ಕನ್ನಡಪ್ರಭ ವಾರ್ತೆ ಮಂಡ್ಯ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಅಕ್ರಮದ ವಿರುದ್ಧ ಹೋರಾಟ ನಡೆಸಲು ಮೈಸೂರಿಗೆ ಹೊರಟು ನಿಂತಿದ್ದ ಬಿಜೆಪಿ ಮುಖಂಡರು-ಕಾರ್ಯಕರ್ತರನ್ನು ಪೊಲೀಸರು ಮಂಡ್ಯದಲ್ಲಿ ವಶಕ್ಕೆ ಪಡೆದರು.ಬಿಜೆಪಿ ಪಕ್ಷದ ಕಚೇರಿಯಿಂದ ಮೆರವಣಿಗೆ ಮೂಲಕ ಜಯಚಾಮರಾಜೇಂದ್ರ ಒಡೆಯರ್ ವೃತ್ತಕ್ಕೆ ಬಂದ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದೊಯ್ದರು.
ಪಕ್ಷದ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಡಾ.ಸಿದ್ದರಾಮಯ್ಯ, ಅಶೋಕ್ ಜಯರಾಮು, ಸಾದೊಳಲು ಸ್ವಾಮಿ, ಬಿಜೆಪಿ ಯುವ ಘಟಕದ ಅಧ್ಯಕ್ಷ ಎಚ್.ಎಂ.ರಘುಗೌಡ ವಿವೇಕ್, ಸಿ.ಟಿ.ಮಂಜುನಾಥ್ ಸೇರಿ ಐವತ್ತಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸ್ ವಾಹನದಲ್ಲಿ ಪೆರೇಡ್ ಮೈದಾನಕ್ಕೆ ಕರೆದುಕೊಂಡು ಹೋಗಲಾಯಿತು.ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ಹೋರಾಟ ನಡೆಸಲು ಮುಂದಾಗಿದ್ದ ಬಿಜೆಪಿ ಪಕ್ಷದ ನಾಯಕರನ್ನು ಪೊಲೀಸ್ ಬಲಪ್ರಯೋಗಿಸಿ ಬಂಧಿಸುವ ಮೂಲಕ ಹೋರಾಟ ಹತ್ತಿಕ್ಕಲು ಮುಂದಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸಿರುವ ರಾಜ್ಯ ಸರ್ಕಾರ ಬಿಜೆಪಿ ನಾಯಕರನ್ನು ಬಂಧನದಿಂದ ಮುಕ್ತಗೊಳಿಸಬೇಕು ಎಂದು ಒತ್ತಾಯಿಸಿದರು.ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ ಮಾತನಾಡಿ, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ರಮ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಅವರು ಅನೇಕ ತಪ್ಪು ಮಾಹಿತಿಗಳನ್ನು ನೀಡುತ್ತಿದ್ದು, ಮುಖವಾಡ ಕಳಚಿ ಬಿದ್ದಿದೆ ಎಂದು ದೂರಿದರು.
ಮುಖ್ಯಮಂತ್ರಿಗಳಿಗೆ ಅಧಿಕಾರದಲ್ಲಿ ಮುಂದುವರೆಯುವ ಯಾವ ನೈತಿಕತೆಯೂ ಇಲ್ಲ. ಅಧಿಕಾರ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರು. ಬೆಲೆ ಬಾಳು ಜಮೀನನ್ನು ಕಬಳಿಕೆ ಮಾಡಿದ್ದಾರೆ. ನುಡಿದಂತೆ ನಡೆದಿದ್ದೇವೆ ಎಂದು ಭಂಡತನಕ್ಕೆ ಬಿದ್ದು ತಾವು ಮಾಡಿರುವ ತಪ್ಪನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ನೀವು ಪ್ರಾಮಾಣಿಕರಾಗಿದ್ದರೆ ನಿವೇಶನ ಹಂಚಿಕೆ ಪ್ರಕರಣವನ್ನು ಸಿಬಿಐಗೆ ಕೊಡಲು ಮೀನಾಮೇಷ ಎಣಿಸುತ್ತಿರುವುದೇಕೆ? ಈ ಪ್ರಕರಣವನ್ನು ಎಸ್‌ಐಟಿಗೆ ಕೊಟ್ಟರೆ ತಿಪ್ಪೆ ಸವರುವ ಕೆಲಸ ಮಾಡುತ್ತಾರೆ ಎಂದು ದೂರಿದರು.ಬಿಜೆಪಿ ಯುವ ಘಟಕದ ಅಧ್ಯಕ್ಷ ಎಚ್.ಎಂ.ರಘುಗೌಡ ಮಾತನಾಡಿ, 62 ಕೋಟಿ ರು.ಗೂ ಹೆಚ್ಚು ಬೆಲೆ ಬಾಳುವ ನಿವೇಶನಗಳನ್ನು ಮಂಜೂರಾತಿ ಮಾಡಿಕೊಂಡಿದ್ದು, ಅಕ್ರಮ ಅವ್ಯವಹಾರ ನಡೆಸಿ ಪರಿಹಾರ ಕೇಳಿದ ಮುಖ್ಯಮಂತ್ರಿ ದೇಶದಲ್ಲಿ ಸಿದ್ದರಾಮಯ್ಯ ಒಬ್ಬರೇ ಎಂದು ಟೀಕಿಸಿದರು.
ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಅಗ್ರಹಿಸಿದರು.