು ಆಲಿಸಲು ಹಾಗೂ ಬೇಡಿಕೆಗಳ ಕುರಿತು ಸ್ಪಂದಿಸಲು ಪ್ರಯತ್ನಿಸಿದರು. ಆದರೆ, ರೈತರು ಕೇವಲ ಭರವಸೆಗಳಿಗೆ ಸಮಾಧಾನಗೊಳ್ಳದೆ ಕಬ್ಬಿಗೆ ಸೂಕ್ತ ದರ ನಿಗದಿಪಡಿಸುವ ಕುರಿತು ಸ್ಪಷ್ಟ ನಿರ್ಧಾರ ಪ್ರಕಟಿಸಬೇಕು ಎಂದು ಪಟ್ಟುಹಿಡಿದರು.
31ಎಸ್‌ಜಿಎನ್3 : ಶಿಗ್ಗಾಂವಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಶಾಸಕ ಪಠಾಣ್ ಅವರು ರೈತರೊಂದಿಗೆ ಸಮಸ್ಯೆಗಳನ್ನು ಆಲಿಸಲು ಪ್ರಯತ್ನಿಸಿದರು.