ಕನ್ನಡಪ್ರಭ ವಾರ್ತೆ ಮದ್ದೂರು
ಎರಡನೇ ದಿನವೂ ನೌಕರರು ಕೆಲಸಕ್ಕೆ ಹಾಜರಾಗಲಿಲ್ಲ. ಇದರಿಂದ ಸಾರ್ವಜನಿಕರು ವಾಪಸ್ ಹೋಗುತ್ತಿದ್ದ ದೃಶ್ಯ ಕಂಡು ಬಂತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ, ರಾಜ್ಯದ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಪೌರ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ ಎಂದರು.ಬೇಡಿಕೆಗಳ ಈಡೇರಿಕೆಗಾಗಿ ಮನವಿ ಸಲ್ಲಿಸಿ 45 ದಿನಗಳಾದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಪ್ರತಿಭಟನೆಯು ಅನಿವಾರ್ಯವಾಗಿದೆ ಎಂದು ಕಿಡಿಕಾರಿದರು.
ದಿನಗೂಲಿ ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರನ್ನು ಕಾಯಂ, ಎಲ್ಲಾ ನೌಕರರಿಗೆ ಎಸ್ ಎಫ್ ಸಿ ಮುಕ್ತ ನಿಧಿಯಿಂದ ವೇತನ ನೀಡಬೇಕು. ಸರ್ಕಾರ ನಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ಮಾಡಿ ಕಚೇರಿಗಾಗಲಿ ಅಥವಾ ಸ್ವಚ್ಛತೆಗಾಗಲಿ ಹೋಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಗೌರವಾಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ಶಿವಣ್ಣ, ಕಾರ್ಯದರ್ಶಿ ರಘು, ಜಿಲ್ಲಾ ಸಂಚಾಲಕ ಪುರುಷೋತ್ತಮ, ಕುಮಾರ್, ಬಾಬು, ಪುಟ್ಟಸ್ವಾಮಿ, ಶ್ರೀಧರ್ ಮತ್ತಿತರರು ಇದ್ದರು.