ಹಾವೇರಿ: ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜ.11ರಂದು ಬೆಳಗ್ಗೆ 11ಕ್ಕೆ ಸಂಸದರ ಕ್ರೀಡಾ ಮಹೋತ್ಸವ ನಡೆಯಲಿದ್ದು, ಹಾವೇರಿ ವಿಧಾನಸಭಾ ಕ್ಷೇತ್ರದ ಕ್ರೀಡಾಪಟುಗಳು ಪಾಲ್ಗೊಳ್ಳಬೇಕೆಂದು ಯುವ ಮುಖಂಡ ಭರತ ಬೊಮ್ಮಾಯಿ ಹೇಳಿದರು.ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಸಂಸದರ ಕ್ರೀಡಾ ಮಹೋತ್ಸವ ಪ್ರಯುಕ್ತ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.ಫಿಟ್ ಇಂಡಿಯಾ ಕಲ್ಪನೆಯಿಂದ ಪ್ರಧಾನಿ ನರೇಂದ್ರ ಮೋದಿಯವರು ಎಲ್ಲ ಸಂಸದರ ಕ್ಷೇತ್ರಗಳಲ್ಲಿ ಭಾರತೀಯ ಕ್ರೀಡೆಗಳನ್ನು ಒಳಗೊಂಡಂತೆ ಸಂಸದರ ಕ್ರೀಡಾ ಮಹೋತ್ಸವ ಏರ್ಪಡಿಸಲು ಸೂಚಿಸಿದ್ದಾರೆ. ಹಾವೇರಿ-ಗದಗ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯುವಜನ ಸೇವೆ ಹಾಗೂ ಕ್ರೀಡಾ ಇಲಾಖೆ, ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ ಮೊದಲ ಕಾರ್ಯಕ್ರಮ ಹಾವೇರಿ ವಿಧಾನಸಭಾ ಕ್ಷೇತ್ರದಲ್ಲಿ ಜ. 10ರಂದು ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ಖೋಖೋ, ಕಬಡ್ಡಿ, ವಾಲಿಬಾಲ್, 100ಮೀ.ಓಟ, 100/4 ರೀಲೆ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ ಸ್ಪರ್ಧೆಗಳು 16 ವರ್ಷ ಮೇಲ್ಪಟ್ಟ ಯುವಕ ಯುವತಿಯರಿಗೆ ಜರುಗಲಿವೆ. ಹಾವೇರಿ ವಿಧಾನಸಭಾ ಕ್ಷೇತ್ರದ ಸ್ಪರ್ಧಾಳುಗಳು ಕ್ರೀಡೆಯಲ್ಲಿ ಭಾಗವಹಿಸಬಹುದು. ನಂತರ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದ ಅಭ್ಯರ್ಥಿಗಳು ಲೋಕಸಭಾ ಕ್ಷೇತ್ರದ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದರು.ಮೊದಲ ಕ್ರೀಡಾಕೂಟದ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಸೇರಿದಂತೆ ಜಿಲ್ಲೆಯ ಮಾಜಿ ಸಚಿವರು, ಶಾಸಕರು, ಮುಖಂಡರು ಭಾಗವಹಿಸುವರು. ನಂತರ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಬೇರೆ ಬೇರೆ ದಿನಾಂಕಗಳಂದು ಸಂಸದರ ಖೇಲ್ ನಡೆಯಲಿದೆ ಎಂದು ತಿಳಿಸಿದರು.ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಸಂಸದರ ಖೇಲ್ ಸ್ಪರ್ಧೆಯು ದೇಶಿಯ ಕ್ರೀಡೆಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಂಡ ನಂತರ ಸ್ವದೇಶಿ ಪರಿಕಲ್ಪನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ. ರಾಷ್ಟ್ರದ ಎಲ್ಲ ಸಂಸದರ ಕ್ಷೇತ್ರಗಳಲ್ಲಿ ಕ್ರೀಡೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಸಂಸದರ ಖೇಲ್ ಆಯೋಜಿಸಲಾಗಿದೆ. ಆದ್ದರಿಂದ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಕ್ರೀಡೆ ಜರಗುವುದರಿಂದ ಕ್ರೀಡಾಪಟುಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.ಸಭೆಯಲ್ಲಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಭೋಜರಾಜ ಕರೂದಿ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ನಿಸ್ಸೀಮಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಡಾ. ಸಂತೋಷ ಆಲದಕಟ್ಟಿ, ನಂಜುಂಡೇಶ ಕಳ್ಳೇರ, ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣವರ, ಶಹರ ಅಧ್ಯಕ್ಷ ಕಿರಣ ಕೊಳ್ಳಿ, ಗ್ರಾಮೀಣ ಘಟಕದ ಅಧ್ಯಕ್ಷ ಮಾರುತಿ ಗೊರವರ, ಬಸವರಾಜ ಕೊಳಿವಾಡ ಸೇರಿದಂತೆ ಇತರರು ಇದ್ದರು.